ಮನವಿ ಪರಿಗಣಿಸದ ಡಿಜಿಪಿ, ನಗರ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ತುರ್ತು ನೋಟಿಸ್

Update: 2018-04-09 15:51 GMT

ಬೆಂಗಳೂರು, ಎ.9: ರಕ್ಷಕ ಸೇನೆ ಪಕ್ಷದ ಪ್ರಚಾರಕ್ಕೆ ಅವಕಾಶ ಕಲ್ಪಿಸದ ವಿಚಾರಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ಪೊಲೀಸ್ ಮಹಾಸಂಘದ ಅಧ್ಯಕ್ಷ ಶಶಿಧರ್ ಅವರ ಮನವಿಯನ್ನು ಪರಿಗಣಿಸದ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿಗೊಳಿಸಿದೆ.

ಅಖಿಲ ಕರ್ನಾಟಕ ಪೊಲೀಸ್ ಮಹಾಸಂಘದ ಅಧ್ಯಕ್ಷ ಶಶಿಧರ್ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಮತ್ತು ನ್ಯಾಯಮೂರ್ತಿ ಎಸ್.ಸುನೀಲ್‌ದತ್ತ ಯಾದವ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿತು.

ಅರ್ಜಿದಾರರ ಪರ ವಾದಿಸಿದ ವಕೀಲ ಜಿ.ಆರ್.ಮೋಹನ್ ಅವರು, ರಕ್ಷಕ ಸೇನೆ ಪಕ್ಷದ ಪ್ರಚಾರಕ್ಕೆ ಅವಕಾಶ ಕಲ್ಪಿಸುತ್ತಿಲ್ಲ ಎಂದು ಏಕಸದಸ್ಯ ನ್ಯಾಯಪೀಠಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ಪರಿಗಣಿಸಿದ್ದ ನ್ಯಾಯಪೀಠವು ಅರ್ಜಿದಾರರ ಮನವಿಯನ್ನು ಆರು ವಾರಗಳಲ್ಲಿ ಪರಿಗಣಿಸಿಯೆಂದು ಆದೇಶಿಸಿತ್ತು. ಆದರೆ, ಪ್ರತಿವಾದಿಗಳಾದ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು, ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್‌ಕುಮಾರ್ ಅವರು ಇಲ್ಲಿಯವರೆಗೆ ನಮ್ಮ ಮನವಿಯನ್ನು ಪರಿಗಣಿಸಿಲ್ಲ ಎಂದು ಪೀಠಕ್ಕೆ ತಿಳಿಸಿದರು.

ವಕೀಲರ ವಾದ ಆಲಿಸಿದ ವಿಭಾಗೀಯ ನ್ಯಾಯಪೀಠವು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತುರ್ತು ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಎ.24ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News