×
Ad

ಸಿ.ಎಂ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದರಲ್ಲಿ ತಪ್ಪೇನಿಲ್ಲ: ಮಲ್ಲಿಕಾರ್ಜುನ ಖರ್ಗೆ

Update: 2018-04-25 19:14 IST

ಕಲಬುರಗಿ, ಎ. 25: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಮತ್ತು ಬಾದಾಮಿ ಸೇರಿದಂತೆ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸುವುದರಲ್ಲಿ ತಪ್ಪೇನಿಲ್ಲ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸೋಲಿನ ಭೀತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಕಡೆ ಸ್ಪರ್ಧೆ ಮಾಡುತ್ತಿದ್ದಾರೆ ಎಂಬುದು ಸರಿಯಲ್ಲ. ಮೋದಿ ಎರಡು ಕಡೆ ಸ್ಪರ್ಧಿಸಿರಲಿಲ್ಲವೇ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಆಡಳಿತ ರಾಜ್ಯದ ಜನರಿಗೆ ತೃಪ್ತಿ ತಂದಿದೆ. ನುಡಿದಂತೆ ನಡೆದಿದ್ದೇವೆ. ಹೀಗಾಗಿ ಈ ಬಾರಿಯೂ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಖರ್ಗೆ ಇದೇ ವೇಳೆ ಭರವಸೆ ವ್ಯಕ್ತಪಡಿಸಿದರು.

ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಮಾಡಿದೆ ಎಂಬುವುದು ಎಲ್ಲ ಜನರಿಗೂ ಗೊತ್ತಿದೆ. ಐದು ವರ್ಷದ ಅವಧಿಯಲ್ಲಿ ಮುಖ್ಯಮಂತ್ರಿಯೇ ಜೈಲಿಗೆ ಹೋಗಿದ್ದು ಜನತೆ ಮರೆತಿಲ್ಲ. ಕೇಂದ್ರದಲ್ಲಿನ ಬಿಜೆಪಿ ಸರಕಾರ ರಾಜ್ಯಕ್ಕೆ ಅದರಲ್ಲೂ ಹೈ.ಕ.ಭಾಗಕ್ಕೆ ಯಾವುದೇ ರೀತಿಯ ಕೊಡುಗೆ ನೀಡಿಲ್ಲ ಎಂದು ದೂರಿದರು.

ಕೇಂದ್ರ ಸರಕಾರ ದೇಶದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ಪ್ರಧಾನಿ ಮೋದಿ ಅವರು ವಿದೇಶದಲ್ಲಿರುವ ಕಪ್ಪುಹಣ ವಾಪಸ್ ತರುವೆ, 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದು, ಅದು ಇದೀಗ ಹುಸಿಯಾಗಿದೆ ಎಂದು ಟೀಕಿಸಿದರು.

ಹೈ.ಕ. ಭಾಗಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂಬಂಧ ಸಂವಿಧಾನದ 371 (ಜೆ) ಕಲಂಗೆ ತಿದ್ದುಪಡಿ ತರುವುದರ ಮೂಲಕ ಆ ಭಾಗದ ಜನತೆಗೆ ಕೊಡುಗೆ ನೀಡಿದೆ. 371 ‘ಜೆ’ ಜಾರಿಯಾದ ಮೇಲೆ ಈ ಭಾಗದಲ್ಲಿ 30 ಸಾವಿರ ಹುದ್ದೆ ಭರ್ತಿಯಾಗಿವೆ. ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲಾಗಿದೆ ಎಂದರು.

ಕರಾವಳಿಯಲ್ಲಿ ರಾಹುಲ್ ಪ್ರವಾಸ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಾರವಾರ, ಹೊನ್ನಾವರ, ಭಟ್ಕಳ, ಮುರುಡೇಶ್ವರ, ಮಂಗಳೂರು, ಬಂಟ್ವಾಳ, ಧರ್ಮಸ್ಥಳ ಹಾಗೂ ಮೈಸೂರು ಭಾಗದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಖರ್ಗೆ ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News