ಮೋದಿ ನೇಪಾಳ ದೇವಾಲಯ ಭೇಟಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್
ಹೊಸದಿಲ್ಲಿ, ಮೇ 12: ಕರ್ನಾಟಕ ವಿಧಾನ ಸಭೆ ಚುನಾವಣೆ ಶನಿವಾರ ಬೆಳಗ್ಗೆ ಆರಂಭವಾದಾಗ ಪ್ರಧಾನಿ ನರೇಂದ್ರ ಮೋದಿ ನೇಪಾಳದಲ್ಲಿ ದೇವಾಲಯ ಭೇಟಿ ನೀಡುತ್ತಿರುವ ಬಗ್ಗೆ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ವಿಧಾನ ಸಭೆ ಚುನಾವಣೆ ನಡೆಯುತ್ತಿರುವ ಸಂದರ್ಭ ಪ್ರಧಾನಿ ಅವರು ನೇಪಾಳದಲ್ಲಿ ದೇವಾಲಯ ಭೇಟಿ ನಡೆಸುತ್ತಿರುವುದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂದು ಗೆಹ್ಲೋಟ್ ಹೇಳಿದ್ದಾರೆ.
‘‘ಕರ್ನಾಟಕದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಸಂದರ್ಭ ಮತದಾರರ ಮೇಲೆ ಪ್ರಭಾವ ಬೀರಲು ಪ್ರಧಾನಿ ಮೋದಿ ಅವರು ನೇಪಾಳದ ದೇವಾಲಯಗಳಲ್ಲಿ ಪ್ರಾರ್ಥನೆ ನಡೆಸುವ ಯೋಜನೆ ಹಾಕಿದ್ದಾರೆ. ಇದು ಪ್ರಜಾಪ್ರಭುತ್ವದ ಉತ್ತಮ ಪ್ರವೃತ್ತಿ ಅಲ್ಲ. ಅವರು ದೇವಾಲಯಕ್ಕೆ ಭೇಟಿ ನೀಡಲು ಶನಿವಾರವನ್ನೇ ಏಕೆ ಆಯ್ಕೆ ಮಾಡಿಕೊಳ್ಳಬೇಕಿತ್ತು’’ ಎಂದು ಅವರು ಪ್ರಶ್ನಿಸಿದ್ದಾರೆ. ಇಂಡೋ-ನೇಪಾಲ ಒಪ್ಪಂದದ ಹಿನ್ನೆಲೆಯಲ್ಲಿ ಪ್ರಸ್ತುತ ಎರಡು ದಿನಗಳ ನೇಪಾಳ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ರವಿವಾರ ಮುಕ್ತಿಕಾಂತ್ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥಿಸಿದ್ದಾರೆ.