ಜನರು ಎನ್‌ಐಎ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ; ಗುಲಾಮ್ ನಬಿ ಆಝಾದ್

Update: 2018-04-16 15:46 GMT

ಹೊಸದಿಲ್ಲಿ, ಎ.16: 2007ರ ಮಕ್ಕಾ ಮಸೀದಿ ಸ್ಫೋಟಕ್ಕೆ ಸಂಬಂಧಿಸಿದಂತೆ ಸ್ವಾಮಿ ಅಸೀಮಾನಂದ ಹಾಗೂ ಇತರ ನಾಲ್ವರನ್ನು ನ್ಯಾಯಾಲಯ ಖುಲಾಸೆಗೊಳಿಸಿರುವುದರಿಂದ ಅಸಮಾಧಾನಗೊಂಡಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಮ್ ನಬಿ ಆಝಾದ್ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯ ಕಾರ್ಯವೈಖರಿಯನ್ನು ಪ್ರಶ್ನಿಸಿದ್ದಾರೆ. ಜನರು ಎನ್‌ಐಎ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಆಝಾದ್ ತಿಳಿಸಿದ್ದಾರೆ. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ನಾಲ್ಕು ವರ್ಷಗಳಲ್ಲಿ ಇಂಥ ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಗೊಳ್ಳುತ್ತಿದ್ದಾರೆ. ಜನರಿಗೆ ಎನ್‌ಐಎ ಮೇಲೆ ನಂಬಿಕೆಯೇ ಇಲ್ಲವಾಗಿದೆ ಎಂದು ಆಝಾದ್ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಆರೋಪಿಗಳ ಮೇಲಿರುವ ಆರೋಪವನ್ನು ಸಾಬೀತುಪಡಿಸುವಲ್ಲಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಅವರನ್ನು ಖುಲಾಸೆಗೊಳಿಸುತ್ತಿರುವುದಾಗಿ ವಿಶೇಷ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು ಸೋಮವಾರ ತೀರ್ಪು ನೀಡಿತ್ತು. 2007ರ ಮೇ 18ರಂದು ಮಕ್ಕಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಯ ಸಂದರ್ಭದಲ್ಲಿ ನಡೆದ ಪ್ರಬಲ ಸ್ಫೋಟದಲ್ಲಿ ಒಂಬತ್ತು ಮಂದಿ ಸಾವಿಗೀಡಾಗಿದ್ದು, 58 ಮಂದಿ ಗಾಯಗೊಂಡಿದ್ದರು. ಪ್ರಕರಣದ ತನಿಖೆಯನ್ನು ಆರಂಭದಲ್ಲಿ ಸ್ಥಳೀಯ ಪೊಲೀಸರು ನಡೆಸುತ್ತಿದ್ದರು ನಂತರ ಅದನ್ನು ಸಿಬಿಐಗೆ ಹಸ್ತಾಂತರಿಸಲಾಯಿತು. 2011ರಲ್ಲಿ ಅಂತಿಮವಾಗಿ ಈ ಪ್ರಕರಣವನ್ನು ದೇಶದ ಪ್ರಮುಖ ಭಯೋತ್ಪಾದನಾ ನಿಗ್ರಹ ತನಿಖಾ ಸಂಸ್ಥೆಯಾಗಿರುವ ಎನ್‌ಐಎಗೆ ಒಪ್ಪಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News