ಕಾಂಗ್ರೆಸ್ ಅಭ್ಯರ್ಥಿಗಳಿಗೆ ಕೊನೆಯ ಕ್ಷಣದಲ್ಲಿ ‘ಐಟಿ ಶಾಕ್’

Update: 2018-05-11 14:32 GMT

ಬೆಂಗಳೂರು, ಮೇ 11: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಶೋಕ್ ಖೇಣಿ, ಕಾರವಾರ ಕ್ಷೇತ್ರದ ಸತೀಶ್ ಸೈಲ್, ಧಾರವಾಡ ಕ್ಷೇತ್ರದ ವಿನಯ್ ಕುಲಕರ್ಣಿ ಸೇರಿದಂತೆ ಹಲವು ಕಡೆ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಕೊನೆಯ ಕ್ಷಣದಲ್ಲಿ ಆದಾಯ ತೆರಿಗೆ ಇಲಾಖೆ ದಿಢೀರ್ ದಾಳಿ ನಡೆಸುವ ಮೂಲಕ ಶಾಕ್ ನೀಡಿದೆ.

ಶುಕ್ರವಾರ ಬೆಳ್ಳಂ ಬೆಳಗ್ಗೆ ಖಚಿತ ಮಾಹಿತಿ ಮೇರೆಗೆ ಬೀದರ್, ಕಾರವಾರ, ಧಾರವಾಡ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಅಧಿಕಾರಿಗಳು ಅಭ್ಯರ್ಥಿಗಳು ಮತ್ತವರ ಆಪ್ತರ ಮನೆ-ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆಂದು ಗೊತ್ತಾಗಿದೆ.

ಬರಿಗೈಯಲ್ಲಿ ವಾಪಸ್: ಬೀದರ್‌ನ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಐಟಿ ಅಧಿಕಾರಿಗಳ ತಂಡ ಇಲ್ಲಿನ ರಾಂಪುರದಲ್ಲಿನ ಅಶೋಕ್ ಖೇಣಿ ನಿವಾಸಕ್ಕೆ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದರು. ಆದರೆ, ಯಾವುದೇ ಹಣ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ಅತ್ತ ಕಾರವಾರದಲ್ಲಿ ಸತೀಶ್ ಸೈಲ್ ಹಾಗೂ ಧಾರವಾಡದಲ್ಲಿ ವಿನಯ್ ಕುಲಕರ್ಣಿ ನಿವಾಸಗಳ ಮೇಲೆಯೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು (ಐಟಿ) ದಾಳಿ ನಡೆಸಿದ್ದಾರೆ. ದಾಖಲೆ ಪತ್ರಗಳ ಪರಿಶೀಲನೆ ಕಾರ್ಯದಲ್ಲಿ ಐಟಿ ಅಧಿಕಾರಿಗಳು ತೊಡಗಿದ್ದಾರೆಂದು ಗೊತ್ತಾಗಿದೆ.

ಆರೇಳು ದಿನಗಳಿಂದ ರಾಜ್ಯದ ವಿವಿಧೆಡೆಗಳಲ್ಲಿ ಅಭ್ಯರ್ಥಿಗಳು ಹಾಗೂ ಅವರ ಆಪ್ತರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮುಂದುವರಿಸಿದ್ದು, ಚುನಾವಣೆಯಲ್ಲಿ ಹಣ ಹಂಚಿಕೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸುತ್ತಿದ್ದಾರೆಂದು ಹೇಳಲಾಗಿದೆ. ಆದರೆ, ಈ ದಾಳಿಗಳು ರಾಜಕೀಯ ಪಕ್ಷಗಳ ಮುಖಂಡರ ನಡುವೆ ಆರೋಪ-ಪ್ರತ್ಯಾರೋಪಕ್ಕೂ ಕಾರಣವಾಗಿದೆ.

‘ಆದಾಯ ತೆರಿಗೆ ದಾಳಿಯಿಂದ ಕಾಂಗ್ರೆಸ್ ನಾಯಕರ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನವನ್ನು ಬಿಜೆಪಿ ಮುಖಂಡರು ಮಾಡುತ್ತಿದ್ದಾರೆ. ಆದರೆ, ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ ತಂದುಕೊಟ್ಟಿದ್ದು ಕಾಂಗ್ರೆಸ್ ಪೂರ್ವಜರು. ಹೀಗಾಗಿ ಇಂತಹ ದಾಳಿಗಳಿಂದ ನಮ್ಮ ಸ್ಥೈರ್ಯ ಕುಗ್ಗಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ’
-ಎಸ್.ಆರ್.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News