ಆಂಜನೇಯ ಮೂರ್ತಿ ಪ್ರತಿಷ್ಠಾಪನೆಗೆ ಚುನಾವಣಾ ಆಯೋಗದ ಅನುಮತಿಗೆ ಕೆ.ಜೆ.ಜಾರ್ಜ್ ಮನವಿ
ಬೆಂಗಳೂರು, ಎ.3: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಆಂಜನೇಯ ಮೂರ್ತಿ ಪ್ರತಿಷ್ಠಾಪನೆಯನ್ನು ತಡೆ ಹಿಡಿಯಲಾಗಿದೆ. ಆದರೆ, ಚುನಾವಣಾ ಆಯೋಗ ತನ್ನ ನಿಲುವನ್ನು ಸಡಿಲಗೊಳಿಸಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕಲ್ಪಿಸಿಕೊಡಬೇಕೆಂದು ಸಚಿವ ಕೆ.ಜೆ.ಜಾರ್ಜ್ ನೇತೃತ್ವದ ನಿಯೋಗ ಮನವಿ ಮಾಡಿದೆ.
ಮಂಗಳವಾರ ಬೆಳಗ್ಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಸಾರಿಗೆ ಸಚಿವ ಎಚ್.ಎಂ.ರೇವಣ್ಣ ನೇತೃತ್ವದ ನಿಯೋಗ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಭೇಟಿ ನೀಡಿ, ಆಂಜನೇಯ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಮಾಡಿಕೊಡಬೇಕೆಂದು ಮನವಿ ಪತ್ರ ಸಲ್ಲಿಸಿತು.
ಈ ವೇಳೆ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ಇವತ್ತು ಕೋಲಾರದಿಂದ ತರಲಾಗುತ್ತಿದ್ದ ಹನುಮಾನ್ ಮೂರ್ತಿಯನ್ನು ಪೊಲೀಸರು ರಸ್ತೆ ಮಧ್ಯೆದಲ್ಲಿಯೆ ತಡೆಹಿಡಿದಿದ್ದಾರೆ. ಪೊಲೀಸರ ಈ ಕ್ರಮಕ್ಕೆ ನಾನು ಅಡಚಣೆ ಮಾಡಿದ್ದೇನೆಂದು ಮಾಧ್ಯಮಗಳಲ್ಲಿ ಆರೋಪಿಸಲಾಗಿದೆ. ಹೀಗಾಗಿ ಚುನಾವಣಾಧಿಕಾರಿಗಳನ್ನು ಭೇಟಿ ಮಾಡಿ ಮೂರ್ತಿಯ ಪ್ರತಿಷ್ಠಾಪನೆಗೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದ್ದೇನೆಂದು ತಿಳಿಸಿದರು.
ರಾಜ್ಯದಲ್ಲಿ ಎಲ್ಲ ಧರ್ಮಗಳ ಜನತೆ ಸೌಹಾರ್ದತೆಯಿಂದ ಜೀವಿಸುತ್ತಿದ್ದಾರೆ. ಹೀಗಾಗಿ ಆಂಜನೇಯ ಮೂರ್ತಿಯ ಪ್ರತಿಷ್ಠಾಪನೆ ಶಾಂತಿಯುತವಾಗಿ ನೆರವೇರಲಿದೆ. ಇದಕ್ಕೆ ಅವಕಾಶ ಮಾಡಿಕೊಂಡಬೇಕೆಂದು ಕೇಳಿಕೊಂಡಿದ್ದೇವೆ. ಇದಕ್ಕೆ ಸ್ಪಂದಿಸಿರುವ ಚುನಾವಣಾಧಿಕಾರಿ ಸಂಜೀವ್‌ಕುಮಾರ್, ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇನೆಂದು ತಿಳಿಸಿದ್ದಾರೆಂದು ಅವರು ಮಾಹಿತಿ ನೀಡಿದರು