ಮಡಿಕೇರಿ: ಆರೋಗ್ಯ ಅಭಿಯಾನದ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಸೂಚನೆ

Update: 2018-05-19 17:01 GMT

ಮಡಿಕೇರಿ,ಮೇ.19: ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಬಾರದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾ ಆರೋಗ್ಯ ಅಭಿಯಾನದ ಸಭೆಯು ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊಬೈಲ್ ಸಂಚಾರಿ ಆರೋಗ್ಯ ಘಟಕಗಳು ಕಾರ್ಯನಿರ್ವಹಣೆಯ ಬಗ್ಗೆ ಮಾಹಿತಿ ನೀಡುತ್ತಾ ಜಿಲ್ಲೆಯಲ್ಲಿ ಒಟ್ಟು 09 ಆ್ಯಂಬ್ಯುಲನ್ಸ್ ಗಳು ತೃಪ್ತಿಕರವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಅವರು ಮಾತನಾಡಿ ಮೊಬೈಲ್ ಸಂಚಾರಿ ಆರೋಗ್ಯ ಘಟಕಗಳು ಜಿಲ್ಲೆಯ ಗಡಿಭಾಗದ ಹಳ್ಳಿಗಳಿಗೆ ಹೆಚ್ಚು ಭೇಟಿ ನೀಡಿ ಗಡಿಭಾಗದ ಜನರಿಗೆ ಅನುಕೂಲವಾಗುವಂತೆ ಕಾರ್ಯನಿರ್ವಹಿಸಬೇಕೆಂದು ಸೂಚಿಸಿದರು.

ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ಜಗದೀಶ್ ಮಾತನಾಡಿ, ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾರ್ವಜನಿಕ ಮಾಹಿತಿ ಕೇಂದ್ರದ ಬಗ್ಗೆ ಸಭೆಗೆ ತಿಳಿಸಿದರು. ಜಿಲ್ಲಾಧಿಕಾರಿ ಅವರು ಪ್ರತಿಕ್ರಿಯಿಸಿ ಮಾಹಿತಿ ಕೇಂದ್ರವು ಸಾರ್ವಜನಿಕರಿಗೆ ಪೂರ್ಣ ಪ್ರಮಾಣದಲ್ಲಿ ಅನುಕೂಲವಾಗುವಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಜಿ.ಪಂ.ಸಿಇಒ ಪ್ರಶಾಂತ ಕುಮಾರ್ ಮಿಶ್ರ ಅವರು ಮಾತನಾಡಿ, ಜಿಲ್ಲಾ ಆಸ್ಪತ್ರೆಯಲ್ಲಿ ಇರುವ ಸಿಸಿ ಟಿವಿಗಳ ದೃಶಾವಳಿಗಳನ್ನು ಪ್ರತಿ ದಿನ ವೀಕ್ಷಣೆ ಮಾಡಬೇಕು ಹಾಗೂ ಬರುವಂತಹ ದೂರುಗಳನ್ನು ಪರಿಶೀಲಿಸಿ ಕ್ರಮ ಕೈಗೊಳಬೇಕು ಎಂದು ತಿಳಿಸಿದರು.

ಆರ್‍ಸಿಎಚ್ ಅಧಿಕಾರಿ ಡಾ.ನಿಲೇಶ್ ಅವರು ಮಾತನಾಡಿ, ಇಂದ್ರಧನುಷ್ ಲಸಿಕಾ ಅಭಿಯಾನದ ಬಗ್ಗೆ ತಿಳಿಸಿದರು. ಗ್ರಾಮ ಸ್ವರಾಜ ಯೋಜನೆಯಡಿಯಲ್ಲಿ ಸೋಮವಾರಪೇಟೆ ತಾಲೂಕಿನ ನಿಲುವಾಗಿಲು ಗ್ರಾಮವನ್ನು ಸೇರ್ಪಡೆ ಮಾಡಲಾಗಿದೆ. ಜಿಲ್ಲೆಯಾದ್ಯಂತ ಮೇ 23, 25, 26 ಮತ್ತು ಜೂನ್ 20, 22, 23 ಹಾಗೂ ಜುಲೈ 18, 20, 21 ರಂದು ಮೂರು ಹಂತದಲ್ಲಿ ಇಂದ್ರಧನುಷ್ ಲಸಿಕಾ ಅಭಿಯಾನ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಮಾತನಾಡಿ ಇಂದ್ರಧನುಷ್ ಲಸಿಕಾ ಅಭಿಯಾನವು ಶೇ.100 ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಆರ್‍ಸಿಎಚ್ ಅಧಿಕಾರಿ ಡಾ.ನಿಲೇಶ್ ಅವರು ಮಾತನಾಡಿ, ಅತಿಸಾರ ಭೇದಿಯ ತೀವ್ರತರ ನಿಯಂತ್ರಣಾ ಪಾಕ್ಷಿಕ ಕಾರ್ಯಕ್ರಮವು ಮೇ 28 ರಿಂದ ಜೂನ್ 09 ರವರೆಗೆ ನಡೆಯಲಿದ್ದು, ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿಯೂ ನಡೆಯಲಿದೆ ಹಾಗೂ ಆಶಾ ಕಾರ್ಯಕರ್ತರು ಎಲ್ಲಾ ಮನೆಗಳಿಗೆ ತೆರಳಿ ಓಆರ್‍ಎಸ್ ಮಹತ್ವ ಹಾಗೂ ಅದರ ಬಳಕೆಯ ಬಗ್ಗೆ ಮಾಹಿತಿ ನೀಡುವರು ಹಾಗೂ ಪ್ರತಿ ಆರೋಗ್ಯ ಕೇಂದ್ರಗಳಲ್ಲಿಯೂ ಓಆರ್‍ಎಸ್ ವಿತರಿಸಲಾಗುವುದು ಎಂದು ತಿಳಿಸಿದರು

ಜಿಲ್ಲಾಧಿಕಾರಿ ಮಾತನಾಡಿ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಪ್ರತಿ ಶಾಲೆಗಳಲ್ಲಿ ವಿತರಿಸಬೇಕು. ಬಿರುನಾಣಿ ಗ್ರಾಮದಲ್ಲಿರುವ ಅಂಗನವಾಡಿಯಲ್ಲಿ ಮಕ್ಕಳ ದಾಖಲಾತಿ ಕಡಿಮೆ ಇರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಅವರು ದಾಖಲಾತಿ ಹೆಚ್ಚಳಕ್ಕೆ ಕ್ರಮವಹಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಮಲ್ಲೇಸ್ವಾಮಿ ಅವರಿಗೆ ಸೂಚಿಸಿದರು.

ಸಭೆಯಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ.ಕಾರ್ಯಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವಕುಮಾರ, ಜಿಲ್ಲಾ ಆಯುಷ್ ಅಧಿಕಾರಿ ಡಾ.ರಾಮಚಂದ್ರ ಇತರರು ಹಾಜರಿದ್ದರು.

ಜಾಗೃತಿ ಜಾಥಾ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ “ಡೆಂಗ್ಯೂ ಜ್ವರದ ಮುಂಜಾಗ್ರತಾ ಕ್ರಮಗಳ ಜಾಥಾ” ಕಾರ್ಯಕ್ರಮವು ಮೇ 23 ರಂದು ಬೆಳಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪದವಿ ಕಾಲೇಜಿನಿಂದ ಪ್ರಾರಂಭಿಸಿ ಖಾಸಗಿ ಬಸ್ ನಿಲ್ದಾಣದ ಮೂಲಕ  ಜನರಲ್ ಕೆ.ಎಂ.ತಿಮ್ಮಯ್ಯ ವೃತ್ತದವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಅವರು ತಿಳಿಸಿದ್ದಾರೆ. 
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News