×
Ad

ಬೆಂಗಳೂರು: ಒಕ್ಕಲಿಗರು ಕುಮಾರಸ್ವಾಮಿಗೆ ಬೆಂಬಲ ನೀಡಲು ಮನವಿ

Update: 2018-04-12 19:58 IST

ಬೆಂಗಳೂರು, ಎ.12: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ ಒಕ್ಕಲಿಗ ಸಮುದಾಯ ಒಂದಾಗಿ ಜೆಡಿಎಸ್‌ನ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯನ್ನು ಬೆಂಬಲಿಸಬೇಕು ಎಂದು ಕುವೆಂಪುನಗರ ಒಕ್ಕಲಿಗರ ಜಾಗೃತಿ ವೇದಿಕೆ ಮನವಿ ಮಾಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಕೆ.ಸಿ.ಗಂಗಾಧರ್, ಭ್ರಷ್ಟಾಚಾರ ಮುಕ್ತ ಕಾಂಗ್ರೆಸ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಎಲ್ಲಾ ಇಲಾಖೆಗಳಲ್ಲಿ ಹಣ ಮಾಡುವುದನ್ನೇ ಒಂದು ದಂಧೆಯಾಗಿ ಮಾಡಿಕೊಳ್ಳಲಾಗಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೋರಾಟ ಪ್ರಾರಂಭಿಸಿದ್ದಾರೆ. ಆದರೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಲ್ಲಿಯವರೆಗೂ ಗಮನಹರಿಸಿಲ್ಲ ಎಂದು ದೂರಿದರು.

ಮೈಸೂರು ಜಿಲ್ಲೆಯ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಒಕ್ಕಲಿಗರನ್ನು ಒಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತದಾರರಿಗೆ ಆಮಿಷವೊಡ್ಡುತ್ತಿದ್ದಾರೆ. ಯಾರೂ ಕೂಡ ಇಂತಹ ಆಮಿಷಕ್ಕೆ ಒಳಗಾಗಬಾರದು. ಜಾತಿಯನ್ನು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿರುವ ಸಿದ್ದರಾಮಯ್ಯನವರ ಧೋರಣೆಯನ್ನು ನಾವು ಖಂಡಿಸುತ್ತೇವೆ ಎಂದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮತದಾನ ಮಾಡುವ ಮೂಲಕ ಅವರನ್ನು ಗೆಲ್ಲಿಸಬೇಕು. ಈ ಹಿನ್ನೆಲೆಯಲ್ಲಿ ಎಲ್ಲ ಒಕ್ಕಲಿಗರ ಸಂಘ ಸಂಸ್ಥೆಗಳು ಮತ್ತು ರಾಜ್ಯ ಒಕ್ಕಲಿಗರ ಸಂಘವನ್ನು ಒತ್ತಾಯಿಸಲಾಗುವುದು ಎಂದು ಅವರು ಹೇಳಿದರು.

ಕಾಂಗ್ರೆಸ್ ಸರಕಾರ ರೈತರ ಸಾಲ ಮನ್ನಾ ಮಾಡಲಿಲ್ಲ. ಬಡ ರೈತರರು ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದೆ. ರಾಜ್ಯದಲ್ಲಿ ಕಲ್ಲುಗಣಿದಾರರು ಕೊಳ್ಳೆ ಒಡೆಯುತ್ತಿದ್ದರೂ ಸರಕಾರ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ನಗರದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲು ಉದ್ಯಾನವನಗಳನ್ನು ಹಾಳು ಮಾಡಲಾಯಿತು. ಪಾಲಿಕೆ ವ್ಯಾಪ್ತಿಯ ಹಳೆ ಮೋರಿಗಳನ್ನು ಒಡೆದು ಹಣ ಲೂಟಿ ಮಾಡುವುದು ಕಾಂಗ್ರೆಸ್‌ನ ಕೆಲಸವಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಡೆಯಲು ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರಬೇಕು. ಹಾಗಾಗಿ ಕುಮಾರಸ್ವಾಮಿ ಅವರಿಗೆ ಒಕ್ಕಲಿಗರೆಲ್ಲರೂ ಒಕ್ಕೊರಲಿನ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಗೌರವಾಧ್ಯಕ್ಷ ಎಂ.ಎಸ್.ಶಿವಣ್ಣ, ಕಾರ್ಯದರ್ಶಿ ಕೃಷ್ಣಪ್ಪ, ಜಂಟಿ ಕಾರ್ಯದರ್ಶಿ ಯತೀಶ್‌ಗೌಡ, ಕೆಂಗಲ್ ಹನುಮಂತಯ್ಯ ವೇದಿಕೆ ಅಧ್ಯಕ್ಷ ಬಿ.ಎಚ್.ಸುರೇಶ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News