ರಾಹುಲ್- ಸೋನಿಯಗಾಂಧಿ ಪ್ರಜಾಪ್ರಭುತ್ವ ವಿರೋಧಿಗಳು: ಕೇಂದ್ರ ಸಚಿವ ಅನಂತ್‌ಕುಮಾರ್

Update: 2018-05-08 17:04 GMT

ಬೆಂಗಳೂರು, ಮೇ 8: ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಹಾಗೂ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಸಂಸದೀಯ ಪ್ರಜಾಪ್ರಭುತ್ವಕ್ಕೆ ವ್ಯತಿರಿಕ್ತವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಅನಂತ್‌ಕುಮಾರ್ ಆರೋಪಿಸಿದ್ದಾರೆ.

ಪ್ರೆಸ್‌ಕ್ಲಬ್ ಆಫ್ ಬೆಂಗಳೂರು ಹಾಗೂ ವರದಿಗಾರರ ಕೂಟದಿಂದ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ರಾಜ್ಯದಲ್ಲಿ ಚುನಾವಣಾ ಪ್ರಚಾರದ ಭಾಷಣಗಳಲ್ಲಿ ಕೇಂದ್ರ ಸರಕಾರದ ವೈಫಲ್ಯಗಳ ಬಗ್ಗೆ ಮಾತನಾಡುತ್ತಿದ್ದಾರೆ. ಸೋನಿಯಾಗಾಂಧಿ ಸಂಸತ್ತಿನ ಹೊರಗೆ ಈ ಕುರಿತು ಪ್ರತಿಕ್ರಿಯಿಸುತ್ತಾರೆ. ಆದರೆ, ಇತ್ತೀಚಿಗೆ ನಡೆದ 2 ತಿಂಗಳ ಬಜೆಟ್‌ಮೇಲಿನ ಅಧಿವೇಶನದಲ್ಲಿ ಯಾಕೆ ನಮ್ಮ ಸರಕಾರದ ವೈಫಲ್ಯಗಳ ಬಗ್ಗೆ ಪ್ರಸ್ತಾಪ ಮಾಡಲಿಲ್ಲ ಎಂದರು.

ದೇಶದಲ್ಲಿ 55 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ಇದೀಗ ಅಧಃಪತನವಾಗಿ ಪ್ರಾದೇಶಿಕ ಪಕ್ಷವಾಗುತ್ತಿದೆ. ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ನಾಯಕತ್ವ ಹಾಗೂ ಕಾಂಗ್ರೆಸ್‌ನ ದುರಾಡಳಿತದಿಂದ ದೇಶದ ಜನರು ಬೇಸತ್ತಿದ್ದಾರೆ. ಇಂದಿರಾಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ 19 ರಾಜ್ಯಗಳಲ್ಲಿ ಕಾಂಗ್ರೆಸ್ ಆಡಳಿತವಿತ್ತು. ಆದರೆ, ಈಗ ಮೋದಿ ಅಧಿಕಾರ ಅವಧಿಯಲ್ಲಿ 21 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ ಎಂದು ಹೇಳಿದರು.

ಮೈತ್ರಿ ದೋಸ್ತಿ: ಬಿಬಿಎಂಪಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಅಧಿಕಾರ ನಡೆಸುತ್ತಿದ್ದರೆ, ವಿಧಾನಸಭಾ ಚುನಾವಣೆಯಲ್ಲಿ ಪರಸ್ಪರ ರಾಜಕೀಯ ಕೆಸರು ಎರಚಾಡುತ್ತಿದ್ದಾರೆ. ಈ ಎರಡೂ ಪಕ್ಷಗಳಿಂದ ಅಭಿವೃದ್ಧಿ ನಿರೀಕ್ಷೆ ಮಾಡುವುದು ಕಷ್ಟ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಒಂದೇ ವಿಮಾನದಲ್ಲಿ ದಿಲ್ಲಿಗೆ ಹೋಗಿದ್ದರು. ಅವರಿಬ್ಬರ ನಡುವೆ ಮೈತ್ರಿ ಮಾಡಿಕೊಳ್ಳಲಾಗಿದೆ. ಈ ಸಂಬಂಧ ನಮ್ಮ ಬಳಿ ದಾಖಲೆಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಅವರು 24 ಗಂಟೆಯೊಳಗೆ ಸೂಕ್ತ ದಾಖಲೆಗಳನ್ನು ಬಹಿರಂಗಪಡಿಸಬೇಕು ಅಥವಾ ವಿಧಾನಸಭಾ ಚುನಾವಣೆಯಿಂದ ಹಿಂದೆ ಸರಿಯಬೇಕು ಎಂದು ಸವಾಲು ಹಾಕಿದರು.

ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ರಾಜಕೀಯ ಮಾಡುತ್ತಿದೆ. ಮಹದಾಯಿ ಕಾಮಗಾರಿ ಆರಂಭಕ್ಕೆ ಬಿಜೆಪಿ ಸರಕಾರ ಹಣ ನೀಡಿತ್ತು. ಆದರೆ, ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರವಿದ್ದ ಸಂದರ್ಭದಲ್ಲಿ ಅಂದಿನ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಮಹದಾಯಿಯ ಒಂದು ಹನಿ ನೀರನ್ನು ಕೊಡಲ್ಲ ಎಂದಿದ್ದರು. ಅಲ್ಲದೆ, ರಾಜೀವ್‌ಗಾಂಧಿ, ಇಂದಿರಾಗಾಂಧಿ, ಪಿ.ವಿ.ನರಸಿಂಹರಾವ್, ಎಚ್.ಡಿ.ದೇವೇಗೌಡ, ಮನಮೋಹನ್‌ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಯಾಕೆ ಮಹದಾಯಿ ಸಮಸ್ಯೆಯನ್ನು ಬಗೆಹರಿಸಲಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಉತ್ತರ ಭಾರತದಲ್ಲಿ ಯಾವ ರೀತಿ ಅನಿರೀಕ್ಷಿತವಾಗಿ ಬಿಜೆಪಿ ಅಧಿಕಾರಕ್ಕೆ ಬಂದಿತೋ, ಅದೇ ರೀತಿಯಲ್ಲಿ ಇಲ್ಲಿಯೂ ಅನಿರೀಕ್ಷಿತವಾಗಿ ಬಿಜೆಪಿ ಬಹುಮತಕ್ಕೆ ಬೇಕಾಗುವಷ್ಟು ಕ್ಷೇತ್ರಗಳಲ್ಲಿ ಗೆಲ್ಲಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದ ಅವರು, ಸಿದ್ದರಾಮಯ್ಯರ 5 ವರ್ಷಗಳ ಆಡಳಿತದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಅಧಿಕಾರಿಗಳ ಹತ್ಯೆ, ರೈತರ ಆತ್ಮಹತ್ಯೆ, ಸರಣಿ ಕಳ್ಳತನ, ಅತ್ಯಾಚಾರ ಪ್ರಕರಣಗಳು ಸೇರಿದಂತೆ ಹಲವು ಪ್ರಕರಣಗಳು ವರದಿಯಾಗಿವೆ. ಬೆಂಗಳೂರನ್ನು ಬಿಹಾರದ ರೀತಿ ಜಂಗಲ್‌ರಾಜ್ಯ ಮಾಡಲು ಮುಂದಾಗಿದ್ದರು ಎಂದು ಟೀಕಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News