ಲಿಂಗಾಯತರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಿ: ಎಂ.ಬಿ.ಪಾಟೀಲ್

Update: 2018-05-22 12:44 GMT

ಬೆಂಗಳೂರು, ಮೇ 22: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಎರಡು ಉಪಮುಖ್ಯಮಂತ್ರಿ ಹುದ್ದೆಗಳು ಸೃಷ್ಟಿಯಾಗಬೇಕು. ಈ ಪೈಕಿ ಒಂದು ಹುದ್ದೆಯನ್ನು ಲಿಂಗಾಯತ ಸಮುದಾಯಕ್ಕೆ ನೀಡಬೇಕು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಒತ್ತಾಯಿಸಿದ್ದಾರೆ.

ಮಂಗಳವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತರ ಪೈಕಿ ನನಗಾಗಲಿ, ಶಾಮನೂರು ಶಿವಶಂಕರಪ್ಪ ಅವರಿಗಾಗಲಿ ಯಾರಿಗಾದರೂ ಉಪಮುಖ್ಯಮಂತ್ರಿ ಹುದ್ದೆ ನೀಡಲಿ ಎಂದರು.

ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿರುವ 78 ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳೇ. ಆದರೆ, ಎಲ್ಲರನ್ನೂ ಸಚಿವರನ್ನಾಗಿ ಮಾಡುವುದು ಸಾಧ್ಯವಿಲ್ಲ. ಜಾತಿ, ಸಮುದಾಯ, ಹಿರಿತನ ಎಲ್ಲವನ್ನೂ ಪರಿಗಣಿಸಬೇಕಾಗುತ್ತದೆ ಎಂದು ಎಂ.ಬಿ.ಪಾಟೀಲ್ ಹೇಳಿದರು.

ನಾನು ಸಚಿವ ಸ್ಥಾನದ ಆಕಾಂಕ್ಷಿ. ಉಪ ಮುಖ್ಯಮಂತ್ರಿಯಾಗಬೇಕೆಂಬ ಆಸೆಯೂ ಇದೆ. ನಮ್ಮ ಸಮುದಾಯದಿಂದ 16 ಮಂದಿ ಗೆಲುವು ಸಾಧಿಸಿದ್ದಾರೆ. ಆದರೆ, ಯಾರಿಗೆ ಜವಾಬ್ದಾರಿ ನೀಡಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದು ಅವರು ತಿಳಿಸಿದರು.

ಡಿ.ಕೆ.ಶಿವಕುಮಾರ್ ಹಾಗೂ ಎಂ.ಬಿ.ಪಾಟೀಲರಿಗೆ ಸಚಿವ ಸ್ಥಾನ ನೀಡಬೇಡಿ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸೂಚನೆ ನೀಡಿದ್ದಾರೆ ಎಂಬುದೆಲ್ಲ ಸತ್ಯಕ್ಕೆ ದೂರವಾದ ಮಾತು. ನನಗೆ ಜಲಸಂಪನ್ಮೂಲ ಖಾತೆಯೇ ಬೇಕೆಂದಿಲ್ಲ. ಸಮ್ಮಿಶ್ರ ಸರಕಾರ ರಚನೆಯಾಗುತ್ತಿರುವುದರಿಂದ ಈ ಬಗ್ಗೆ ಪಕ್ಷದ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಎಂ.ಬಿ.ಪಾಟೀಲ್ ಹೇಳಿದರು.

ದಕ್ಷಿಣ ಕರ್ನಾಟಕ ಭಾಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅಥವಾ ಹಿರಿಯ ಶಾಸಕ ಡಿ.ಕೆ.ಶಿವಕುಮಾರ್‌ಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಿದರೆ, ಉತ್ತರ ಕರ್ನಾಟಕ ಭಾಗಕ್ಕೂ ಒಬ್ಬರಿಗೆ ಅವಕಾಶ ಮಾಡಿಕೊಡಬೇಕು ಎಂದು ಅವರು ಆಗ್ರಹಿಸಿದರು.

ನಮ್ಮ ಸಮುದಾಯದ ಶಾಸಕರು ನಿನ್ನೆ ಸಭೆ ನಡೆಸಿದ್ದೇವೆ. ಅಲ್ಲದೆ, ನಮ್ಮ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಹುದ್ದೆ ನೀಡಿ ಎಂದು ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯನವರಿಗೆ ವಿನಂತಿ ಮಾಡಿದ್ದೇವೆ. ಆದರೆ, ಈ ಸಂಬಂಧ ಮಾತನಾಡಲು ತಿಪ್ಪಣ್ಣ ಯಾರು ಎಂದು ಎಂ.ಬಿ.ಪಾಟೀಲ್ ಪ್ರಶ್ನಿಸಿದರು.


ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರವು ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ. ಚುನಾವಣೆಯೇ ಬೇರೆ, ನಮ್ಮ ಅಸ್ಮಿತೆಯೇ ಬೇರೆ. ನಾನು ಎಲ್ಲಿಯೂ ಲಿಂಗಾಯತ ಅಂತ ಟ್ರಂಪ್ ಕಾರ್ಡ್ ಬಳಸಿಲ್ಲ. ಪ್ರತ್ಯೇಕ ಲಿಂಗಾಯತ ಧರ್ಮದ ಕೂಗು ಮುಂದುವರಿಯಲಿದೆ. ಜಾಮದಾರ್ ಜೊತೆ ಸೇರಿ ಮುಂದುವರಿಸುತ್ತೇವೆ. ಚುನಾವಣೆ ಮುಗಿದರೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಎಂ.ಬಿ.ಪಾಟೀಲ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News