ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಎ.9ಕ್ಕೆ ಪ್ರಕಟ
ಬೆಂಗಳೂರು, ಎ. 7: ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೆ ರಾಜಕೀಯ ಪಕ್ಷಗಳಿಗೆ ಅಭ್ಯರ್ಥಿಗಳ ಆಯ್ಕೆ ತೀವ್ರ ತಲೆನೋವಾಗಿದೆ. ಈ ಮಧ್ಯೆ ಮೂರ್ನಾಲ್ಕು ದಿನಗಳಿಂದ ಅಭ್ಯರ್ಥಿಗಳ ಆಯ್ಕೆಗಾಗಿ ಕಸರತ್ತು ನಡೆಸಿದ ಬಿಜೆಪಿ ಮುಖಂಡರು ಆಳೆದು-ತೂಗಿ 140 ಕ್ಷೇತ್ರಗಳ ಟಿಕೆಟ್ ಅಂತಿಮಗೊಳಿಸಿದ್ದು ಸೋಮವಾರ ಪ್ರಕಟಿಸುವ ಸಾಧ್ಯತೆಗಳಿವೆ.
ಶನಿವಾರ ಬೆಂಗಳೂರು ಹೊರವಲಯದ ರೆಸಾರ್ಟ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಕೋರ್‌ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಸಂಜೆ ಹೊಸದಿಲ್ಲಿಗೆ ತೆರಳಿದ್ದಾರೆ. ಎ.8 ರಮದು ದಿಲ್ಲಿಯಲ್ಲಿ ನಡೆಯಲಿರುವ ಸಂಸದೀಯ ಮಂಡಳಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಗೆ ಒಪ್ಪಿಗೆ ಪಡೆದು ಪ್ರಕಟಿಸಲಿದ್ದಾರೆಂದು ಗೊತ್ತಾಗಿದೆ.
ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ನೀಡಲು ಬಿಜೆಪಿ ನಿರ್ಧರಿಸಿದ್ದು, ಕೆಲವು ಕ್ಷೇತ್ರಗಳಲ್ಲಿ ಒಂದಕ್ಕಿಂತ ಹೆಚ್ಚು ಆಕಾಂಕ್ಷಿಗಳು ಇದ್ದರೆ ಪರಸ್ಪರ ಮನವೊಲಿಸುವ ಪ್ರಯತ್ನ ನಡೆಸಲಾಗಿದೆ. ಗೆಲ್ಲುವ ಅಭ್ಯರ್ಥಿಗಳಿಗಷ್ಟೇ ಟಿಕೆಟ್ ನೀಡಲು ಮುಖಂಡರು ನಿರ್ಧರಿಸಿದ್ದಾರೆಂದು ತಿಳಿದು ಬಂದಿದೆ.
ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಯಡಿಯೂರಪ್ಪ, ರಾಜ್ಯದ 224 ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಸಂಬಂಧ ಅಭಿಪ್ರಾಯ ಸಂಗ್ರಹಿಸಿದ್ದು, ಶನಿವಾರ ಸಂಜೆ ಹೊಸದಿಲ್ಲಿಗೆ ತೆರಳಲಿದ್ದೇವೆ. ಸಂಸದೀಯ ಮಂಡಳಿ ಸಭೆ ಬಳಿಕ ಪಟ್ಟಿ ಅಂತಿಮಗೊಳಿಸಲಾಗುವುದು ಎಂದರು.
ಎರಡು-ಮೂರು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದ್ದು, 150 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ಅಧಿಕಾರಕ್ಕೇರಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದ ಅವರು, ಯಾವುದೇ ಗೊಂದಲಕ್ಕೆ ಅವಕಾಶ ಇಲ್ಲದ ರೀತಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಬಿಜೆಪಿ ಉಸ್ತುವಾರಿ ಮುರುಳೀಧರ್ ರಾವ್, ಕೇಂದ್ರ ಸಚಿವರಾದ ಅನಂತ ಕುಮಾರ್, ಸದಾನಂದಗೌಡ, ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್, ರವಿಕುಮಾರ್, ಸಿ.ಟಿ.ರವಿ, ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಹಾಜರಿದ್ದರು.