ಸಿಬಿಎಸ್‌ಇ ಮರು ಪರೀಕ್ಷೆ ದಿನಾಂಕ ಇನ್ನೆರಡು ದಿನಗಳಲ್ಲಿ ಘೋಷಣೆ

Update: 2018-03-29 11:20 GMT

ಹೊಸದಿಲ್ಲಿ, ಮಾ. 29: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ತನ್ನ ಮರು ಪರೀಕ್ಷಾ ದಿನಾಂಕಗಳನ್ನು ಇನ್ನೆರಡು ದಿನಗಳಲ್ಲಿ ಘೋಷಿಸಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಖಾತೆಯ ಸಚಿವ ಪ್ರಕಾಶ್ ಜಾವ್ಡೇಕರ್ ತಿಳಿಸಿದ್ದಾರೆ.

ಮಾ. 26ರಂದು ನಡೆದ ಹನ್ನೆರಡನೇ ತರಗತಿಯ ಅರ್ಥಶಾಸ್ತ್ರ ಪರೀಕ್ಷೆಯ ಪ್ರಶ್ನೆಪತ್ರಿಕೆ ಮತ್ತು ಮಾರ್ಚ್ 28ರಂದು ನಡೆದ ಹತ್ತನೇ ತರಗತಿಯ ಗಣಿತ ಪರೀಕ್ಷೆಯ ಪ್ರಶ್ನೆಪತ್ರಿಕೆ ಪರೀಕ್ಷೆ ಆರಂಭವಾಗುವ ಕೆಲವೇ ಗಂಟೆಗಳ ಮೊದಲು ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾದ ಹಿನ್ನೆಲೆಯಲ್ಲಿ ಮರುಪರೀಕ್ಷೆ ಅನಿವಾರ್ಯವಾಗಿದೆ.

ಮರುಪರೀಕ್ಷೆಗಳು ಯಾವುದೇ ಅಡೆತಡೆಗಳಿಲ್ಲದೆ ಸುಸೂತ್ರವಾಗಿ ನಡೆಯಲು ಎಲ್ಲಾ ಪ್ರಯತ್ನಗಳನ್ನು ನಡೆಸಬೇಕು ಎಂದು ಸುದ್ದಿಗಾರರೊಡನೆ ಮಾತನಾಡುತ್ತಾ ಜಾವ್ಡೇಕರ್ ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿಯೂ ಅವರು ತಿಳಿಸಿದರು.

ವಿದ್ಯಾರ್ಥಿಗಳು ಮತ್ತು ಹೆತ್ತವರ ನೋವು ನನಗೆ ಅರ್ಥವಾಗುತ್ತದೆ. ಶಿಕ್ಷಣ ಕ್ಷೇತ್ರದಲ್ಲಿನ ಅಪರಾಧಗಳನ್ನು ನಿಯಂತ್ರಿಸುವುದೇ ದೊಡ್ಡ ಸವಾಲಿನ ಕೆಲಸ ವಾಗಿದೆ ಎಂದು ಅವರು ಹೇಳಿದರು.

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಗಾಗಿ ದಿಲ್ಲಿ ಪೊಲೀಸ್ ಕ್ರೈಂ ಬ್ರಾಂಚ್ ವಿಶೇಷ ತನಿಖಾ ತಂಡವನ್ನು ರಚಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News