ಮೋದಿಗೆ ಜನರ ಬಗ್ಗೆ ಕಾಳಜಿ ಇದ್ದರೆ ಪೆಟ್ರೋಲ್, ಡೀಸೆಲ್ ದರವನ್ನು ಕಡಿಮೆ ಮಾಡಲಿ: ಖರ್ಗೆ

Update: 2018-04-22 14:59 GMT

ಬೆಂಗಳೂರು, ಎ.22: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು ಕಡಿಮೆ ಇದ್ದರೂ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರುತ್ತಿರುವುದನ್ನು ಕಟುವಾಗಿ ಟೀಕಿಸಿರುವ ಕಾಂಗ್ರೆಸ್‌ನ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರಮೋದಿ ಅವರಿಗೆ ಸಾಮಾನ್ಯ ಜನರ ಬಗ್ಗೆ ಕಾಳಜಿ ಇದ್ದರೆ ಪೆಟ್ರೋಲ್, ಡೀಸೆಲ್ ದರವನ್ನು ಕಡಿಮೆ ಮಾಡಲಿ ಎಂದು ಆಗ್ರಹಿಸಿದರು.

ರವಿವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಯುಪಿಎ ಸರಕಾರ ಅಧಿಕಾರದಲ್ಲಿದ್ದಾಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ ಕಚ್ಚಾ ತೈಲದ ಬೆಲೆ 110 ರೂ.ಗಳಷ್ಟಿತ್ತು. ಆಗಲೂ ಪೆಟ್ರೋಲ್, ಡೀಸೆಲ್ ಬೆಲೆ ಇಷ್ಟೊಂದು ಅಗಾಧ ಪ್ರಮಾಣದಲ್ಲಿ ಏರಿರಲಿಲ್ಲ. ಈಗ ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆಯಿದ್ದರೂ ದರ ಮಾತ್ರ ಸರ್ವಕಾಲಿಕ ದಾಖಲೆಯಂತೆ ಏರಿದೆ ಎಂದು ಟೀಕಿಸಿದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈಗಿರುವ ಕಚ್ಚಾತೈಲದ ಬೆಲೆಗೆ ಪೆಟ್ರೋಲ್, ಡೀಸೆಲ್ ಪ್ರತಿ ಲೀಟರ್‌ಗೆ 30 ರೂ.ಆಸುಪಾಸಿನಲ್ಲೇ ಇರಬೇಕು. ಆದರೆ ಕೇಂದ್ರ ಸರಕಾರ 76 ರೂ.ಗಳಿಗೆ ಪೆಟ್ರೋಲ್ ಮಾರುತ್ತಿದೆ. ಇದರಿಂದಲೇ ಪ್ರತಿವರ್ಷ 1 ಲಕ್ಷ 67 ಸಾವಿರ ಕೋಟಿ ರೂ. ಹಣ ಬೊಕ್ಕಸಕ್ಕೆ ಹರಿದು ಬರುತ್ತಿದೆ ಎಂದರು.

ಈ ಹಿಂದೆಲ್ಲಾ 2 ರೂ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದರೂ ಜನ ಬೀದಿಗಿಳಿದು ಪ್ರತಿಭಟಿಸುತ್ತಿದ್ದರು. ಈಗ ಪ್ರತಿಭಟನೆ ಮಾಡುವ ಮಸ್ಥಿತಿಯಲ್ಲಿ ಜನ ಇಲ್ಲದಿರುವುದು ಏಕೆಂದು ತಮಗೆ ಅರ್ಥವಾಗುತ್ತಿಲ್ಲ ಎಂದ ಅವರು, ಕಾಂಗ್ರೆಸ್ ಪಕ್ಷ ಮಾತ್ರ ಈ ಬೆಲೆ ಏರಿಕೆ ವಿರುದ್ಧ ಹೋರಾಟ ನಡೆಸಲಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News