ಸೋಮವಾರ ಬೆಳಗ್ಗೆ ಕಂಠೀರವ ಸ್ಟೇಡಿಯಂನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ: ಕುಮಾರಸ್ವಾಮಿ

Update: 2018-05-19 15:06 GMT

ಬೆಂಗಳೂರು, ಮೇ 19: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರಕಾರ ರಚನೆಗೆ ನಾವು ಮೇ 15ರಂದು ಮಾಡಿದ್ದ ಮನವಿ ಹಿನ್ನೆಲೆಯಲ್ಲಿ ರಾಜ್ಯಪಾಲರು ನನಗೆ ಸರಕಾರ ರಚನೆ ಮಾಡಿ, 15 ದಿನಗಳಲ್ಲಿ ಬಹುಮತ ಸಾಬೀತುಪಡಿಸುವಂತೆ ಸೂಚನೆ ನೀಡಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಶನಿವಾರ ಸಂಜೆ ರಾಜ್ಯಪಾಲ ವಜುಭಾಯಿ ವಾಲಾ ಆಹ್ವಾನ ಹಿನ್ನೆಲೆಯಲ್ಲಿ ರಾಜಭವನಕ್ಕೆ ಭೇಟಿ ನೀಡಿ, ಸರಕಾರ ರಚನೆ ಸಂಬಂಧ ಚರ್ಚೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕಂಠೀರವ ಕ್ರೀಡಾಂಗಣದಲ್ಲಿ ಮೇ 21ರಂದು ಸೋಮವಾರ ಮಧ್ಯಾಹ್ನ 12 ರಿಂದ 1.05ರ ನಡುವೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಬಿಜೆಪಿ ಸರಕಾರ ಬಹುಮತ ಸಾಬೀತುಪಡಿಸಲು ಸಾಧ್ಯವಾಗದೆ, ಅವರ ನಾಯಕರು ರಾಜೀನಾಮೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ರಚನೆ ಮಾಡಲು ರಾಜ್ಯಪಾಲರು ಆಹ್ವಾನ ನೀಡಿದ್ದಾರೆ ಎಂದು ಅವರು ಹೇಳಿದರು.

ಸಚಿವ ಸಂಪುಟ ರಚನೆ ಯಾವ ರೀತಿಯಲ್ಲಿರಬೇಕು ಎಂಬುದರ ಕುರಿತು ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಸಲಹೆ ಮೇರೆಗೆ ಹಿರಿಯ ನಾಯಕ ಗುಲಾಂನಬಿ ಆಝಾದ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಅದರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಹಾಗೂ ನಮ್ಮ ಪಕ್ಷದ ಕೆಲ ಮುಖಂಡರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ಮಯಾವತಿ, ಅಖಿಲೇಶ್‌ಯಾದವ್, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ರಾವ್ ಸೇರಿದಂತೆ ಪ್ರಾದೇಶಿಕ ಪಕ್ಷಗಳ ಮುಖಂಡರಿಗೆ ಆಹ್ವಾನ ನೀಡಲಾಗುವುದು ಎಂದು ಅವರು ಹೇಳಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಎಸ್ಪಿ ಪಕ್ಷದ ಶಾಸಕರು, ಕಾರ್ಯಕರ್ತರು ನನಗೆ ಬೆಂಬಲ ನೀಡಿರುವುದಕ್ಕೆ ನಾನು ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಮಾಯಾವತಿ ಹಾಗೂ ನಮ್ಮ ಪಕ್ಷವು ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದರಿಂದ ನಮ್ಮ 38 ಶಾಸಕರು ಗೆಲುವು ಸಾಧಿಸಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದರು.

ಜೆಡಿಎಸ್-ಕಾಂಗ್ರೆಸ್ ಪಕ್ಷದ ಸಮನ್ವಯ ಸಮಿತಿ ರಚನೆ ಮಾಡಿ, ಸರಕಾರ ಸುಭದ್ರವಾಗಿ ನಡೆದು, ಸಂಪೂರ್ಣ ಅವಧಿಯನ್ನು ಪೂರೈಸಲಿದೆ. ಇಂದು ರಾತ್ರಿ ನಡೆಯಲಿರುವ ಸಭೆಯಲ್ಲಿ ಹಲವಾರು ವಿಷಯಗಳ ಬಗ್ಗೆ ಚರ್ಚೆ ಮಾಡಲಿದ್ದೇವೆ. ರಾಜ್ಯಪಾಲರು ಬಹುಮತ ಸಾಬೀತುಪಡಿಸಲು 15 ದಿನಗಳ ಕಾಲಾವಕಾಶ ನೀಡಿದ್ದಾರೆ. ಆದರೆ, ಆದಷ್ಟು ಶೀಘ್ರದಲ್ಲಿ ಬಹುಮತ ಸಾಬೀತುಪಡಿಸುತ್ತೇನೆ ಎಂದು ಅವರು ಹೇಳಿದರು.

ನಮ್ಮ ಸರಕಾರದ ಬಹುಮತ ಸಾಬೀತುಪಡಿಸುವ ಸಂದರ್ಭದಲ್ಲಿ ಬಿಜೆಪಿಯವರು ಮತ್ತೆ ಆಪರೇಷನ್ ಕಮಲಕ್ಕೆ ಕೈ ಹಾಕುತ್ತಾರೆ ಎಂಬ ಅರಿವು ತನಗಿದೆ. ಆದರೆ, ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಯಾವುದೇ ಶಾಸಕರು ಅವರ ಆಮಿಷಗಳಿಗೆ ಬಲಿಯಾಗುವುದಿಲ್ಲ. ಐಟಿ, ಇಡಿ ಮೂಲಕ ನಮ್ಮ ಶಾಸಕರಲ್ಲಿ ಭಯ ಹುಟ್ಟಿಸಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ, ಶಾಸಕ ಸಿ.ಎಸ್.ಪುಟ್ಟರಾಜು, ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಂ.ಫಾರೂಕ್ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News