ಮತದಾರರ ಪಟ್ಟಿಯಿಂದ ಲಕ್ಷಾಂತರ ಅಲ್ಪಸಂಖ್ಯಾತರ ಹೆಸರು ನಾಪತ್ತೆ: ಮುಖ್ಯ ಚುನಾವಣಾಧಿಕಾರಿಗೆ ಕಾಂಗ್ರೆಸ್ ದೂರು

Update: 2018-04-02 15:32 GMT

ಬೆಂಗಳೂರು, ಎ.2: ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರ ಹೆಸರುಗಳು ಮತದಾರರ ಪಟ್ಟಿಯಿಂದ ನಾಪತ್ತೆಯಾಗಿರುವ ಕುರಿತು ಕಾಂಗ್ರೆಸ್ ನಿಯೋಗವು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಸೋಮವಾರ ನಗರಾಭಿವೃದ್ಧಿ ಸಚಿವ ರೋಷನ್‌ಬೇಗ್ ನೇತೃತ್ವದ ನಿಯೋಗವು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ಕುಮಾರ್‌ರನ್ನು ಭೇಟಿ ಮಾಡಿ ಖಾಸಗಿ ಸಂಸ್ಥೆಯೊಂದು ನಡೆಸಿರುವ ಸಮೀಕ್ಷೆಯ ಪ್ರಕಾರ ರಾಜ್ಯದಲ್ಲಿ ಮುಸ್ಲಿಮರ ಸುಮಾರು 18 ಲಕ್ಷ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ನಾಪತ್ತೆಯಾಗಿದೆ ಎಂದು ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ಆಗಿರುವ ಈ ಲೋಪವನ್ನು ಸರಿಪಡಿಸಿ, ರಾಜ್ಯದಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಅವಕಾಶ ಮಾಡಿಕೊಡಬೇಕು. ಅರ್ಹ ಮತದಾರರು ತಮ್ಮ ಹಕ್ಕನ್ನು ಚಲಾಯಿಸುವುದರಿಂದ ಅವಕಾಶ ವಂಚಿತರಾಗಬಾರದು ಈ ಸಂಬಂಧ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ನಿಯೋಗ ಮನವಿ ಸಲ್ಲಿಸಿತು.

ನಿಯೋಗದಲ್ಲಿ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಸೀರ್‌ಅಹ್ಮದ್, ರಾಜ್ಯಸಭಾ ಸದಸ್ಯ ಡಾ.ಸೈಯದ್ ನಸೀರ್ ಹುಸೇನ್, ಮುಖಂಡರಾದ ಸೂರಜ್ ಹೆಗ್ಡೆ, ಬ್ರಿಜೇಶ್ ಕಾಳಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News