ಸನ್‌ರೈಸರ್ಸ್ ತಂಡಕ್ಕೆ ವಾರ್ನರ್ ಬದಲಿಗೆ ಹೇಲ್ಸ್

Update: 2018-03-31 18:54 GMT

ಹೈದರಾಬಾದ್, ಮಾ.31: ಮುಂಬರುವ ಐಪಿಎಲ್ ಟ್ವೆಂಟಿ-20 ಟೂರ್ನಮೆಂಟ್‌ಗೆ ಸನ್‌ರೈಸರ್ಸ್‌ ಹೈದರಾಬಾದ್ ತಂಡಕ್ಕೆ ಡೇವಿಡ್ ವಾರ್ನರ್ ಬದಲಿಗೆ ಇಂಗ್ಲೆಂಡ್‌ನ ಆರಂಭಿಕ ದಾಂಡಿಗ ಅಲೆಕ್ಸ್ ಹೇಲ್ಸ್ ಅವರನ್ನು ಸೇರಿಸಿಕೊಳ್ಳಲಾಗಿದೆ.

 ಹೇಲ್ಸ್ 1 ಕೋಟಿ ರೂ.ಗೆ ಹೈದರಾಬಾದ್ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.

 ದಕ್ಷಿಣ ಆಫ್ರಿಕ ವಿರುದ್ಧದ ಟೆಸ್ಟ್‌ನಲ್ಲಿ ಆಸ್ಟ್ರೇಲಿಯ ತಂಡದ ಮಾಜಿ ಉಪ ನಾಯಕ ಡೇವಿಡ್ ವಾರ್ನರ್‌ಗೆ ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ ಕ್ರಿಕೆಟ್ ಆಸ್ಟ್ರೇಲಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಒಂದು ವರ್ಷದ ನಿಷೇಧ ವಿಧಿಸಿರುವ ಹಿನ್ನೆಲೆಯಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡದಿಂದ ಹೊರಗುಳಿಯುವಂತಾಗಿದೆ. ಹೇಲ್ಸ್ ಮುಂಬರುವ ಐಪಿಎಲ್ ಟ್ವೆಂಟಿ-20 ಟೂರ್ನಿಯಲ್ಲಿ ಹೈದರಾಬಾದ್ ತಂಡದ ಪರ ಶಿಖರ್ ಧವನ್ ಜೊತೆ ಇನಿಂಗ್ಸ್ ಆರಂಭಿಸಲಿದ್ದಾರೆ. ಹೇಲ್ಸ್ ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಶತಕ ದಾಖಲಿಸಿರುವ ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ. ಐಸಿಸಿ ಟ್ವೆಂಟಿ-20 ಕ್ರಿಕೆಟ್ ಆಟಗಾರರ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರ 10ರಲ್ಲಿ ಸ್ಥಾನ ಪಡೆದಿರುವ ಏಕೈಕ ಆಟಗಾರ ಹೇಲ್ಸ್.

 ಹೇಲ್ಸ್ 2015ರ ಆವೃತ್ತಿಯಲ್ಲಿ ಐಪಿಎಲ್ ಮುಂಬೈ ತಂಡದ ಪರ ಐಪಿಎಲ್ ಪ್ರವೇಶಿಸಿದ್ದರು.

 29ರ ಹರೆಯದ ಹೇಲ್ಸ್ ಬಿಗ್ ಬ್ಯಾಶ್ ಲೀಗ್(ಬಿವಿಎಲ್), ಪಾಕಿಸ್ತಾನ ಸೂಪರ್ ಲೀಗ್(ಪಿಎಸ್‌ಎಲ್) ಮತ್ತು ಬಾಂಗ್ಲಾದೇಶ ಪ್ರೀಮಿಯರ್ ಲೀಗ್(ಬಿಪಿಎಲ್)ನಲ್ಲಿ ಆಡಿದ್ದರು.

174 ಟ್ವೆಂಟಿ-20 ಪಂದ್ಯಗಳಲ್ಲಿ ಹೇಲ್ಸ್ 28.85 ಸರಾಸರಿಯಂತೆ 4,704 ರನ್, 2 ಶತಕ ಮತ್ತು 30 ಅರ್ಧಶತಕಗಳನ್ನು ಗಳಿಸಿದ್ದಾರೆ.

ಸನ್‌ರೈಸರ್ಸ್‌ ಹೈದರಾಬಾದ್ ತಂಡ ಎ.9ರಂದು ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸುವ ಮೂಲಕ 2018ರ ಐಪಿಎಲ್ ಆವೃತ್ತಿಯಲ್ಲಿ ಅಭಿಯಾನ ಆರಂಭಿಸಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News