ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರವಿವಾರ ಬಿಡುಗಡೆ: ಡಾ.ಜಿ.ಪರಮೇಶ್ವರ್

Update: 2018-04-14 14:36 GMT

ಹೊಸದಿಲ್ಲಿ, ಎ.14: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ರವಿವಾರ ಮತ್ತೊಂದು ಸಭೆ ನಡೆಸಿ ಅಂತಿಮಗೊಳಿಸಿ, ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಶನಿವಾರ ಹೊಸದಿಲ್ಲಿಯ ತುಘಲಕ್ ರಸ್ತೆಯಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ನಿವಾಸದಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಅಭ್ಯರ್ಥಿಗಳ ಆಯ್ಕೆ ಸಂಬಂಧ ನಮ್ಮಲ್ಲಿ ಯಾವುದೆ ಭಿನ್ನಾಭಿಪ್ರಾಯಗಳಿಲ್ಲ. ನಾಳೆ ಮತ್ತೊಂದು ಸಭೆ ನಡೆಸಿ ಪಟ್ಟಿ ಅಂತಿಮಗೊಳಿಸುತ್ತೇವೆ. ಸಭೆ ಮುಗಿಯುತ್ತಿದ್ದಂತೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಪರಮೇಶ್ವರ್ ಹೇಳಿದರು.

ಭಿನ್ನಾಭಿಪ್ರಾಯ: ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಅಂತಿಮಗೊಳಿಸುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎನ್ನಲಾಗಿದೆ.

ರಾಜ್ಯಸಭಾ ಚುನಾವಣೆಯಲ್ಲಿ ಎರಡು ಬಾರಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಚಲಾಯಿಸಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ಪುಲಿಕೇಶಿ ನಗರ ಕ್ಷೇತ್ರದ ಶಾಸಕರಾಗಿದ್ದ ಅಖಂಡ ಶ್ರೀನಿವಾಸಮೂರ್ತಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಉಭಯ ನಾಯಕರ ನಡುವೆ ವೈಮನಸ್ಸು ಮೂಡಿದೆ ಎಂದು ತಿಳಿದು ಬಂದಿದೆ.

ಬೇರೆ ಪಕ್ಷಗಳಿಂದ ವಲಸೆ ಬಂದಿರುವವರಿಗೆ ಟಿಕೆಟ್ ನೀಡಿದರೆ ಮೂಲ ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯ ಮಾಡಿದಂತಾಗುತ್ತದೆ. ಆದುದರಿಂದ, ಪುಲಿಕೇಶಿನಗರದಲ್ಲಿ ಮಾಜಿ ಶಾಸಕ ಪ್ರಸನ್ನಕುಮಾರ್‌ಗೆ ಟಿಕೆಟ್ ನೀಡುವಂತೆ ಮಲ್ಲಿಕಾರ್ಜುನ ಖರ್ಗೆ ಪಟ್ಟು ಹಿಡಿದಿದ್ದಾರೆ. ಆದರೆ, ಟಿಕೆಟ್ ನೀಡುವ ಭರವಸೆಯೊಂದಿಗೆ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು, ಈಗ ಟಿಕೆಟ್ ನೀಡುವುದಿಲ್ಲ ಎನ್ನುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

ಬೀದರ್ ದಕ್ಷಿಣ ಕ್ಷೇತ್ರದ ಟಿಕೆಟ್ ಅನ್ನು ಅಶೋಕ್ ಖೇಣಿಗೆ ನೀಡಬೇಕೆಂಬ ವಿಚಾರಕ್ಕೂ ಮಲ್ಲಿಕಾರ್ಜುನ ಖರ್ಗೆ ವಿರೋಧಿಸಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಅಶೋಕ್ ಖೇಣಿ ಪರ ಸ್ಕ್ರೀನಿಂಗ್ ಕಮಿಟಿಯಲ್ಲಿ ವಾದ ಮಂಡನೆ ಮಾಡಿದ್ದಾರೆ ಎನ್ನಲಾಗಿದೆ.

ಒಡಕು ಬೇಡ: ಬಲಗೈ(ಹೊಲೆಯ) ಸಮುದಾಯದ ಪರ ಮಲ್ಲಿಕಾರ್ಜುನ ಖರ್ಗೆ ಹಾಗೂ ಪರಮೇಶ್ವರ್ ಒಲವು ವ್ಯಕ್ತಪಡಿಸಿದರೆ, ಸಂಸದ ಕೆ.ಎಚ್.ಮುನಿಯಪ್ಪ, ಎಡಗೈ ಸಮುದಾಯಕ್ಕೆ ಟಿಕೆಟ್ ಹಂಚಿಕೆ ವೇಳೆ ಆದ್ಯತೆ ನೀಡುವಂತೆ ಪಟ್ಟು ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಮಲ್ಲಿಕಾರ್ಜುನ ಖರ್ಗೆ, ಚುನಾವಣಾ ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ದಲಿತರಲ್ಲಿ ಎಡಗೈ-ಬಲಗೈ ಎಂದು ಒಡಕು ಮೂಡಿಸುವುದು ಬೇಡ ಎಂದು ವ್ಯಕ್ತಪಡಿಸಿದ ಅಭಿಪ್ರಾಯಕ್ಕೆ ಮುಖ್ಯಮಂತ್ರಿಯೂ ಸಹಮತ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News