ಸಿದ್ದರಾಮಯ್ಯರ ಎರಡು ಕ್ಷೇತ್ರದ ಸ್ಪರ್ಧೆಯ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ?

Update: 2018-04-22 13:57 GMT

ಬೆಂಗಳೂರು, ಎ.22: ಮುಖ್ಯಮಂತ್ರಿಯಾದವರು ಎರಡು ಕ್ಷೇತ್ರದಿಂದ ಸ್ಪರ್ಧಿಸುವುದು ತಪ್ಪೇನಲ್ಲ. ಪಕ್ಷ, ಹೈಕಮಾಂಡ್ ತೀರ್ಮಾನದ ಮೇರೆಗೆ ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದಿಂದಲೂ ಕಣಕ್ಕಿಳಿಯುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ರವಿವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪರಿಸ್ಥಿತಿ, ಸಂದರ್ಭಗಳು ಸಿದ್ದರಾಮಯ್ಯನವರನ್ನು ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧೆಗಿಳಿಯುವಂತೆ ಮಾಡಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿನ ಭೀತಿಯಿಂದ ಅವರು ಬಾದಾಮಿಯಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂಬುದು ಬಿಜೆಪಿಯವರು ಮಾಡುತ್ತಿರುವ ಅಪಪ್ರಚಾರ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿರಲಿಲ್ಲವೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ತಪ್ಪೇನು ಎಂದು ಅವರು ಪ್ರಶ್ನಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಉತ್ತಮವಾಗಿ ಕೆಲಸ ಮಾಡಿದೆ. ಮತ್ತೆ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದ ಅವರು, ಕಾಂಗ್ರೆಸ್ ಮುಕ್ತ ಭಾರತ ಮಾಡುವ ಬಿಜೆಪಿಯ ಕನಸು ಎಂದೂ ನನಸಾಗದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News