ಉಡುಪಿ: ಎ.24ರಂದು 'ಸಂವಿಧಾನ ರಕ್ಷಿಸಿ ದೇಶ ಉಳಿಸಿ' ಸಮಾವೇಶ

Update: 2018-04-20 06:43 GMT

 ಉಡುಪಿ, ಎ.20: ಕರ್ನಾಟಕ ದಲಿತ ಸಂಘರ್ಷ ಸಮಿತಿಗಳ ಮಹಾ ಒಕ್ಕೂಟ, ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿ, ಕೋಮು ಸೌಹಾರ್ದ ವೇದಿಕೆ ಹಾಗೂ ಅಲ್ಪಸಂಖ್ಯಾತ ಮುಸ್ಲಿಮ್, ಕ್ರೈಸ್ತ ಸಂಘಟನೆಗಳ ಸಹಭಾಗಿತ್ವದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 127ನೇ ಜನ್ಮ ದಿನಾಚರಣೆಯ ಪ್ರಯುಕ್ತ ‘ಸಂವಿಧಾನ ರಕ್ಷಿಸಿ, ದೇಶ ಉಳಿಸಿ’ ಸಮಾವೇಶವನ್ನು ಎ.24ರಂದು ಉಡುಪಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ದಸಂಸ ಸಂಘಟನೆಗಳ ಒಕ್ಕೂಟದ ಗೌರವಾಧ್ಯಕ್ಷ ಸುಂದರ್ ಮಾಸ್ತರ್ ಈ ಕುರಿತು ಮಾಹಿತಿ ನೀಡಿದರು. ಅಜ್ಜರಕಾಡಿನ ಭುಜಂಗ ಪಾರ್ಕಿನ ಬಯಲು ರಂಗಮಂಟಪದಲ್ಲಿ ನಡೆಯಲಿರುವ ಸಮಾವೇಶವನ್ನು ದಸಂಸ(ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಕಾರ್ಯದರ್ಶಿ ಮಾವಳ್ಳಿ ಶಂಕರ್ ಅಪರಾಹ್ನ 4:30ಕ್ಕೆ ಉದ್ಘಾಟಿಸಲಿರುವರು.

ಪ್ರಗತಿಪರ ಚಿಂತಕ, ಚಿತ್ರನಟ ಪ್ರಕಾಶ್ ರೈ, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಪ್ರಧಾನ ಕಾರ್ಯದರ್ಶಿ ಕೆ.ಎಲ್.ಅಶೋಕ್, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಯಾಸೀನ್ ಮಲ್ಪೆ ಮುಖ್ಯ ಅತಿಥಿಗಳಾಗಿರುವರು.

ಕ್ರೈಸ್ತ ಧರ್ಮಗುರು ರೆ.ಫಾ.ವಿಲಿಯಂ ಮಾರ್ಟಿಸ್ ಅಧ್ಯಕ್ಷತೆ ವಹಿಸಲಿರುವರು.

ಸಮಾವೇಶಕ್ಕೆ ಮೊದಲು ಅಪರಾಹ್ನ 3:30ಕ್ಕೆ ಉಡುಪಿ ಬೋರ್ಡ್ ಹೈಸ್ಕೂಲಿನಿಂದ ಹೊರಡುವ ಮೆರವಣಿಗೆ ಕೆ.ಎಂ.ಮಾರ್ಗವಾಗಿ ಹಳೆ ಪೋಸ್ಟ್ ಆಫೀಸ್ ಜೋಡುರಸ್ತೆ ಮೂಲಕ ಅಜ್ಜರಕಾಡು ಭುಜಂಗ ಪಾರ್ಕ್‌ನಲ್ಲಿ ಸಮಾವೇಶಗೊಳ್ಳಲಿದೆ. ಇದೇ ಸಂದರ್ಭದಲ್ಲಿ ಗೌರಿ ಲಂಕೇಶ್ ಸ್ಮರಣಾರ್ಥ ಆರಂಭಿಸಿರುವ ‘ನಾನು ಗೌರಿ’ ಪತ್ರಿಕೆಯ ಮೊದಲ ಸಂಚಿಕೆಯನ್ನು ಬಿಡುಗಡೆಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಯಾಸೀನ್ ಮಲ್ಪೆ, ಧರ್ಮಗುರು ಫಾ.ವಿಲಿಯಂ ಮಾರ್ಟಿಸ್, ಕೋಮು ಸೌಹಾರ್ದ ವೇದಿಕೆಯ ಜಿಲ್ಲಾಧ್ಯಕ್ಷ ಜಿ.ರಾಜಶೇಖರ್, ದಲಿತ ದಮನಿತರ ಹೋರಾಟ ಸಮಿತಿಯ ಅಧ್ಯಕ್ಷ ಶ್ಯಾಮರಾಜ್ ಭಿರ್ತಿ, ಅಂತಾರಾಷ್ಟ್ರೀಯ ಕ್ರೈಸ್ತ ಒಕ್ಕೂಟದ ಪ್ರಶಾಂತ್ ಜತ್ತನ್ನ, ದಸಂಸ ಮುಖಂಡ ಎಸ್.ಎಸ್.ಪ್ರಸಾದ್, ಕ್ರೈಸ್ತ ಸಭಾದ ವೆಲೇರಿಯನ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News