ಕೆಪಿಸಿಸಿ ಉಪಾಧ್ಯಕ್ಷ ಸ್ಥಾನಕ್ಕೆ ವಿ.ಆರ್.ಸುದರ್ಶನ್ ರಾಜೀನಾಮೆ ?

Update: 2018-04-14 17:37 GMT

ಬೆಂಗಳೂರು,ಎ.14: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಟಿಕೆಟ್ ಹಂಚಿಕೆ ಕಸರತ್ತಿನಲ್ಲಿರುವಾಗಲೇ, ಟಿಕೆಟ್ ಕೈತಪ್ಪುವ ಸಾಧ್ಯತೆ ಹಿನ್ನೆಲೆಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಪಕ್ಷದ ಹಿರಿಯ ಮುಖಂಡ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪಕ್ಷದ ಟಿಕೆಟ್ ಹಂಚಿಕೆಯ ವಿಷಯದಲ್ಲಿ ವಿ.ಆರ್.ಸುದರ್ಶನ್ ಅವರು ತೀವ್ರ ಅಸಮಾಧಾನಗೊಂಡಿದ್ದು, ಇದೇ ಕಾರಣಕ್ಕಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ವಿ.ಆರ್.ಸುದರ್ಶನ್ ಅವರು ಕೋಲಾರ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅಂತಿಮ ಹಂತದಲ್ಲಿ ಪಕ್ಷ ಬೇರೊಬ್ಬರಿಗೆ ಟಿಕೆಟ್ ನೀಡುವ ಸಾಧ್ಯತೆ ಇರುವುದರಿಂದ ಬೇಸತ್ತ ಸುದರ್ಶನ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಕೋಲಾರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷ ಮಾಗಡಿಯ ಜಮೀರ್ ಪಾಷಾ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಹೆಚ್ಚಾಗಿರುವುದು ಸುದರ್ಶನ್ ಅವರ ಅಸಮಾಧಾನಕ್ಕೆ ಕಾರಣ ಎನ್ನಲಾಗಿದೆ. ಈ ಬಗ್ಗೆ ಸುದ್ದಿವಾಹಿನಿಯೊಂದಿಗೆ ಮಾತನಾಡಿರುವ ಸುದರ್ಶನ್ ಅವರು, ಪಕ್ಷದ ಹಿರಿಯ ಮುಖಂಡ ನಾನು. ಕೋಲಾರ ಕ್ಷೇತ್ರದಲ್ಲಿ ನಿನ್ನೆಯವರೆಗೂ ನನಗೇ ಟಿಕೆಟ್ ನೀಡಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದರೆ ಅಂತಿಮ ಕ್ಷಣದಲ್ಲಿ ಪಕ್ಷ ವಲಸಿಗರಿಗೆ ಮಣೆ ಹಾಕಲು ಪ್ರಯತ್ನಿಸುತ್ತಿದೆ. ಹೀಗಾಗಿ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಅಲ್ಲದೆ ತನ್ನ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರಿಗೆ ರವಾನೆ ಮಾಡಿದ್ದೇನೆ ಎಂದು ಹೇಳಿದ್ದಾರೆ.

2013ರಲ್ಲೂ ನಾನು ಸ್ಪರ್ಧಿಸಲು ಬಯಸಿದ್ದೆ. ಕಳೆದ 15 ವರ್ಷಗಳಿಂದಲೂ ಪಕ್ಷ ತಪ್ಪು ನಿರ್ಧಾರ ತಳೆಯುತ್ತಿದೆ. ಎಲ್ಲದಕ್ಕೂ ಒಂದು ಮಿತಿ ಅನ್ನೋದು ಇರುತ್ತೆ. ಬೆಂಬಲಿಗರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ. ಸ್ವಾಭಿಮಾನ ಬಿಟ್ಟು ರಾಜಕಾರಣ ಮಾಡಿಲ್ಲ, ಮುಂದೆಯೂ ಮಾಡಲ್ಲ. ವಲಸಿಗರಿಗೆ ಮಣೆ ಹಾಕುತ್ತಿರುವುದು ಬೇಸರ ತರಿಸಿದೆ ಎಂದು ವಿ.ಆರ್.ಸುದರ್ಶನ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News