×
Ad

ವಿಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಕ್ರಿಯೆಗೆ ತಡೆ ಕೋರಿ ಹೈಕೋರ್ಟ್‌ಗೆ ಅರ್ಜಿ

Update: 2018-05-09 20:02 IST

ಬೆಂಗಳೂರು, ಮೇ 9: ನಾಮಪತ್ರ ಪರಿಶೀಲನೆ ಪಾರದರ್ಶಕವಾಗಿ ನಡೆದಿಲ್ಲ. ಹೀಗಾಗಿ, ವಿಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಬೇಕು ಎಂದು ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಕೆ.ರವಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ 18 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಎ.25ರಂದು ನಡೆದ ನಾಮಪತ್ರ ಪರಿಶೀಲನೆ ಪ್ರಕ್ರಿಯೆಯಲ್ಲಿ ರಿಟರ್ನಿಂಗ್ ಅಧಿಕಾರಿ ಸರಿಯಾದ ರೀತಿಯಲ್ಲಿ ನಾಮಪತ್ರ ಪರಿಶೀಲನೆ ನಡೆಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾಮಪತ್ರ ಪರಿಶೀಲನೆಗೆ ಅವಕಾಶ ನೀಡದೆ ಇರುವುದು ಪ್ರಜಾಪ್ರತಿನಿಧಿ ಕಾಯ್ದೆಗೆ ವಿರುದ್ಧವಾಗಿದೆ. ಕಾಯ್ದೆ ಅನ್ವಯ ಪ್ರತಿ ಅಭ್ಯರ್ಥಿಗೆ ನಾಮಪತ್ರ ಪರಿಶೀಲನೆಗೆ ಅವಕಾಶ ನೀಡಲಾಗಿದೆ. ಆದರೆ, ನಾವು ಮನವಿ ಮಾಡಿದರೂ ಅದಕ್ಕೆ ಅವರು ಅವಕಾಶ ಕಲ್ಪಿಸಲಿಲ್ಲ. ಮರುದಿನವೇ ನಾನು ಮುಖ್ಯ ಚುನಾವಣಾಧಿಕಾರಿಗೆ ಮನವಿ ಸಲ್ಲಿಸಿದೆ. ಅಲ್ಲಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ ಎಂದು ಆಪಾದಿಸಿದರು.

ಚುನಾವಣಾ ನಿಯಮದ ಅನ್ವಯ, ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಎಲ್ಲ ಅಭ್ಯರ್ಥಿಗಳು ಪ್ರಮಾಣ ಪತ್ರ ಹಾಗೂ ಹೆಚ್ಚುವರಿ ಪ್ರಮಾಣ ಪತ್ರ ಸಲ್ಲಿಸಿರಬೇಕು. ಎಲ್ಲ ಹಾಳೆಗಳಲ್ಲಿ ಸಹಿ ಮಾಡಿರಬೇಕು ಹಾಗೂ ಎಲ್ಲ ಕಾಲಂಗಳ ಪ್ರತಿಯನ್ನು ಸಲ್ಲಿಸಿರಬೇಕು. ಈ ಎಲ್ಲ ಪತ್ರಗಳ ಪರಿಶೀಲನೆಗೆ ಎಲ್ಲ ಅಭ್ಯರ್ಥಿಗೆ ಅವಕಾಶ ನೀಡಬೇಕು. ಆದರೆ, ನನಗೆ ಅವಕಾಶ ನೀಡಿಲ್ಲ ಎಂದು ತಿಳಿಸಿದರು.

ನಾಮಪತ್ರ ಪರಿಶೀಲನೆಗೆ ಅವಕಾಶ ನೀಡುವವರೆಗೂ ವಿಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಬೇಕೆಂದು ಹೈ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದೇನೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News