×
Ad

ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಯಡಿಯೂರಪ್ಪ ಆಯ್ಕೆ

Update: 2018-05-16 19:51 IST

ಬೆಂಗಳೂರು, ಮೇ 16: ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯದಿದ್ದರೂ ಅಧಿಕಾರ ಹಿಡಿಯಲೇಬೇಕೆಂಬ ಜಿದ್ದಿಗೆ ಬಿದ್ದಿರುವ ಬಿಜೆಪಿ ವರಿಷ್ಠರು ಬಿ.ಎಸ್.ಯಡಿಯೂರಪ್ಪರನ್ನು ಶಾಸಕಾಂಗ ನಾಯಕನನ್ನಾಗಿ ಆಯ್ಕೆ ಮಾಡಿ, ಶತ ಪ್ರಯತ್ನ ನಡೆಸಿದ್ದಾರೆ.

ಬುಧವಾದ ಬೆಳಗ್ಗೆ ನಗರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಕೇಂದ್ರ ಸಚಿವ ಅನಂತ ಕುಮಾರ್, ಸದಾನಂದ ಗೌಡ, ಪ್ರಕಾಶ್ ಜಾವಡೇಕರ್, ಕೆ.ಎಸ್,ಈಶ್ವರಪ್ಪ ಸೇರಿದಂತೆ ಹಲವು ನಾಯಕರು ರಾಜ್ಯದಲ್ಲಿ ಬಿಜೆಪಿ ಅಧಿಕಾರ ಪಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ತೀರ್ಮಾನಗಳ ಕುರಿತು ಚರ್ಚಿಸಿದರು.

ಸಭೆಯ ಬಳಿಕ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ನಿಯೋಗ ರಾಜ್ಯಭವನಕ್ಕೆ ತೆರಳಿ, ಬಿಜೆಪಿ ನೇತೃತ್ವದ ಸರಕಾರ ರಚನೆಗೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಳೆ(ಗುರುವಾರ) ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆ. ಬಳಿಕ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮಾತನಾಡಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ಅಸಮಾಧಾನವಿರುವ ಹಲವು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಬಿಜೆಪಿ ಬೆಂಬಲಿಸಲು ಸಿದ್ಧರಿದ್ದಾರೆ. ಹೀಗಾಗಿ ನಾವು ಅಧಿಕಾರಿ ನಡೆಸಲಿದ್ದೇವೆ ಎಂದು ತಿಳಿಸಿದರು.

ನಾಳೆ ಬಿಎಸ್‌ವೈ ಪ್ರಮಾಣ ವಚನ?
ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಮೇ 17ರ ಮಧ್ಯಾಹ್ನ 12.20ಕ್ಕೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಸಂಬಂಧ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ(ಶಿಷ್ಟಾಚಾರ) ಇಲಾಖೆಗೆ ರಾಜಭವನದಿಂದ ಸೂಚನೆ ರವಾನೆಯಾಗಿದೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News