ಮುಸ್ಲಿಂ-ಕ್ರೈಸ್ತ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿಲ್ಲ: ಬಿ.ಎಸ್. ಯಡಿಯೂರಪ್ಪ
ಬೆಂಗಳೂರು, ಮೇ 6: ಮುಸ್ಲಿಂ ಹಾಗೂ ಕ್ರೈಸ್ತ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದರೆ ಅವರು ಗೆಲ್ಲವು ವಿಶ್ವಾಸವಿಲ್ಲ. ಹೀಗಾಗಿ ಅವರಿಗೆ ಬಿಜೆಪಿ ವತಿಯಿಂದ ಈ ಚುನಾವಣೆಯಲ್ಲಿ ಟಿಕೆಟ್ ನೀಡಿಲ್ಲವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ.
ರವಿವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗೆಲ್ಲುವ ಅಭ್ಯರ್ಥಿಗಳಿಗಷ್ಟೆ ಆದ್ಯತೆ ನೀಡಲಾಗಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ ಒಂದು ಕ್ಷೇತ್ರದಲ್ಲಿಯೂ ಮುಸ್ಲಿಂ ಹಾಗೂ ಕ್ರೈಸ್ತ ಸಮುದಾಯದ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿಲ್ಲ. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರೊಬ್ಬರಿಗೆ ಸಚಿವ ಸ್ಥಾನ ನೀಡಲಾಗುವುದು ಎಂದು ಘೋಷಿಸಿದರು.
ಮತ್ತೆ ತಪ್ಪು ಮಾಡುವುದಿಲ್ಲ: ನನ್ನ ಆಡಳಿತಾವಧಿಯಲ್ಲಿ ಸರಳ ಬಹುಮತ ಬಂದಿಲ್ಲದ ಕಾರಣದಿಂದಾಗಿ ಹಲವು ಸಮಸ್ಯೆಗಳನ್ನು ಎದುರಿಸುವಂತಾಯಿತು. ಆದರೆ, ಈ ಬಾರಿ ಆಗಾಗದಂತೆ ಎಚ್ಚರಿಕೆ ವಹಿಸುತ್ತೇನೆ. ಈ ನಿಟ್ಟಿನಲ್ಲಿ ಮತದಾರರು ಬಿಜೆಪಿಯನ್ನು ಬೆಂಬಲಿಸುವ ಮೂಲಕ ನಾಡಿನ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಅವರು ಮನವಿ ಮಾಡಿದರು.
ಬಿಜೆಪಿ ಆಡಳಿತಕ್ಕೆ ಬಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ಮಾಡಿರುವ ಜನಪರ ಯೋಜನೆಗಳನ್ನು ಮುಂದುವರೆಸಲಾಗುವುದು. ಅದರ ಜೊತೆಗೆ ಮತ್ತಷ್ಟು ಯೋಜನೆಗಳನ್ನು ಜಾರಿಗೆ ತಂದು ವಿದ್ಯಾರ್ಥಿಗಳಿಗೆ, ರೈತರಿಗೆ, ನಿರುದ್ಯೋಗಿಗಳಿಗೆ ಆಸರೆಯಾಗಿ ಕಾರ್ಯನಿರ್ವಹಿಸಲಿದ್ದೇವೆಂದು ಅವರು ಭರವಸೆ ನೀಡಿದರು.
‘ಮತದಾರರನ್ನು ಕೈ ಕಾಲು ಕಟ್ಟಿ ಮತದಾನ ಮಾಡಿಸಿ ಎಂದು ಹೇಳಿಲ್ಲ. ಕೈ ಕಾಲು ಮುಗಿದಾದರು ಮತದಾರರನ್ನು ಒಲಿಸಿಕೊಳ್ಳಿ ಎಂಬರ್ಥದಲ್ಲಿ ಹೇಳಿದ್ದೆ. ಆದರೆ, ಕಾಂಗ್ರೆಸ್ ಪಕ್ಷದ ಮುಖಂಡರು ತಲೆ ತಿರುಕರಂತೆ ನನ್ನ ಮಾತನ್ನು ಬದಲಿಸುತ್ತಾ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ’
-ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ