ಜೂ. 8: ನೈರುತ್ಯ ಪದವೀಧರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ

Update: 2018-05-16 15:39 GMT

ಉಡುಪಿ, ಮೇ 16: ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಗಾಗಿ ಚುನಾವಣಾ ಕಾರ್ಯಸೂಚಿಯನ್ನು ಭಾರತ ಚುನಾವಣಾ ಆಯೋಗ ಪ್ರಕಟಿಸಿದೆ.

ಈ ಚುನಾವಣೆಯ ಕುರಿತಂತೆ ಈಗಾಗಲೇ ಅಧಿಸೂಚನೆಯನ್ನು (ಮೇ 15) ಹೊರಡಿಸಲಾಗಿದ್ದು, ಮೇ 22(ಮಂಗಳವಾರ) ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಮೇ 23ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಉಮೇದುದಾರಿಕೆಯನ್ನು ಹಿಂದೆಗೆದುಕೊಳ್ಳಲು ಮೇ 25 ಕೊನೆ ದಿನವಾಗಿದೆ. ಜೂನ್ 8ರ ಶುಕ್ರವಾರ ಬೆಳಗ್ಗೆ 8 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದೆ. ಮತಗಳ ಎಣಿಕೆ ಜೂನ್ 12ರ ಮಂಗಳವಾರ ಬೆಳಗ್ಗೆ 8 ಗಂಟೆಗೆ ಪ್ರಾರಂಭಗೊಳ್ಳಲಿದೆ.

ಈ ಚುನಾವಣೆಯಲ್ಲಿ ಸ್ಪರ್ಧಿಸಲಿಚ್ಛಿಸುವ ವ್ಯಕ್ತಿಗಳ ವಯಸ್ಸು 30 ವರ್ಷಗಳಿಗೆ ಕಡಿಮೆ ಇರಕೂಡದು ಹಾಗೂ ಅವರು ಕರ್ನಾಟಕದ ಯಾವುದಾದರೊಂದು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿರಬೇಕು. ಚಾಲ್ತಿಯಲ್ಲಿರುವ ವಿಧಾನ ಸಭಾ ಕ್ಷೇತ್ರದ ಮತದಾರ ಪಟ್ಟಿಯಲ್ಲಿ ನೊಂದಾಯಿತಗೊಂಡಿರುವ ಬಗ್ಗೆ ಸಂಬಂಧಿಸಿದ ಮತದಾರರ ನೋಂದಣಾಧಿಕಾರಿ/ಸಹಾಯಕ ಮತದಾರರ ನೋಂದಣಾಧಿಕಾರಿಗಳಿಂದ ಪಡೆದ ಮತದಾರರ ಪಟ್ಟಿಯ ದೃಢೀಕೃತ ನಕಲನ್ನು ಹಾಜರುಪಡಿಸಬೇಕು.

ನೈರುತ್ಯ ಪದವೀಧರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರದ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿತರಾಗಿರುವವರು ಮಾತ್ರ ಈ ಚುನಾವಣೆಯಲ್ಲಿ ಮತದಾರರಾಗಿರುತ್ತಾರೆ. ಚುನಾವಣೆಗೆ ಸಂಬಂಧಿಸಿ ಚುನಾವಣಾಧಿಕಾರಿಗಳು ಹಾಗೂ ಕ್ಷೇತ್ರ ವ್ಯಾಪ್ತಿ ಈ ಕೆಳಗಿನಂತಿದೆ.

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣಾಧಿಕಾರಿ ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ, ಮೈಸೂರು. ಈ ಕ್ಷೇತ್ರ ವ್ಯಾಪ್ತಿಯಲ್ಲಿ ಉಡುಪಿ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ಚನ್ನಗಿರಿ ತಾಲೂಕುಗಳು ಸೇರಿವೆ.

ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ಪ್ರಾದೇಶಿಕ ಆಯುಕ್ತರು, ಮೈಸೂರು. ಈ ಕ್ಷೇತ್ರ ವ್ಯಾಪ್ತಿಯಲ್ಲಿ ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ಚನ್ನಗಿರಿ ತಾಲೂಕುಗಳು ಬರುತ್ತವೆ.

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ, ಪ್ರಾದೇಶಿಕ ಆಯುಕ್ತರು, ಮೈಸೂರು. ಈ ಕ್ಷೇತ್ರ ವ್ಯಾಪ್ತಿಯಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳು ಬರುತ್ತವೆ. ಚುಣಾವಣೆಗೆ ಸ್ಪರ್ಧಿಸಲಿಚ್ಚಿಸುವ ಅಭ್ಯರ್ಥಿಗಳು ಮೇ 15ರಿಂದ ಮೇ 22ರವರೆಗೆ ಬೆಳಗ್ಗೆ 11:00ರಿಂದ ಅಪರಾಹ್ನ 3:00ರವರೆಗೆ ನಾಮಪತ್ರ ಸಲ್ಲಿಸಬಹುದು. ನಾಮಪತ್ರಗಳ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ಚುನಾವಣಾಧಿಕಾರಿ ಅಥವಾ ಸಹಾಯಕ ಚುನಾವಣಾಧಿಕಾರಿ ಇವರನ್ನು ಸಂಪರ್ಕಿಸಬಹುದು ಎಂದು ಮೈಸೂರಿನ ಪ್ರಾೇಶಿಕ ಆಯುಕ್ತರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News