×
Ad

ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ: ಕಾಂಗ್ರೆಸ್ ನಲ್ಲಿ ಗರಿಗೆದರಿದ ಚಟುವಟಿಕೆ

Update: 2018-03-27 19:37 IST

ಬೆಂಗಳೂರು, ಮಾ.27: ಕೇಂದ್ರ ಚುನಾವಣಾ ಆಯೋಗವು ರಾಜ್ಯ ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಣೆ ಮಾಡಿದ ಬೆನ್ನಲ್ಲೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಚಟುವಟಿಕೆಗಳು ಗರಿಗೆದರಿವೆ.

ಎಪ್ರಿಲ್ ಮೊದಲ ವಾರದಲ್ಲಿ 150ಕ್ಕೂ ಹೆಚ್ಚು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ನಿರ್ಧರಿಸಿರುವ ಕಾಂಗ್ರೆಸ್ ಪಕ್ಷವು, ಈಗಾಗಲೆ ಚುನಾವಣಾ ಸಮಿತಿಯ ಎರಡು ಸಭೆಗಳನ್ನು ನಡೆಸಿದೆ. 224 ಕ್ಷೇತ್ರಗಳ ಪೈಕಿ 80 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದ್ದು, 50 ಕ್ಷೇತ್ರಗಳಿಗೆ ಇಬ್ಬರು ಆಕಾಂಕ್ಷಿಗಳ ಹೆಸರನ್ನು ಪಟ್ಟಿ ಮಾಡಲಾಗಿದೆ. ನಿಷ್ಕ್ರಿಯರಾಗಿರುವ, ಅನಾರೋಗ್ಯಕ್ಕೀಡಾಗಿರುವ ಶಾಸಕರು ಪ್ರತಿನಿಧಿಸುತ್ತಿರುವ ಸುಮಾರು 20 ಕ್ಷೇತ್ರಗಳಲ್ಲಿ 3-4 ಹೆಸರುಗಳನ್ನು ಹೈಕಮಾಂಡ್‌ಗೆ ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಹಾಗೂ ಜಿಲ್ಲಾವಾರು ಪಕ್ಷದ ಸಂಘಟನೆ, ಚುನಾವಣೆಗೆ ಅನುಸರಿಸಬೇಕಾದ ರಣತಂತ್ರಗಳು, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಆರೋಪಕ್ಕೆ ತಕ್ಕ ತಿರುಗೇಟು ನೀಡುವುದು ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಲು ಬುಧವಾರ ಕಾಂಗ್ರೆಸ್ ಕಚೇರಿಯಲ್ಲಿ ಸರಣಿ ಸಭೆಗಳನ್ನು ಆಯೋಜಿಸಲಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಸರಣಿ ಸಭೆಗಳು ನಡೆಯಲಿದ್ದು, ಬೆಳಗ್ಗೆ 10.30ಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆ ನಡೆಯಲಿದೆ.

ಜಿಲ್ಲಾವಾರು ಪಕ್ಷದ ಸ್ಥಿತಿಗತಿ ಕುರಿತು ಜಿಲ್ಲಾಧ್ಯಕ್ಷರ ಮೂಲಕ ಮಾಹಿತಿ ಸಂಗ್ರಹಿಸಲಿರುವ ವೇಣುಗೋಪಾಲ್, ವಿಧಾನಸಭಾ ಕ್ಷೇತ್ರವಾರು ಮಾಹಿತಿಯನ್ನು ಪಡೆದು ಅಭ್ಯರ್ಥಿಗಳ ಆಯ್ಕೆ ಕುರಿತು ಮುಖಂಡರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಅಲ್ಲದೆ, ಚುನಾವಣೆ ಸಂದರ್ಭದಲ್ಲಿ ಅನುಸರಿಸಬೇಕಾದ ರಣತಂತ್ರಗಳ ಕುರಿತು ಮಾರ್ಗದರ್ಶನ ಮಾಡಲಿದ್ದಾರೆ.

ಮಾಜಿ ಕೇಂದ್ರ ಸಚಿವ ಡಾ.ಎಂ.ವೀರಪ್ಪಮೊಯ್ಲಿ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಸಮಿತಿ ಸಭೆಯು ಸಂಜೆ 4 ಗಂಟೆಗೆ ನಡೆಯಲಿದ್ದು, ಪ್ರಣಾಳಿಕೆ ಸಿದ್ಧಪಡಿಸುವ ಸಂಬಂಧ ಈವರೆಗೆ ನಡೆದಿರುವ ಬೆಳವಣಿಗೆಗಳು, ಪ್ರಾದೇಶಿಕ ಸಮಾನತೆ, ಕೃಷಿ ಜೊತೆಗೆ ಕೈಗಾರಿಕೆ ಒತ್ತು, ಯುವಕರು, ಮಹಿಳೆಯರು, ಅಹಿಂದ ವರ್ಗದವರು, ರೈತರ ಕಲ್ಯಾಣಕ್ಕೆ ಪ್ರಕಟಿಸಬೇಕಾದ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಯಲಿದೆ ಎನ್ನಲಾಗಿದೆ.

ಈ ಸಭೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷರಾದ ದಿನೇಶ್‌ಗುಂಡೂರಾವ್, ಎಸ್.ಆರ್. ಪಾಟೀಲ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಐಸಿಸಿ ಕಾರ್ಯದರ್ಶಿಗಳು ಸೇರಿದಂತೆ ಹಿರಿಯ ಮುಖಂಡರು ಪಾಲ್ಗೊಳ್ಳಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News