ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಡಬಲ್ಲೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಖರ್ಗೆ ಪ್ರತಿಕ್ರಿಯಿಸಿದ್ದು ಹೀಗೆ..
ಕಲಬುರಗಿ, ಮೇ 13: ‘ದಲಿತ ಎನ್ನುವ ಕಾರಣಕ್ಕೆ ನನಗೆ ಮುಖ್ಯಮಂತ್ರಿ ಸ್ಥಾನವನ್ನು ಕೊಡುವುದು ಬೇಡ’ ಎಂದು ಲೋಕಸಭೆ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸ್ಥಾನವನ್ನು ನಯವಾಗಿ ನಿರಾಕರಿಸಿದ್ದಾರೆ.
ರವಿವಾರ ನಗರದಲ್ಲಿ ‘ದಲಿತರಿಗೆ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಲು ಸಿದ್ದ’ ಎಂಬ ಸಿಎಂ ಸಿದ್ದರಾಮಯ್ಯರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ನಾನೊಬ್ಬ ದಲಿತ ಎನ್ನುವ ಕಾರಣಕ್ಕೆ ಮುಖ್ಯಮಂತ್ರಿ ಹುದ್ದೆಯನ್ನು ಕೊಡುವುದು ಬೇಡ ಎಂದು ತಿಳಿಸಿದರು.
ತಾನು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಅಥವಾ ಕಾಂಗ್ರೆಸಿನ ಹಿರಿಯ ಕಾರ್ಯಕರ್ತನೆಂದು ಅರಿತು ಮುಖ್ಯಮಂತ್ರಿ ಸ್ಥಾನವನ್ನು ಪಕ್ಷದ ಹೈಕಮಾಂಡ್ ನೀಡಿದರೆ ಸ್ವೀಕಾರ ಮಾಡುವೆ ಎಂದ ಮಲ್ಲಿಕಾರ್ಜುನ ಖರ್ಗೆ, ನಾಲ್ಕು ಐದು ದಶಕಗಳ ಕಾಲ ಪಕ್ಷಕ್ಕಾಗಿ ಅತ್ಯಂತ ನಿಷ್ಟೆಯಿಂದ ದುಡಿದಿದ್ದೇನೆ ಎಂದು ಹೇಳಿದರು.
ರಾಜ್ಯದಲ್ಲಿ ಈ ಹಿಂದೆಯೂ ದಲಿತ ಮುಖ್ಯಮಂತ್ರಿ ಬಗ್ಗೆ ಪ್ರಸ್ತಾಪವಾಗಿತ್ತು. ಆ ಸಂದರ್ಭದಲ್ಲಿಯೂ ದಲಿತನೆಂಬ ಕಾರಣಕ್ಕೆ ನನಗೆ ಸಿಎಂ ಸ್ಥಾನವನ್ನು ಕೊಡಬೇಡಿ ಎಂದು ನಾನು ಹೇಳಿದ್ದೆ. ಈಗಲೂ ನಾನು ಅದೇ ಮಾತನ್ನು ಹೇಳುತ್ತಿದ್ದೇನೆ ಎಂದು ಅವರು ಸ್ಪಷ್ಟಣೆ ನೀಡಿದರು.
ತಾನು ದಲಿತ ಎನ್ನುವ ಕಾರಣಕ್ಕೆ ಮುಖ್ಯಮಂತ್ರಿ ಸ್ಥಾನವನ್ನು ಕೊಡಿ ಎಂದು ಪಕ್ಷದ ಹೈಕಮಾಂಡ್‌ಗೆ ಯಾವುದೇ ಕಾರಣಕ್ಕೂ ಅರ್ಜಿ ಹಾಕುವುದಿಲ್ಲ. ಮುಖ್ಯಮಂತ್ರಿ ಸ್ಥಾನವನ್ನು ಕೊಡುವುದು ಅಥವಾ ಬಿಡುವುದು ಹೈಕಮಾಂಡ್‌ಗೆ ಬಿಟ್ಟ ವಿಷಯ ಎಂದು ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದರು.