ಉಡುಪಿ: ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ, ಕಾಂಗ್ರೆಸ್ ಅಭ್ಯರ್ಥಿ ರಾಕೇಶ್ ಮಲ್ಲಿ ನಾಮಪತ್ರ ಸಲ್ಲಿಕೆ

Update: 2018-04-21 15:14 GMT

ಉಡುಪಿ, ಎ.21: ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಕಾಪು ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನಶಕ್ತಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ನಾಮ ಪತ್ರ ಸಲ್ಲಿಸಿದರು.

ತನ್ನ ಸಹೋದರನೊಂದಿಗೆ ಉಡುಪಿಯಲ್ಲಿರುವ ಚುನಾವಣಾ ಕಚೇರಿಗೆ ಆಗಮಿಸಿದ ಅನುಪಮಾ ಶೆಣೈ, ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಕುಮುದಾ ಶರತ್ ಅವರಿಗೆ ನಾಮಪತ್ರವನ್ನು ಸಲ್ಲಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅನುಪಮಾ ಶೆಣೈ, ಈಗಾಗಲೇ ಪಕ್ಷದ ಚಿಹ್ನೆಯಾಗಿರುವ ಬೆಂಡೆಕಾಯಿಯನ್ನು ಪ್ರಚಾರ ಮಾಡಲಾಗಿದೆ. ಮುಂದೆ ಕರಪತ್ರ ಹಂಚಿಕೆ ಹಾಗೂ ಮನೆಮನೆ ಭೇಟಿಯ ಮೂಲಕ ಪ್ರಚಾರ ಕಾರ್ಯ ನಡೆಸಲಾಗುವುದು. ರಾಜ್ಯದಲ್ಲಿ ಪಕ್ಷದಿಂದ 15 ಮಂದಿಯ ಪೈಕಿ ಈಗಾಗಲೇ ಎಂಟು ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಮಹಿಳೆಯರ ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರಕ್ಕೆ ಸಲಹೆ, ಜಾಗ ಸಮಸ್ಯೆಗಳಿಗೆ ನ್ಯಾಯಾ ಲಯದ ಹೊರಗಿನಿಂದ ಪರಿಹಾರ ಮತ್ತು ಶಾಸಕಿಯಾದರೆ ಜನ ಸಂಪರ್ಕ ಕಾರ್ಯಕ್ರಮ ನಡೆಸಲಾಗುವುದು ಎಂದರು.

ಕುಂದಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಕೇಶ್ ಮಲ್ಲಿ ನಾಮಪತ್ರ ಸಲ್ಲಿಕೆ

ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಾಂಗ್ರೆಸ್ ರಾಜ್ಯ ಇಂಟೆಕ್ ಅಧ್ಯಕ್ಷ ರಾಕೇಶ್ ಮಲ್ಲಿ ಇಂದು ನಾಮಪತ್ರ ಸಲ್ಲಿಸಿದರು.

ಕುಂದಾಪುರ ಶಾಸ್ತ್ರೀ ಸರ್ಕಲ್‌ನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಬಳಿಕ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಮಿನಿ ವಿಧಾನಸೌಧದವರೆಗೆ ಕಾಲ್ನಡಿಗೆಯಲ್ಲಿ ತೆರಳಿದ ರಾಕೇಶ್ ಮಲ್ಲಿ , ಚುನಾವಣಾಧಿಕಾರಿ ಭೂಬಾಲನ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ. ಬಾವ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ರಾಕೇಶ್ ಮಲ್ಲಿ , ಈ ಬಾರಿ ಕಾಂಗ್ರೆಸ್ ಪಕ್ಷ ನನಗೆ ಅವಕಾಶ ನೀಡಿದ್ದು, ಆದುದರಿಂದ ಜನರ ಸೇವೆ ಮಾಡಲು ನನ್ನನ್ನು ಈ ಬಾರಿ ಗೆಲ್ಲಿಸಬೇಕು. ನಾನು ಶಾಸಕನಾದರೆ ಕಾರ್ಮಿಕರಿಗೆ ಧ್ವನಿಯಾಗಿ ಕೆಲಸ ನಿರ್ವಹಿಸುತ್ತೇನೆ ಎಂದರು.

ಬೈಂದೂರು: ಬಿಜೆಪಿ ಅಭ್ಯರ್ಥಿ ಸುಕುಮಾರ್ ಶೆಟ್ಟಿ ನಾಮಪತ್ರ ಸಲ್ಲಿಕೆ

ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಿ.ಎಂ.ಸುಕುಮಾರ್ ಶೆಟ್ಟಿ ಇಂದು ನಾಮಪತ್ರ ಸಲ್ಲಿಸಿದರು. ಬೈಂದೂರು ಸೇಣೆಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅವರು ಬಳಿಕ ಬೈಂದೂರಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದರು. ಅಲ್ಲಿಂದ ಪಾದಯಾತ್ರೆಯ ಮೂಲಕ ಚುನಾವಣಾ ಕಚೇರಿಗೆ ತೆರಳಿದ ಸುಕುಮಾರ್ ಶೆಟ್ಟಿ ಎರಡು ಸೆಟ್‌ಗಳಲ್ಲಿ ನಾಮಪತ್ರ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ಕಳೆದ ಬಾರಿಯ ಚುನಾವಣೆಯಲ್ಲಿ ಕೆಲವು ಗೊಂದಲದಿಂದ ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಅಲ್ಪ ಮತಗಳ ಅಂತರದಲ್ಲಿ ಸೋಲು ಕಾಣಬೇಕಾಯಿತು. ಕಳೆದ ಐದು ವರ್ಷಗಳಿಂದ ಜನರ ಸಂಪರ್ಕದಲ್ಲಿ ಇದ್ದುಕೊಂಡು ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದೇನೆ. ಇದನ್ನು ನೋಡಿ ಪಕ್ಷ ನನಗೆ ಈ ಬಾರಿಯೂ ಟಿಕೆಟ್ ನೀಡಿದೆ. ಕಾಂಗ್ರೆಸ್ ಸರಕಾರದ ದುರಾಡಳಿತ ದಿಂದ ಜನರು ರೋಸಿ ಹೋಗಿದ್ದಾರೆ. ಬೈಂದೂರು ಕ್ಷೇತ್ರ ಶಾಸಕರು ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಆದುದರಿಂದ ಈ ಬಾರಿ ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕರಾದ ಲಕ್ಷ್ಮೀ ನಾರಾಯಣ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕಿರಣ್ ಕೊಡ್ಗೆ, ಭಾರತಿ ಶೆಟ್ಟಿ, ಶಂಕರ್ ಪೂಜಾರಿ, ಸದಾನಂದ ಉಪ್ಪಿನಕುದ್ರು ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News