ಕೋಲಾರ-ಚಿಕ್ಕಬಳ್ಳಾಪುರದಲ್ಲಿ ಎ.7 ರಂದು ರಾಹುಲ್ ಗಾಂಧಿ ಯಾತ್ರೆ: ಡಾ.ಜಿ.ಪರಮೇಶ್ವರ್

Update: 2018-04-06 14:46 GMT

ಬೆಂಗಳೂರು, ಎ.6: ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ನೇತೃತ್ವದ ಜನಾಶೀರ್ವಾದ ಯಾತ್ರೆಯು ಎ.7ರಂದು ಬೆಂಗಳೂರು ಕಂದಾಯ ವಿಭಾಗದ ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಇತರ ಕಡೆ ಸಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಶುಕ್ರವಾರ ನಗರದ ಅರಮನೆ ಮೈದಾನದಲ್ಲಿ ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭದ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರಾಹುಲ್‌ಗಾಂಧಿ ಎಐಸಿಸಿ ಅಧ್ಯಕ್ಷರಾದ ನಂತರ ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿತ್ತು. ಅದನ್ನು ಒಪ್ಪಿ ಹೈದರಾಬಾದ್-ಕರ್ನಾಟಕ ಭಾಗದಲ್ಲಿ ಯಾತ್ರೆಯನ್ನು ಆರಂಭಿಸಿದರು. ಈವರೆಗೆ ಮಾಡಿರುವ ಎಲ್ಲ ಯಾತ್ರೆಗಳಲ್ಲಿ ಜನ ಬೆಂಬಲ ವ್ಯಕ್ತವಾಗಿದೆ ಎಂದು ಅವರು ಹೇಳಿದರು.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿರುವ ಕುರುಡಮಲೈ ಗಣಪತಿ ದೇವಸ್ಥಾನದ ಬಳಿಯಿಂದ ನಾಳೆ ರಾಹುಲ್‌ಗಾಂಧಿ ನೇತೃತ್ವದಲ್ಲಿ ಯಾತ್ರೆ ಆರಂಭಗೊಳ್ಳಲಿದ್ದು, ಚಿಕ್ಕಬಳ್ಳಾಪುರದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲೂ ಪಾಲ್ಗೊಳ್ಳಲಿದ್ದಾರೆ ಎಂದು ಪರಮೇಶ್ವರ್ ಹೇಳಿದರು.

ಕಾರ್ಮಿಕರು, ವ್ಯಾಪಾರಿಗಳು, ಸಫಾಯಿ ಕರ್ಮಚಾರಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹಿಳೆಯರ ಜೊತೆ ರಾಹುಲ್‌ಗಾಂಧಿ ರವಿವಾರ ಸಂವಾದ ನಡೆಸಲಿದ್ದಾರೆ. ಅಂದು ಸಂಜೆ 4 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಅವರು ತಿಳಿಸಿದರು.

ಸಮಾವೇಶದಲ್ಲಿ ರಾಜ್ಯ ಸರಕಾರ ಕಳೆದ ಐದು ವರ್ಷಗಳಲ್ಲಿ ಮಾಡಿರುವ ಸಾಧನೆಗಳನ್ನು ಜನರಿಗೆ ಪರಿಚಯಿಸುವ ಮೂಲಕ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ರಣಕಹಳೆ ಮೊಳಗಲಿದೆ. ಸುಮಾರು 4-5 ಲಕ್ಷ ಜನ ಈ ಸಮಾವೇಶದಲ್ಲಿ ಸೇರುವ ನಿರೀಕ್ಷೆಯಿದೆ. ತುಮಕೂರು, ದೊಡ್ಡಬಳ್ಳಾಪುರ, ಮೈಸೂರು ರಸ್ತೆಯಿಂದ ಜನ ಸಮಾವೇಶಕ್ಕೆ ಬರಲು ಮಾರ್ಗದ ನಕ್ಷೆಗಳನ್ನು ಸಿದ್ಧಪಡಿಸಲಾಗಿದೆ ಎಂದು ಅವರು ತಿಳಿಸಿದರು.

ಅಂಬರೀಶ್ ಮಂಡ್ಯ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಿದ್ದಾರೆ. ಬಹುತೇಕ ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ಖಾತ್ರಿಯಾಗಿದೆ. ಅಂಬರೀಶ್ ನಮ್ಮ ಸಂಪರ್ಕದಲ್ಲಿದ್ದಾರೆ. ಅವರ ಕ್ಷೇತ್ರವೂ ಸೇರಿದಂತೆ 224 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ ಎಂದು ಪರಮೇಶ್ವರ್ ಹೇಳಿದರು.

ಅಪ್ಪ-ಮಕ್ಕಳಿಗೆ ಟಿಕೆಟ್ ನೀಡುವ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಯಾರು ಸಮರ್ಥರಿದ್ದಾರೋ ಅವರಿಗೆ ಟಿಕೆಟ್ ನೀಡುವುದಕ್ಕೆ ಆಕ್ಷೇಪವಿಲ್ಲ. ಇದನ್ನು ಸ್ಕ್ರೀನಿಂಗ್ ಕಮಿಟಿ ನಿರ್ಧರಿಸಲಿದೆ. 224 ಕ್ಷೇತ್ರಗಳ ಆಕಾಂಕ್ಷಿಗಳ ಬಗ್ಗೆ ಚರ್ಚೆಯಾಗಿದೆ. ಎಪ್ರಿಲ್ 2ನೆ ವಾರದಲ್ಲಿ ಒಂದೇ ಬಾರಿಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News