ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾರೆಡ್ಡಿಗೆ ಬೆದರಿಕೆ ಕರೆ: ದೂರು ದಾಖಲು

Update: 2018-03-24 17:21 GMT

ಬೆಂಗಳೂರು, ಮಾ.24: ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಅಧ್ಯಕ್ಷ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾರೆಡ್ಡಿಗೆ ಅಪರಿಚತರಿಂದ ಬೆದರಿಕೆ ಕರೆಗಳು ಬರುತ್ತಿರುವುದರ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಕುರಿತು ಮಾಹಿತಿ ನೀಡಿದ ರವಿಕೃಷ್ಣಾರೆಡ್ಡಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಹೀಗಾಗಿ ಕಳೆದ ಮೂರು ತಿಂಗಳಿಂದ ನಾನು ಹಾಗೂ ನನ್ನ ಸಂಗಡಿಗರು ಮನೆ ಮನೆ ಪ್ರಚಾರ ಕಾರ್ಯ ಮಾಡುತ್ತಿದ್ದೇವೆ.

ಇಂದು ಮಧ್ಯಾಹ್ನ ಶಶಾಂಕ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ದೂರವಾಣಿ ಕರೆ ಮಾಡಿ, ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ನೀವು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಬಾರದು. ಒಂದು ವೇಳೆ ಸ್ಪರ್ಧಿಸಿದ್ದೇ ಆದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ ಎಂದು ತಿಳಿಸಿದರು.

ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಏಳು ವಾರ್ಡ್‌ಗಳು ಬರುತ್ತವೆ. ನಾನು ಮತ್ತು ನನ್ನ ಬೆಂಬಲಿಗರು ಮನೆ-ಮನೆ ಭೇಟಿಗಾಗಿ ಯಾವುದೆ ವಾರ್ಡ್‌ಗೆ ಹೋದರು, ವಾರ್ಡ್‌ನ ಕಾರ್ಪೊರೇಟರ್ ಬೆಂಬಲಿಗರು ನಮಗೆ ಬೆದರಿಕೆ ಹಾಕುತ್ತಿದ್ದಾರೆ. ಇಂತಹ ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ. ಬೆದರಿಕೆ ಹಾಕಿದವರ ವಿರುದ್ಧ ಕಾನೂನಾತ್ಮಕ ಹೋರಾಟ ನಡೆಸುತ್ತೇನೆಂದು ಅವರು ಎಚ್ಚರಿಕೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News