×
Ad

ಚಿಕ್ಕಮಗಳೂರು ಜಿ.ಪಂ.ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪ ಗೌಡ ಕಾಂಗ್ರೆಸ್ ಸೇರ್ಪಡೆ

Update: 2018-04-29 20:29 IST

ಬೆಂಗಳೂರು, ಎ.29: ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯೆ ಹಾಗೂ ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪ ಗೌಡ ಸೇರಿದಂತೆ ಇನ್ನಿತರ ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಯಾದರು.

ರವಿವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಸೇರಿದಂತೆ ಇನ್ನಿತರ ಮುಖಂಡರ ಸಮ್ಮುಖದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಹಾಗೂ ಗ್ರಾ.ಪಂ.ಸದಸ್ಯ ಬಿ.ವಿ.ಪುಟ್ಟೇಗೌಡ ಸೇರಿದಂತೆ 15 ಮಂದಿ ಕಾಂಗ್ರೆಸ್ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ಚಿಕ್ಕಮಗಳೂರಿನ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದು ಅಲ್ಲಿನ ನಮ್ಮ ಅಭ್ಯರ್ಥಿ ಡಾ.ಬಿ.ಎಲ್.ಶಂಕರ್ ಗೆಲುವಿಗೆ ಸಹಕಾರಿಯಾಗಲಿದೆ. ನಮ್ಮ ಸರಕಾರದ ಆಡಳಿತ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನಾಯಕತ್ವವನ್ನು ಮೆಚ್ಚಿ ಇವರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದರು.

ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪ ಗೌಡ ಮಾತನಾಡಿ, ಬಿಜೆಪಿಯಲ್ಲಿ ಹೇಳುವುದು ಒಂದು ಮಾಡುವುದು ಮತ್ತೊಂದು. ಆ ಪಕ್ಷದಲ್ಲಿ ಸಾಮಾಜಿಕ ನ್ಯಾಯಕ್ಕೆ ಬೆಲೆಯಿಲ್ಲ ಎಂಬುದು ನಮಗೆ ಮನವರಿಕೆಯಾಗಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಕಳೆದ ಐದು ವರ್ಷಗಳಲ್ಲಿ ನೀಡಿರುವ ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತವನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ. ಒಬ್ಬ ಸಾಮಾನ್ಯ ಕಾರ್ಯಕರ್ತೆಯಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇನೆ ಎಂದು ಅವರು ಹೇಳಿದರು.

ಮುಖಂಡರಾದ ಧನಂಜಯಮೂರ್ತಿ, ಕೆ.ಎಸ್.ಹರೀಶ್, ನಿಂಗೇಗೌಡ, ಬಿ.ಬಿ.ಕೃಷ್ಣಮೂರ್ತಿ, ಗಿರೀಶ್, ಎಸ್.ಎನ್. ರವಿಕುಮಾರ್, ರಮೇಶ್, ಎಸ್.ಎಚ್.ಕಾರ್ತಿಕ್, ಎಸ್.ಎಂ.ಹುಲಿಯಪ್ಪಗೌಡ, ಎಸ್.ಪ್ರಕಾಶ್, ಬಿ.ಎಸ್. ಶ್ರೀನಿವಾಸ್, ಸಿ.ಜಿ.ನಿರಂಜನ್, ಬಿರೇಗೌಡ ಹಾಗೂ ರಾಘವೇಂದ್ರ ಕಾಂಗ್ರೆಸ್ ಸೇರ್ಪಡೆಯಾದರು

ಈ ಸಂದರ್ಭದಲ್ಲಿ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ವಿಜಯ್‌ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ವೈ.ಘೋರ್ಪಡೆ, ಶಫಿ ಉಲ್ಲಾ, ಮಾಧ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಕೆ.ಈ.ರಾಧಾಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News