ಎಂಬಿಬಿಎಸ್ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನಕ್ಕೆ ಹೈಕೋರ್ಟ್ ಆದೇಶ

Update: 2018-04-26 16:44 GMT

ಬೆಂಗಳೂರು, ಎ.25: ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ 24 ಎಂಬಿಬಿಎಸ್ ವಿದ್ಯಾರ್ಥಿಗಳು ಬರೆದಿರುವ ಜನರಲ್ ಮೆಡಿಸಿನ್ ಕ್ಲಿನಿಕಲ್ ಪ್ರಾಕ್ಟಿಕಲ್ ವಿಷಯ ಉತ್ತರ ಪತ್ರಿಕೆಗಳು ಮತ್ತು ಪ್ರಾಯೋಗಿಕ ಪರೀಕ್ಷೆಯನ್ನು ಮರು ಮೌಲ್ಯಮಾಪನ ಮಾಡಬೇಕು ಎಂದು ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಮತ್ತು ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ.

ನಿಯಮಗಳ ಅನುಸಾರ ತಮ್ಮ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಿಲ್ಲ ಎಂದು ಆರೋಪಿಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಾರೆ ಎನ್ನಲಾದ 24 ಎಂಬಿಬಿಎಸ್ ವಿದ್ಯಾರ್ಥಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಗುರುವಾರ ವಿದ್ಯಾರ್ಥಿಗಳ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ಪೀಠ, ಅರ್ಜಿದಾರರ ಉತ್ತರ ಪತ್ರಿಕೆಗಳನ್ನು ಮತ್ತು ಪ್ರಾಯೋಗಿಕ ಪರೀಕ್ಷೆಯನ್ನು ಮರು ವೌಲ್ಯಮಾಪನದ ನಂತರ ಹೊಸದಾಗಿ ಸಂದರ್ಶನ ಮಾಡಿ, ಫಲಿತಾಂಶ ಪ್ರಕಟಿಸಬೇಕು. ಈ ಎಲ್ಲ ಪ್ರಕ್ರಿಯೆಗಳು ಮೂರು ವಾರದಲ್ಲಿ ಪೂರ್ಣಗೊಳ್ಳಬೇಕು. ಹಾಗೆಯೇ, ವಿದ್ಯಾರ್ಥಿಗಳ ಫಲಿತಾಂಶವನ್ನು ಕೋರ್ಟ್‌ಗೆ ಸಲ್ಲಿಸಬೇಕು ಎಂದು ಆದೇಶಿಸಿತು.

ಅಲ್ಲದೆ, ಮರು ಮೌಲ್ಯಮಾಪನದ ನಂತರ ಪ್ರಕಟಿಸುವ ಅರ್ಜಿದಾರರ ಫಲಿತಾಂಶವು ಅರ್ಜಿ ಕುರಿತು ನ್ಯಾಯಾಲಯ ಹೊರಡಿಸುವ ಅಂತಿಮ ತೀರ್ಪಿಗೆ ಬದ್ಧವಾಗಿರುತ್ತದೆ ಮತ್ತು ಈ ಆದೇಶವು ಇತರೆ ಪ್ರಕರಣಗಳಿಗೆ ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದ್ದು, ವಿಚಾರಣೆಯನ್ನು ಮೇ 29ಕ್ಕೆ ಮುಂದೂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News