100 ಕ್ಷೇತ್ರಗಳಲ್ಲಿ ಕನ್ನಡ ಪರ ಕಾರ್ಯಕರ್ತರ ಸ್ಪರ್ಧೆ: ವಾಟಾಳ್ ನಾಗರಾಜ್

Update: 2018-04-11 16:21 GMT

ಬೆಂಗಳೂರು, ಎ.11: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 100 ಕ್ಷೇತ್ರಗಳಿಂದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಸ್ಪರ್ಧೆ ಮಾಡಲಿದ್ದಾರೆ ಎಂದು ಕನ್ನಡ ಚಳವಳಿ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ 15 ಕ್ಷೇತ್ರಗಳಿಂದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ ಎನ್ನುವುದೇನು ಇಲ್ಲ. ಠೇವಣಿ ಕಳೆದುಕೊಂಡರೂ ಚಿಂತೆಯಿಲ್ಲ. ಆದರೆ, ಕನ್ನಡದ ಪರ ಧ್ವನಿ ಎತ್ತುವ, ಕನ್ನಡದ ಕೆಲಸ ಮಾಡುವ ಕಾರ್ಯಕರ್ತರು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಅತ್ಯಂತ ಅಗತ್ಯವಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಕನ್ನಡಿಗರ ಸಂಖ್ಯೆ ಕಡಿಮೆಯಾಗುತ್ತಿದ್ದು, ಹೊರಗಿನವರ ಸಂಖ್ಯೆ ಜಾಸ್ತಿಯಾಗಿದೆ. ಕನ್ನಡ ಪರ, ಕನ್ನಡ ಉಳಿವಿಗಾಗಿ ಕನ್ನಡ ಕಾಳಜಿ ಇರುವವರು ವಿಧಾನಸಭೆಗೆ ಬರಬೇಕೆಂದು ಎಂಬುದು ನಮ್ಮ ಆಶಯವಾಗಿದೆ. ಈ ನಿಟ್ಟಿನಲ್ಲಿ ಇಲ್ಲಿನ ಸ್ಪರ್ಧೆ ಕನ್ನಡದ ಜನರು ಬೆಂಗಳೂರಿನಲ್ಲಿ ಇದ್ದಾರೋ ಅಥವಾ ಇಲ್ಲವೋ ಎಂಬ ಪರೀಕ್ಷೆಯಾಗಲಿದೆ. ಇದನ್ನು ಚುನಾವಣಾ ಹೋರಾಟವಾಗಿ ಪರಿಗಣಿಸಿದ್ದೇವೆ ಎಂದು ಹೇಳಿದರು.

ಗಡಿ ಪ್ರದೇಶಗಳಾದ ಬೆಳಗಾವಿ, ಬಾಗಲಕೋಟೆ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಪ್ರದೇಶಗಳಿಂದ ಕನ್ನಡಕ್ಕಾಗಿ ಹೋರಾಟ ಮಾಡುತ್ತಿರುವ ಅಭ್ಯರ್ಥಿಗಳನ್ನು ಕಣಕ್ಕಿಸಲಾಗುತ್ತಿದೆ. ಅಲ್ಲದೆ, ಕಾವೇರಿ ಮತ್ತು ಮಹಾದಾಯಿ ಹೋರಾಟಗಾರರು ಸ್ಪರ್ಧೆ ಮಾಡಲಿದ್ದಾರೆ ಎಂದ ಅವರು, ಬೆಳಗಾವಿಯಲ್ಲಿ ಮಹಾರಾಷ್ಟ್ರದ ಎಂಇಎಸ್ ಅನ್ನು ಸೋಲಿಸುವ ನಿಟ್ಟಿನಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಂದಾಗಬೇಕು. ಯಾರೂ ಅಭ್ಯರ್ಥಿಯನ್ನು ಘೋಷಣೆ ಮಾಡದೆ, ಕೇವಲ ಕನ್ನಡ ಪರ ಕಾರ್ಯಕರ್ತರಿಗೆ ಬೆಂಬಲ ನೀಡಬೇಕು ಎಂದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮೂರು ತಿಂಗಳಲ್ಲಿ ಮಹಾದಾಯಿ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ಆದರೆ, ಕಳೆದ ಒಂದು ವರ್ಷದಿಂದ ನಿರಂತರವಾದ ಹೋರಾಟ ನಡೆದರೂ ಚಕಾರವೆತ್ತಲಿಲ್ಲ ಯಾಕೆ ಎಂದು ಪ್ರಶ್ನಿಸಿದ ಅವರು, ರಾಷ್ಟ್ರೀಯ ಪಕ್ಷಗಳು ಕರ್ನಾಟಕವನ್ನು ಮಾರಾಟ ಮಾಡಲು ಮುಂದಾಗಿದ್ದಾರೆ. ಹೀಗಾಗಿ, ಮುಂದಿನ ಚುನಾವಣೆಯಲ್ಲಿ ಪ್ರಗತಿಪರರು, ಸಾಹಿತಿಗಳು, ಲೇಖಕರು, ಚಿಂತಕರು ಹಾಗೂ ಸಂಘಟಕರು ಎಲ್ಲರೂ ಕನ್ನಡ ಪರ ಚಳವಳಿಗಾರರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಎ.12 ರಂದು ರಾಜಭವನ ಮುತ್ತಿಗೆ: ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಬಾರದು ಎಂದು ಆಗ್ರಹಿಸಿ ಹಾಗೂ ರಾಜ್ಯದ ಸಂಸದರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಎ.12 ರಂದು ರಾಜಭವನಕ್ಕೆ ಮುತ್ತಿಗೆ ಹಾಕಿ ಒತ್ತಾಯಿಸಲಾಗುತ್ತದೆ ಎಂದು ವಾಟಾಳ್‌ನಾಗರಾಜ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News