×
Ad

ರೈತರ ಸಾಲಮನ್ನಾ ವಿಚಾರದಲ್ಲಿ ಏಕಮುಖ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ: ಶಾಸಕ ಸಿ.ಎಸ್.ಪುಟ್ಟರಾಜು

Update: 2018-05-22 22:17 IST

ಮಂಡ್ಯ, ಮೇ 22: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರವಾದ್ದರಿಂದ ರೈತರ ಸಾಲಮನ್ನಾ ವಿಚಾರದಲ್ಲಿ ಏಕಮುಖ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಮೇಲುಕೋಟೆ ಶಾಸಕ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಜೆಡಿಎಸಗೆ 113 ಶಾಸಕರ ಬಹುಮತ ಸಿಕ್ಕಿದ್ದರೆ ಸರಕಾರ ರಚನೆಯ 24 ಗಂಟೆಯೊಳಗೆ ರೈತರ ಎಲ್ಲ ಸಾಲಮನ್ನಾ ಮಾಡಲಾಗುತ್ತಿತ್ತು ಎಂದರು.

ಆದರೂ, ಕಾಂಗ್ರೆಸ್ ಮುಖಂಡರ ಮನವೊಲಿಸಿ ರೈತರ ಸಾಲಮನ್ನಾ ಮಾಡಲಾಗುವುದು. ಯಾವುದೇ ಕಾರಣಕ್ಕೂ ಸಾಲಮನ್ನಾ ಮಾಡುವ ವಿಚಾರವಾಗಿ ಹಿಂದೆ ಸರಿಯುವುದಿಲ್ಲ ಎಂದು ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ. ಕಬ್ಬು ಬೆಳೆಗಾರರಿಗೆ ಸೂಕ್ತ ಬೆಂಬಲ ಬೆಲೆ ನಿಗದಿ ಮಾಡಿ ಆರ್ಥಿಕವಾಗಿ ಸಬಲರನ್ನಾಗಿ ಮಾಡಲಾಗುವುದು ಎಂದು ಅವರು ಹೇಳಿದರು.

ಪಕ್ಷದ ವರಿಷ್ಠರ ಆದೇಶದ ಮೇರೆಗೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯ ರಾಜಕಾರಣಕ್ಕೆ ಬಂದಿದ್ದೇನೆ. ಜನರು ಪಕ್ಷ ಹಾಗೂ ನನ್ನ ನಿರೀಕ್ಷೆಯನ್ನು ಎತ್ತಿ ಹಿಡಿದು ಯಶಸ್ಸು ತಂದುಕೊಟ್ಟಿದ್ದಾರೆ. ಕುಮಾರಸ್ವಾಮಿ ಅವರು ಯಾವುದೇ ಖಾತೆ ವಹಿಸಿದರೂ ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.

ಮೈಷುಗರ್ ಹಾಗೂ ಪಾಂಡವಪುರ ಸಕ್ಕರೆ ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸಿ ಶಾಶ್ವತವಾಗಿ ಕಾರ್ಯನಿರ್ವಹಿಸುವಂತೆ ಮಾಡಲಾಗುವುದು. ಜಿಲ್ಲೆಯ ಯುವಜನತೆಗೆ ಸೂಕ್ತ ಉದ್ಯೋಗ ಒದಗಿಸುವ ಕಾರ್ಯಸೂಚಿ ರಚಿಸಲಾಗಿದೆ. ಒಟ್ಟಾರೆ ಜಿಲ್ಲೆಯ ಅಭಿವೃದ್ಧಿಗೆ ಎಲ್ಲಾ ಶಾಸಕರು ಕಂಕಣಬದ್ಧರಾಗಿ ನಿಲ್ಲುತ್ತೇವೆ ಎಂದು ಅವರು ಭರವಸೆ ನೀಡಿದರು.

ಇತ್ತೀಚೆಗೆ ಸುರಿದ ಬಿರುಗಾಳಿ ಸಹಿತ ಮಳೆಯಿಂದಾಗಿ ಮಂಗಲ ಗ್ರಾಮದಲ್ಲಿ ವಿದ್ಯುತ್ ತಂತಿ ಬಿದ್ದು ಎರಡು ಎಮ್ಮೆಗಳು ಬಲಿಯಾಗಿದ್ದು, ಎಮ್ಮೆ ಕಳೆದುಕೊಂಡ ರೈತರಿಗೆ ಸಂತ್ರಸ್ಥನಿಗೆ ತಲಾ 10 ಸಾವಿರದಂತೆ ಪಕ್ಷದ ವತಿಯಿಂದ ಪರಿಹಾರ ವಿತರಿಸಿದರು.

ಸಮಾರಂಭಕ್ಕೆ ಆಗಮಿಸಲು ಮನವಿ:

ನಾಳೆ (ಮೇ 23) ಬೆಂಗಳೂರಿನಲ್ಲಿ ನಡೆಯಲಿರುವ ಎಚ್.ಡಿ.ಕುಮಾರಸ್ವಾಮಿ ಅವರ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಜಿಲ್ಲೆಯ ಜೆಡಿಎಸ್, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಬೇಕು ಎಂದು ಪುಟ್ಟರಾಜು ಮನವಿ ಮಾಡಿದರು. ಜಿಲ್ಲೆಯ ಏಳೂ ಕ್ಷೇತ್ರಗಳಲ್ಲೂ ಜೆಡಿಎಸ್ ಗೆಲ್ಲಿಸಿದ ಜನತೆಗೆ ಕೃತಜ್ಞತೆ ಸಲ್ಲಿಸಿದ ಅವರು, ಜನತೆಯ ಆಕಾಂಕ್ಷೆಯಂತೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ ಎಂದರು.

ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೆಶ್, ಮಾಜಿ ಶಾಸಕ ಜಿ.ಬಿ.ಶಿವಕುಮಾರ್, ಮುಖಂಡರಾದಎಂ.ಬಿ.ಶ್ರೀನಿವಾಸ್, ಜಯರಾಮು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News