ರಾಜ್ಯಾದ್ಯಂತ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಸಂಭ್ರಮಾಚರಣೆ

Update: 2018-05-19 16:06 GMT

ಬೆಂಗಳೂರು, ಮೇ 19: ಬಿ.ಎಸ್.ಯಡಿಯೂರಪ್ಪ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯಾದ್ಯಂತ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದರು.

ಜೆಡಿಎಸ್‌ನ ಭದ್ರಕೋಟೆಗಳಾದ ಮಂಡ್ಯ, ರಾಮನಗರದಲ್ಲಿ ಜೆಡಿಎಸ್ ಕಾರ್ಯಕರ್ತರ ಜಯಘೋಷಗಳು ತಾರಕಕ್ಕೇರಿತ್ತು. ಪರಸ್ಪರ ಸಿಹಿಯನ್ನು ಹಂಚಿಕೊಂಡು ಕುಣಿದು ಕುಪ್ಪಳಿಸಿದರು. ಹಾಗೆಯೇ ಕಾಂಗ್ರೆಸ್ ಕಾರ್ಯಕರ್ತರು ನಗರದ ಕೆಪಿಸಿಸಿ ಕಚೇರಿ ಸೇರಿದಂತೆ ನಗರದ ವಿವಿಧ ರಸ್ತೆಗಳಲ್ಲಿ ಒಟ್ಟುಗೂಡಿ, ಪರಸ್ಪರ ಶುಭಾಶಯ ಕೋರಿ ಸಂತಸ ವ್ಯಕ್ತಪಡಿಸಿದರು.

ಹಾವೇರಿಯಲ್ಲೂ ಕೂಡ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಹಾನಗಲ್ ಪಟ್ಟಣದಲ್ಲಿ ಸಂಭ್ರಮಾಚರಣೆ ನಡೆಸಿ, ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿಗೆ ಜೈಕಾರ ಹಾಕಿದರು. ನೆಲಮಂಗಲದಲ್ಲೂ ಅದ್ಧೂರಿ ಸಂಭ್ರಮಾಚರಣೆ ನಡೆಸಲಾಯಿತು.

ಕಲಬುರ್ಗಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಸಂಭ್ರಮ ಆಚರಣೆ ಮಾಡಿದರು. ನಗರದ ಜಗತ್ ವೃತ್ತದಲ್ಲಿ ಜಮಾವಣೆಗೊಂಡ ಜೆಡಿಎಸ್ ಕಾರ್ಯಕರ್ತರು, ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮ ಆಚರಣೆ ಮಾಡಿದರು. ನೂತನ ಮುಖ್ಯಮಂತ್ರಿ ಆಗಲಿರುವ ಎಚ್.ಡಿ. ಕುಮಾರಸ್ವಾಮಿ ಪರ ಘೋಷಣೆ ಕೂಗಿ ವಿಜಯೋತ್ಸವ ಆಚರಿಸಿದರು.

ಬೆಳಗಾವಿಯಲ್ಲೂ ಕೂಡ ಸಂಭ್ರಮದ ಭರಾಟೆ ಜೋರಾಗಿತ್ತು. ಕಾರ್ಯಕರ್ತರು ನಗರದ ಚನ್ನಮ್ಮ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ಅಧಿಕಾರ ಹಿಡಿಯಲು ಬಿಜೆಪಿ ಮುಂದಾಗಿತ್ತು ಎಂದು ಆರೋಪಿಸಿದ ಜೆಡಿಎಸ್ ಕಾರ್ಯಕರ್ತರು, ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

ದಾವಣಗೆರೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ನಗರದ ಗಾಂಧಿ ವೃತ್ತದಲ್ಲಿ ಆಗಮಿಸಿದ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪರ ಘೋಷಣೆ ಕೂಗುತ್ತಾ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು. ಬೀದರ್ ನಗರದಲ್ಲೂ ಸಂಭ್ರಮ ಜೋರಾಗಿತ್ತು. ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌ನ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News