ಸಿಬಿಎಸ್ ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಸಚಿವ ಪ್ರಕಾಶ್ ಜಾವಡೇಕರ್ ರಾಜೀನಾಮೆಗೆ ರಾಜೀವ್ ಗೌಡ ಒತ್ತಾಯ
ಬೆಂಗಳೂರು, ಎ.2: ಸಿಬಿಎಸ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ರಾಜೀನಾಮೆ ನೀಡುವ ಮೂಲಕ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಅನುವು ಮಾಡಿಕೊಡಬೇಕೆಂದು ಎಐಸಿಸಿ ಸಂಶೋಧನಾ ವಿಭಾಗದ ಅಧ್ಯಕ್ಷ ಪ್ರೊ.ರಾಜೀವ್ ಗೌಡ ಒತ್ತಾಯಿಸಿದ್ದಾರೆ.
ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರಕ್ಕೆ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯ ಕುರಿತು ಕಿಂಚಿತ್ತೂ ಕಾಳಜಿಯಿಲ್ಲ ಎಂಬುದಕ್ಕೆ ಸಿಬಿಎಸ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.
ಸಿಬಿಎಸ್ಸಿ 10 ಮತ್ತು 12ನೆ ತರಗತಿ ಪರೀಕ್ಷೆಯು ವಿದ್ಯಾರ್ಥಿಗಳ ಭವಿಷ್ಯದಲ್ಲಿ ಅತ್ಯಂತ ಮುಖ್ಯವಾದ ಘಟ್ಟವಾಗಿದೆ. ಹೀಗಾಗಿ ಅತ್ಯಂತ ಕಾಳಜಿ ವಹಿಸಿ ಎಲ್ಲಿಯೂ ಅಕ್ರಮ ನಡೆಯದಂತೆ ಎಚ್ಚರಿಕೆಯಿಂದ ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ. ಆದರೆ, ಇದರ ಉಸ್ತುವಾರಿಯನ್ನು ನೋಡಿಕೊಳ್ಳಬೇಕಾದ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ತಮ್ಮ ಪಕ್ಷದ ಚುನಾವಣಾ ಪ್ರಚಾರಕ್ಕಾಗಿ ದೇಶಾದ್ಯಂತ ಸುತ್ತುತ್ತಿದ್ದಾರೆಯೆ ವಿನಃ ಪರೀಕ್ಷೆಯ ಕುರಿತು ಕಿಂಚಿತ್ತೂ ಯೋಚಿಸುತ್ತಿಲ್ಲ. ಹೀಗಾಗಿ ಇಂತಹ ಸಚಿವರು ಜವಾಬ್ದಾರಿಯುತ ಸ್ಥಾನದಲ್ಲಿ ಇರುವುದಕ್ಕೆ ಸೂಕ್ತರಲ್ಲ. ಹೀಗಾಗಿ ಕೇಂದ್ರ ಸರಕಾರ ಅವರ ರಾಜೀನಾಮೆ ಪಡೆಯಬೇಕು ಎಂದು ಅವರು ಒತ್ತಾಯಿಸಿದರು.
ಸಿಬಿಎಸ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಜಾರ್ಖಂಡ್ ಎಬಿವಿಪಿ ಸದಸ್ಯನ ಕೈವಾಡವಿದೆ ಎಂದು ವರದಿಯಾಗಿದೆ. ಈ ಬಗ್ಗೆ ಕೆಲವು ವಿದ್ಯಾರ್ಥಿಗಳು ಪರೀಕ್ಷೆ ನಡೆಯುವ ಮೊದಲೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಬಿಎಸ್ಸಿ ಅಧ್ಯಕ್ಷೆ ಅಂಕಿತ ಕರ್ವಾಲ್ ಗಮನಕ್ಕೂ ತರಲಾಗಿತ್ತು. ಆದರೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೆ ಉದಾಸೀನ ಮಾಡಿದ್ದಾರೆ ಎಂದು ಅವರು ಕಿಡಿಕಾರಿದರು.
ಸಿಬಿಎಸ್ಸಿ ಪ್ರಕರಣ ಸಂಬಂಧ ಇಬ್ಬರು ಶಿಕ್ಷಕರು ಮತ್ತು ಒಬ್ಬ ಬೋಧಕನನ್ನು ಬಂಧಿಸುವ ಮೂಲಕ ಕೇಂದ್ರ ಸರಕಾರ ಪ್ರಕರಣವನ್ನು ದಾರಿ ತಪ್ಪಿಸುವ ಕೆಲಸದಲ್ಲಿ ತೊಡಗಿದೆ. ಹೀಗಾಗಿ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಹಾಗೂ ಸಿಬಿಎಸ್ಸಿ ಅಧ್ಯಕ್ಷೆ ಅಂಕಿತ ಕರ್ವಾಲ್‌ರಿಂದ ರಾಜಿನಾಮೆ ಪಡೆದು, ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.