ಬಿಎಸ್‌ವೈಗೆ ಬಹುಮತ ಸಾಬೀತುಪಡಿಸಲು ಸಾಧ್ಯವಿಲ್ಲ: ಸಿದ್ದರಾಮಯ್ಯ

Update: 2018-05-17 13:39 GMT

ಬೆಂಗಳೂರು, ಮೇ 17: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆಯಲ್ಲಿ ಯಾವುದೇ ಕಾರಣಕ್ಕೂ ಬಹುಮತ ಸಾಬೀತುಪಡಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗುರುವಾರ ವಿಧಾನಸೌಧ ಹಾಗೂ ವಿಕಾಸಸೌಧದ ನಡುವಿರುವ ಮಹಾತ್ಮಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಕೇಂದ್ರ ಸರಕಾರ ಹಾಗೂ ರಾಜ್ಯಪಾಲರ ವಿರುದ್ಧ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟಕ್ಕೆ 117 ಸಂಖ್ಯಾ ಬಲವಿದೆ. ಆದರೆ, ಕೇವಲ 104 ಸ್ಥಾನಗಳನ್ನು ಹೊಂದಿರುವ ಬಿಜೆಪಿಗೆ ಸರಕಾರ ರಚನೆ ಮಾಡಲು ಆಹ್ವಾನ ನೀಡಿರುವ ರಾಜ್ಯಪಾಲರ ಕ್ರಮ ಸಂವಿಧಾನ ವಿರೋಧಿಯಾಗಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಗೆ ಬಹುಮತ ಸಾಬೀತುಪಡಿಸಲು ಸಾಧ್ಯವಿಲ್ಲ, ವಿಶ್ವಾಸಮತ ಯಾಚನೆ ವೇಳೆ ಯಡಿಯೂರಪ್ಪಗೆ ನಿರಾಸೆಯಾಗಲಿದೆ. ಸುಪ್ರೀಂಕೋರ್ಟ್‌ನಲ್ಲಿ ನಾವು ದಾಖಲಿಸಿರುವ ಪ್ರಕರಣ ಸೂಕ್ತವಾಗಿದ್ದು, ನ್ಯಾಯಾಲಯದಿಂದ ಸೂಕ್ತ ತೀರ್ಮಾನ ಹೊರ ಬೀಳುವ ವಿಶ್ವಾಸವಿದೆ ಎಂದು ಅವರು ಹೇಳಿದರು.

ಬಹುಮತ ಇಲ್ಲದೇ ಇದ್ದರೂ ವಿಶ್ವಾಸಮತ ಗೆಲ್ಲುತ್ತೇನೆ ಎಂದು ಯಡಿಯೂರಪ್ಪ ಹೇಳಿರುವುದು ಭಂಡತನ. ಕಾಂಗ್ರೆಸ್ ಪಕ್ಷದ 78 ಶಾಸಕರು ಒಗ್ಗಟ್ಟಾಗಿದ್ದಾರೆ. ವಿಜಯನಗರ ಶಾಸಕ ಆನಂದ್‌ಸಿಂಗ್ ವೈಯಕ್ತಿಕ ಕೆಲಸದ ನಿಮಿತ್ತ ದಿಲ್ಲಿಗೆ ಹೋಗಿದ್ದಾರೆ. ಅವರು ವಾಪಸ್ ಬಂದು ನಮ್ಮ ಜೊತೆ ಸೇರಿಕೊಳ್ಳಲಿದ್ದಾರೆ. ಪ್ರತಾಪ್‌ಗೌಡ ಪಾಟೀಲ್‌ಗೆ ಆರೋಗ್ಯ ಸಮಸ್ಯೆ ಕಾಡುತ್ತಿದ್ದು, ಅವರು ನಮ್ಮ ಜೊತೆಯಲ್ಲೆ ಇದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News