×
Ad

ಬಾದಾಮಿಯಿಂದ ಸಿದ್ದರಾಮಯ್ಯ ಕಣಕ್ಕೆ: ಎ.23 ರಂದು ನಾಮಪತ್ರ ಸಲ್ಲಿಕೆ

Update: 2018-04-21 20:26 IST

ಬೆಂಗಳೂರು, ಎ.21: ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದೊಂದಿಗೆ ವಿಜಯಪುರ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರದಿಂದಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣಕ್ಕಿಳಿಯುತ್ತಿರುವುದು ನಿಗದಿಯಾಗಿದೆ.

ಎ.23 ರಂದು ಮೈಸೂರಿನಿಂದ ವಿಜಯಪುರಕ್ಕೆ ತೆರಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವುದಾದರೆ ಕ್ಷೇತ್ರವನ್ನು ಬಿಟ್ಟು ಕೊಡುವುದಾಗಿ ಹಾಲಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಘೋಷಿಸಿದ್ದರು. ಆದರೆ, ಎಐಸಿಸಿ ಚುನಾವಣಾ ಸಮಿತಿಯಲ್ಲಿ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಆಸಕ್ತಿ ತೋರಿದ ವಿಚಾರವನ್ನು ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ತೀವ್ರವಾಗಿ ವಿರೋಧಿಸಿದ್ದರು.

ಇದರಿಂದಾಗಿ, ಬಾದಾಮಿ ಕ್ಷೇತ್ರದ ಟಿಕೆಟ್ ಡಾ.ದೇವರಾಜ್ ಪಾಟೀಲ್‌ಗೆ ನೀಡಲಾಗಿತ್ತು. ಆದರೆ, ಕಾಂಗ್ರೆಸ್ ಹೈಕಮಾಂಡ್‌ನ ಈ ಕ್ರಮಕ್ಕೆ ಹಾಲಿ ಶಾಸಕ ಚಿಮ್ಮನಕಟ್ಟಿ ತೀವ್ರವಾಗಿ ವಿರೋಧಿಸಿದ್ದರು. ಮುಖ್ಯಮಂತ್ರಿಗಾಗಿ ಕ್ಷೇತ್ರ ತ್ಯಾಗಕ್ಕೆ ಸಿದ್ಧವಾಗಿದ್ದೇನೆಯೆ ಹೊರತು, ಬೇರೆಯವರಿಗಲ್ಲ. ಸಿದ್ದರಾಮಯ್ಯ ಸ್ಪರ್ಧಿಸದಿದ್ದರೆ ನನಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದರು.

ಬಾದಾಮಿ ಕ್ಷೇತ್ರದಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಮತ್ತೊಮ್ಮೆ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಜೊತೆ ಚರ್ಚಿಸಿ, ಬಾದಾಮಿ ಕ್ಷೇತ್ರದಿಂದ ಕಣಕ್ಕಿಳಿಯಲು ಅನುಮತಿ ಪಡೆದುಕೊಳ್ಳುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.

ಇದರಿಂದಾಗಿ, ಬಾದಾಮಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಅನ್ನು ಡಾ.ದೇವರಾಜ್ ಪಾಟೀಲ್ ಪಡೆದಿದ್ದರೂ, ಅವರಿಗೆ ಬಿ ಫಾರಂ ನೀಡುವುದನ್ನು ತಡೆ ಹಿಡಿಯಲಾಗಿತ್ತು. ಇದೀಗ ಎಲ್ಲ ಗೊಂದಲಗಳಿಗೆ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News