ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿರುದ್ಧ ಬಿಜೆಪಿ ಪ್ರತಿಭಟನೆ

Update: 2018-05-23 13:03 GMT

ಬೆಂಗಳೂರು, ಮೇ 23: ಜೆಡಿಎಸ್ ನಾಯಕರು ಎಷ್ಟೇ ದೇವರು-ದಿಂಡಿರುಗಳನ್ನು ಸುತ್ತಿದರೂ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರ ಮೂರು ತಿಂಗಳ ನಂತರ ಮುಂದುವರೆಯುವುದಿಲ್ಲವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದರು.

ಬುಧವಾರ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರ ರಚನೆಯನ್ನು ಖಂಡಿಸಿ ನಗರದ ಆನಂದರಾವ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಸಚಿವ ಸಂಪುಟ ವಿಸ್ತರಣೆಯ ನಂತರ ಸರಕಾರದ ಅಳಿವು-ಉಳಿವಿನ ಪ್ರಶ್ನೆ ಎದುರಾಗಲಿದೆ ಎಂದು ತಿಳಿಸಿದರು.

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರವು ಜನಾದೇಶದ ವಿರುದ್ಧವಾಗಿ ರಚನೆಗೊಂಡಿರುವಂತಹದ್ದಾಗಿದೆ. 10 ಜನರಲ್ಲಿ 8 ಮಂದಿ ಸಮ್ಮಿಶ್ರ ಸರಕಾರದ ವಿರುದ್ಧವಿದ್ದು, ಸಮ್ಮಿಶ್ರ ಸರಕಾರ ಯಾವಾಗ ಬೇಕಾದರು ಪತನಗೊಳ್ಳಬಹುದು. ಹೀಗಾಗಿ ಬಿಜೆಪಿ ಕಾರ್ಯಕರ್ತರು ಆತಂಕ ಪಡುವ ಅಗತ್ಯವಿಲ್ಲವೆಂದು ಅವರು ಹೇಳಿದರು.

ಕುರುಬ ಸಮುದಾಯದ ಬೆಂಬಲದಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ 50ಕ್ಕೂ ಹೆಚ್ಚು ಸೀಟುಗಳು ದೊರೆತಿವೆ. ಆದರೆ, ಸೋನಿಯಾಗಾಂಧಿ ಹಾಗೂ ರಾಹುಲ್‌ಗಾಂಧಿ ಸಮ್ಮಿಶ್ರ ಸರಕಾರದ ರಚನೆಯ ಕುರಿತು ಕುಮಾರಸ್ವಾಮಿಯನ್ನು ಮಾತ್ರ ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ. ಆ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುರುಬ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.

ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಕುರಿತು ಕಾಂಗ್ರೆಸ್‌ನಲ್ಲಿಯೇ ಅತೃಪ್ತಿಯಿದೆ. ಕಾಂಗ್ರೆಸ್ ಶಾಸಕರನ್ನು ಹೊಟೇಲ್‌ನಲ್ಲಿ ಬಂಧಿಸಿಡಲಾಗಿದೆ. ಈ ಬಗ್ಗೆ ಕಾಂಗ್ರೆಸ್ ಶಾಸಕರು ಬಹಿರಂಗವಾಗಿ ಕಾಂಗ್ರೆಸ್ ನಾಯಕರು ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಂತಹ ಅತೃಪ್ತ ಶಾಸಕರು ಬಿಜೆಪಿಗೆ ಬಂದರೆ ಸ್ವಾಗತಿಸಲಾಗುವುದು ಎಂದು ಅವರು ಹೇಳಿದರು.

ಬಿಜೆಪಿ ಮುಖಂಡ ಆರ್.ಅಶೋಕ್ ಮಾತನಾಡಿ, ರಾಜ್ಯದ ಜನತೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿಗೆ ಮೊದಲ ಸ್ಥಾನವನ್ನು ನೀಡಿತ್ತು. ಆದರೆ, ತೃತೀಯ ಸ್ಥಾನ ಪಡೆದ ಜೆಡಿಎಸ್ ಕಾಂಗ್ರೆಸ್ ಜೊತೆ ಸೇರಿ ಅಧಿಕಾರ ನಡೆಸುತ್ತಿರುವುದು ವಿಪರ್ಯಾಸವಾಗಿದೆ ಎಂದು ಟೀಕಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಅರವಿಂದ ಲಿಂಬಾವಳಿ, ಶೋಭಾ ಕರಂದ್ಜಾಜೆ, ಮುನಿರಾಜು ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

ರಾಜ್ಯ ಬಂದ್ ಎಚ್ಚರಿಕೆ
ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರು ಬ್ಯಾಂಕ್‌ಗಳಲ್ಲಿ ಮಾಡಿರುವ 58 ಸಾವಿರ ಕೋಟಿ ರೂ.ರೈತರ ಸಾಲ ಸೇರಿದಂತೆ ರೈತರ ಖಾಸಗಿ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸಾಲ ಮನ್ನಾ ಮಾಡುವುದು ಅಷ್ಟು ಸುಲಭವಲ್ಲ. ಒಂದು ವೇಳೆ ಕುಮಾರಸ್ವಾಮಿ ಸಾಲ ಮನ್ನಾ ಮಾಡದೇ ಮಾತಿಗೆ ತಪ್ಪಿದರೆ ರಾಜ್ಯಾದ್ಯಂತ ಬಂದ್ ಮಾಡಿ ಉಗ್ರ ಹೋರಾಟ ಮಾಡಿ ಜೆಡಿಎಸ್‌ಗೆ ತಕ್ಕ ಪಾಠ ಕಲಿಸದಿದ್ದರೆ ನಾನು ಯಡಿಯೂರಪ್ಪನೇ ಅಲ್ಲ.
-ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿಜೆಪಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News