ಶಾಮನೂರು ಶಿವಶಂಕರಪ್ಪರಿಗೆ ಡಿಸಿಎಂ ಸ್ಥಾನ ಬೇಡ: ಜಾಗತಿಕ ಲಿಂಗಾಯತ ಮಹಾಸಭಾ ಒತ್ತಾಯ

Update: 2018-05-22 17:58 GMT

ಮೈಸೂರು,ಮೇ.22: ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದ ವಿರೋಧಿಯಾಗಿದ್ದ ಮಾಜಿ ಸಚಿವ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪನವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬಾರದೆಂದು ಜಾಗತಿಕ ಲಿಂಗಾಯತ ಮಹಾಸಭಾ ಒತ್ತಾಯಿಸಿದೆ.

ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಸಭಾದ ರಾಜ್ಯ ಕಾರ್ಯದರ್ಶಿ ಮಹದೇವಪ್ಪ ಮಾತನಾಡಿ, ಪ್ರತ್ಯೇಕ ಲಿಂಗಾಯತ ಧರ್ಮದ ವಿರೋಧಿಯಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ಈ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ ವಯೋವೃದ್ಧರಾಗಿದ್ದು, ಉಪಮುಖ್ಯಮಂತ್ರಿ ಸ್ಥಾನದಿಂದ ಕರ್ತವ್ಯ ನಿರ್ವಹಿಸಲು ಸಾಧ್ಯವಿಲ್ಲ. ಅಂತಹವರನ್ನು ಅಧಿಕಾರದಿಂದ ದೂರವಿಡಬೇಕು ಎಂದು ಮನವಿ ಮಾಡಿದರು.

ಅಲ್ಲದೇ ಪ್ರಾದೇಶಿಕ ನ್ಯಾಯಕ್ಕಾಗಿ ಹೈದ್ರಾಬಾದ್ ಕರ್ನಾಟಕ ಪ್ರತಿನಿಧಿಯೊಬ್ಬರಿಗೆ ಉನ್ನತ ಹುದ್ದೆ ನೀಡಬೇಕಾಗಿದ್ದು, ಈ ನಿಟ್ಟಿನಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಮುಂಚೂಣಿಯಲ್ಲಿದ್ದ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.

ಜೆಡಿಎಸ್-ಕಾಂಗ್ರೆಸ್ ಪಕ್ಷದಿಂದ ಸಮುದಾಯದವರು 20 ಮಂದಿ ಶಾಸಕರು ಆಯ್ಕೆಯಾಗಿದ್ದು, ನಮ್ಮ ಧರ್ಮದವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕು. ಅಲ್ಲದೇ ಡಾ.ಪರಮೇಶ್ವರ್ ಅವರು ಉಪಮುಖ್ಯಮಂತ್ರಿ ಮಾಡುವುದನ್ನು ಮಹಾಸಭಾವು ಸ್ವಾಗತಿಸುವುದು ಎಂದು ಸ್ಪಷ್ಟಪಡಿಸಿದರು.

ಸಭಾದ ಮುಖಂಡರಾದ ಲೋಕೇಶ್, ಜಯಣ್ಣ, ಗಂಗಾಧರಪ್ಪ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News