ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿ.ಎಂ.ಇಬ್ರಾಹೀಂ

Update: 2018-04-11 15:27 GMT

ಬೆಂಗಳೂರು, ಎ.11: ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ನಾನು ಯಾವುದೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯೂ ಅಲ್ಲ, ಟಿಕೆಟ್‌ಗಾಗಿ ಅರ್ಜಿಯನ್ನು ಹಾಕಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹೀಂ ಸ್ಪಷ್ಟಪಡಿಸಿದ್ದಾರೆ.

ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನಂತೂ ಹೊಸದಿಲ್ಲಿಗೆ ಹೋಗಿಲ್ಲ. ಮುಖ್ಯಮಂತ್ರಿ ಹೋಗಿ ಬಂದಿದ್ದಾರೆ. ಅವರ ಆರೋಗ್ಯದ ಬಗ್ಗೆ ವಿಚಾರಿಸಲು ಬಂದಿದ್ದೆ ಎಂದರು.

ಚುನಾವಣೆಯಲ್ಲಿ ಸ್ಪರ್ಧಿಸುವವರ ಪರವಾಗಿ ಮತ ಭಿಕ್ಷೆ ಕೇಳಲು ಹೋಗುತ್ತೇನೆ. ಎಪ್ರಿಲ್ 15ರಿಂದ ರಾಜ್ಯಾದ್ಯಂತ ಪ್ರವಾಸ ಆರಂಭ ಮಾಡುತ್ತಿದ್ದೇನೆ. ಈಗ ಪ್ರವಾಸದ ಪ್ರಚಾರದ ಬಗ್ಗೆ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿದ್ದೇನೆ ಎಂದು ಅವರು ಹೇಳಿದರು.

ಜನತಾ ಜನಾರ್ದನನೇ ನಮ್ಮ ಭಾಗಕ್ಕೆ ದೇವರು. ಎಲ್ಲೂ ಕೂಡ ಜನತೆಗೆ ಕೆಟ್ಟ ಹೆಸರು ತರುವಂತಹ ಕೆಲಸವನ್ನು ನಾನು ಮಾಡಿಲ್ಲ. ನಾನು ಬೇರೆ ಪಕ್ಷಕ್ಕೆ ಹೋಗುತ್ತೇನೆ ಎಂಬುದು ಕೇವಲ ಊಹಾಪೋಹ. ನಾನು ಯಾವುದೇ ಪಕ್ಷಕ್ಕೆ ಹೋಗುವುದಿಲ್ಲ. ನನಗೆ ಅದರ ಬಗ್ಗೆ ಚಿಂತನೆಯೂ ಇಲ್ಲ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಹುಮತದಿಂದ ಗೆಲ್ಲಿಸುವುದಷ್ಟೇ ನಮ್ಮ ಮುಂದಿರುವ ಏಕೈಕ ಗುರಿ ಎಂದು ಇಬ್ರಾಹೀಂ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News