ಎ.28ಕ್ಕೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ
ಉಡುಪಿ, ಎ.25: ಕನ್ನಡದ ಹಿರಿಯ ವಿದ್ವಾಂಸ ಮುಳಿಯ ತಿಮ್ಮಪ್ಪಯ್ಯ ಅವರ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಯನ್ನು ಮಧುರೈ ಕಾಮರಾಜ ವಿವಿಯಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಹಿರಿಯ ಸಾಹಿತಿ ಪ್ರೊ.ಹರಿಕೃಷ್ಣ ಭರಣ್ಯ ಇವರಿಗೆ ಎ.28ರಂದು ಬೆಳಗ್ಗೆ 10:30ಕ್ಕೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಪ್ರದಾನ ಮಾಡಲಾಗುವುದು.
ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ವಿಶ್ವವಿದ್ಯಾಲಯ ಹಾಗೂ ಮುಳಿಯ ತಿಮ್ಮಪ್ಪಯ್ಯ ಶತಮಾನೋತ್ಸವ ಸಮಿತಿ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಹೆಯ ಕುಲಸಚಿವ ಡಾ. ನಾರಾಯಣ ಸಭಾಹಿತ್, ಮಣಿಪಾಲ ಅಕಾಡಮಿ ಆಫ್ ಜನರಲ್ ಎಜ್ಯುಕೇಶನ್‌ನ ಆಡಳಿತಾಧಿಕಾರಿ ಡಾ. ಎಚ್. ಶಾಂತಾರಾಮ್ ಭಾಗವಹಿಸಲಿದ್ದಾರೆ. ಡಾ.ಏರ್ಯ ಲಕ್ಷ್ಮೀನಾರಾಯಣ ಆಳ್ವ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ವಿದ್ವಾಂಸ ಡಾ.ಪಾದೇಕಲ್ಲು ವಿಷ್ಣು ಭಟ್ಟ ಇವರು ‘ಮುಳಿಯರ ನಾಡೋಜ ಪಂಪ’ ಕುರಿತು ವಿಶೇಷ ಉಪನ್ಯಾಸ ನೀಡಲಿರುವರು. ಕೋಡಿಜಾಲ್ ಗೋವಿಂದ ಭಟ್ ಉಪಸ್ಥಿತರಿರುವರು ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.
1951ರ ಮೇ 16ರಂದು ಪಾಣಾಜೆ ಸಮೀಪದ ಭರಣ್ಯದಲ್ಲಿ ಜನಿಸಿದ ಹರಿಕೃಷ್ಣ ಭರಣ್ಯ ಇವರು ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನಲ್ಲಿ ವಿಜ್ಞಾನದಲ್ಲಿ ಪದವಿ, ಕಾಸರಗೋಡು ಸರಕಾರಿ ಕಾಲೇಜಿನಲ್ಲಿ ಕನ್ನಡ ಎಂ.ಎ, ಚೆನ್ನೈನ ಮದ್ರಾಸ್ ವಿವಿಯಿಂದ ಎಂ.ಫಿಲ್ ಮತ್ತು ಡಾಕ್ಟರೇಟ್ ಪದವಿ ಪಡೆದಿದ್ದಾರೆ. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ತುಳು ನಿಘಂಟು ಯೋಜನೆಯಲ್ಲಿ ಸಂಶೋಧಕರಾಗಿ ಕರ್ತವ್ಯ ನಿರ್ವಹಿಸಿದ್ದಲ್ಲದೇ ಮಧುರೈ ಕಾಮರಾಜ ವಿವಿಯಲ್ಲಿ ಪ್ರಾಧ್ಯಾಪಕರಾಗಿ, ವಿಭಾಗ ಮುಖ್ಯಸ್ಥರಾಗಿ ದುಡಿದು ನಿವೃತ್ತಿ ಹೊಂದಿದ್ದಾರೆ.