ನಾಳೆ ಭಾರತ್ ಬಂದ್ : ಬಿಗಿಭದ್ರತೆಗೆ ರಾಜ್ಯಗಳಿಗೆ ಸೂಚನೆ

Update: 2018-04-09 14:56 GMT

ಹೊಸದಿಲ್ಲಿ,ಎ.9: ಕೆಲವು ಗುಂಪುಗಳು ಮಂಗಳವಾರ ಕರೆ ನೀಡಿರುವ ಭಾರತ ಬಂದ್ ಸಂದರ್ಭದಲ್ಲಿ ಹಿಂಸಾಚಾರವನ್ನು ತಡೆಯಲು ಭದ್ರತೆಯನ್ನು ಹೆಚ್ಚಿಸುವಂತೆ ಕೇಂದ್ರವು ಎಲ್ಲ ರಾಜ್ಯಗಳಿಗೆ ಸೂಚಿಸಿದೆ. ಉದ್ಯೋಗ ಮತ್ತು ಶಿಕ್ಷಣದಲ್ಲಿ ಜಾತಿಯಾಧಾರಿತ ಮೀಸಲಾತಿಯನ್ನು ವಿರೋಧಿಸಿ ಈ ಬಂದ್‌ಗೆ ಕರೆ ನೀಡಲಾಗಿದೆ ಎನ್ನಲಾಗಿದೆ.

ತಮ್ಮ ಅಧಿಕಾರ ವ್ಯಾಪ್ತಿಯ ಪ್ರದೇಶಗಳಲ್ಲಿ ಯಾವುದೇ ಹಿಂಸಾಚಾರಕ್ಕೆ ಸಂಬಂಧಿಸಿದ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಅಧೀಕ್ಷಕರನ್ನೇ ಹೊಣೆಯಾಗಿಸುವುದಾಗಿ ಗೃಹ ಸಚಿವಾಲಯವು ರಾಜ್ಯಗಳಿಗೆ ರವಾನಿಸಿರುವ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದೆ.

ಎಸ್‌ಸಿ/ಎಸ್‌ಟಿ ಕಾಯ್ದೆಯನ್ನು ದುರ್ಬಲಗೊಳಿಸಿರುವುದನ್ನು ವಿರೋಧಿಸಿ ಎ.2ರಂದು ದಲಿತ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್ ಸಂದರ್ಭದಲ್ಲಿ ಉತ್ತರ ಭಾರತದಲ್ಲಿ ವ್ಯಾಪಕ ಹಿಂಸಾಚಾರಗಳು ನಡೆದು, ಸುಮಾರು ಒಂದು ಡಝನ್ ಜನರು ಸಾವನ್ನಪ್ಪಿದ್ದರು.

ಎ.10ರಂದು ಭಾರತ ಬಂದ್‌ಗಾಗಿ ಕೆಲವು ಗುಂಪುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳನ್ನು ತಡೆಯಲು ನಿಷೇಧಾಜ್ಞೆ ಸೇರಿದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಎಲ್ಲ ರಾಜ್ಯಗಳಿಗೆ ಸೂಚಿಸಿದೆ ಎಂದು ಗೃಹ ಸಚಿವಾಲಯದ ಅಧಿಕಾರಿ ಯೋರ್ವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News