ಬಾದಾಮಿಯಿಂದ ನಾಮಪತ್ರ ಸಲ್ಲಿಸಿದ ಸಿದ್ದರಾಮಯ್ಯ

Update: 2018-04-24 12:57 GMT

ಬೆಂಗಳೂರು, ಎ. 24: ರಾಜಕೀಯ ವಲಯದವರ ನಿರೀಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಮಂಗಳವಾರ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಮಂಗಳವಾರ ಬೆಳಗ್ಗೆ ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ತೆರಳಿದ ಸಿಎಂ ಸಿದ್ದರಾಮಯ್ಯ, ಅಲ್ಲಿಂದ ರಸ್ತೆ ಮೂಲಕ ಬಾದಾಮಿಗೆ ತೆರಳಿದರು. ಸಿಎಂಗೆ ಅಭಿಮಾನಿಗಳು ಎತ್ತಿನಗಾಡಿಗಳೊಂದಿಗೆ ಸ್ವಾಗತ ಕೋರಿದರು. ಆ ಬಳಿಕ ಬನಶಂಕರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ನಂತರ ಬಾದಾಮಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಿ ಹೊರಬಂದಾಗ ಸಿಎಂ ಸಿದ್ದರಾಮಯ್ಯರಿಗೆ ಅಭಿಮಾನಿಯೊಬ್ಬ ಪೇಟಾ ತೊಡಿಸಿ ಸಂಭ್ರಮಿಸಿದರು. ಸಿದ್ದರಾಮಯ್ಯ ಅತ್ಯಂತ ಸಂತೋಷದಿಂದಲೇ ಪೇಟಾ ಧರಿಸಿದರು. ಅನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ಬಾದಾಮಿ ಮತ್ತು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಜನರ ಆಶೀರ್ವಾದವಿದೆ’ ಎಂದು ಭರವಸೆ ವ್ಯಕ್ತಪಡಿಸಿದರು.

ನನಗೆ ಯಾವುದೇ ಸೋಲಿನ ಭೀತಿ ಕಾಡುತ್ತಿಲ್ಲ. ಬಿಜೆಪಿಯವರಿಗೆ ಸೋಲಿನ ಭೀತಿ ಕಾಡುತ್ತಿದೆ ಎಂದ ಸಿದ್ದರಾಮಯ್ಯ, ಈ ಹಿಂದೆ ನಾನು ಕೊಪ್ಪಳ ಕ್ಷೇತ್ರದಿಂದಲೂ ಲೋಕಸಭೆ ಸ್ಥಾನಕ್ಕೆ ಸ್ಪರ್ಧಿಸಿದ್ದೆ. ಈ ಬಾರಿ ಈ ಭಾಗದ ಜನರು ಇಲ್ಲಿಂದ ನಿಲ್ಲುವಂತೆ ಒತ್ತಾಯಿಸಿದ್ದರು. ಅಲ್ಲದೆ, ಪಕ್ಷದ ಹೈಕಮಾಂಡ್ ಮೇಲೂ ಒತ್ತಡ ತಂದಿದ್ದರು. ಹೀಗಾಗಿ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದೇನೆ ಎಂದು ಸ್ಪಷ್ಟಣೆ ನೀಡಿದರು.

ನರೇಂದ್ರ ಮೋದಿ ಈ ಹಿಂದೆ ವಾರಣಾಸಿ, ಗುಜರಾತ್ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದರು. ಮಾಜಿ ಪ್ರಧಾನಿ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ಎರಡೆರಡು ಕಡೆ ಸ್ಪರ್ಧಿಸಿದ್ದರು. ಅವರೆಲ್ಲ ಎರಡೆರಡು ಕಡೆ ಯಾಕೆ ನಿಂತಿದ್ದರು ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಅವರಿಗೆ ಸೋಲಿನ ಭಯವಿತ್ತೆ? ಎಂದು ಕೇಳಿದರು.

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ. ಬಾದಾಮಿಯಲ್ಲೇ ನಾನು ಗೆಲ್ಲುತ್ತೇನೆ. ಬಿಜೆಪಿ ಸೋಲು ನಿಶ್ಚಿತ ಎಂದು ಭವಿಷ್ಯ ನುಡಿದ ಸಿದ್ದರಾಮಯ್ಯ, ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನಗಳು ಲಭಿಸಲಿವೆ ಎಂದು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹೀಂ, ಮಾಜಿ ಸಚಿವ ಹಾಗೂ ಹಾಲಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಸೇರಿದಂತೆ ಸ್ಥಳೀಯ ಹಲವು ಮುಖಂಡರು ಈ ವೇಳೆ ಉಪಸ್ಥಿತರಿದ್ದರು.

‘ಚಾಲುಕ್ಯರ ನಾಡು ಬಾದಾಮಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಅಭಿಮಾನಿಗಳು ಹಾಗೂ ಜನತೆ ಭರ್ಜರಿಯಾಗಿ ಸ್ವಾಗತ ಕೋರಿದರು. ಹೂ ಮಳೆ ಸುರಿಸಿ, ಹರ್ಷೋದ್ಗಾರದೊಂದಿಗೆ ಬರ ಮಾಡಿಕೊಂಡರು. ಇದೇ ವೇಳೆ ಅಪಾರ ಜನಸ್ತೋಮದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿ ಪಟ್ಟಣದಲ್ಲಿ ಭಾರೀ ಮೆರವಣಿಗೆ ನಡೆಸಿದರು’

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News