×
Ad

ಮಡಿಕೇರಿ: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ವಿರೋಧಿಸಿ ಬಿಜೆಪಿ ಪ್ರತಿಭಟನೆ

Update: 2018-05-23 17:32 IST

ಮಡಿಕೇರಿ,ಮೇ.23: ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಲು ಮುಂದಾಗಿವೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿಯ ಕೊಡಗು ಜಿಲ್ಲಾ ಘಟಕ ಮಡಿಕೇರಿ ನಗರದಲ್ಲಿ ಪ್ರತಿಭಟನೆಯ ಮೂಲಕ ಕರಾಳ ದಿನ ಆಚರಿಸಿದರು.

ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಬಿ.ಬಿ.ಭಾರತೀಶ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರುಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. 

ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ.ಭಾರತೀಶ್ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಬೇಕೆಂದು ಜನಾದೇಶ ದೊರೆತಿತ್ತು. ಆದರೆ ಕಾಂಗ್ರೆಸ್ ಹಾಗೂ ಜೆಡಿಎಸ್ ಅಪವಿತ್ರ ಮೈತ್ರಿಯನ್ನು ಮಾಡಿಕೊಳ್ಳುವ ಮೂಲಕ ರಾಜ್ಯದ ಜನತೆಯ ಭಾವನೆಗೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ದಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಿದರು.

ಜನರು ತಿರಸ್ಕರಿಸಿದ ಸರ್ಕಾರ ಮತ್ತೆ ರಾಜ್ಯದಲ್ಲಿ ಹಿಂಬಾಗಿಲಿನಿಂದ ಅಧಿಕಾರ ನಡೆಸಲು ಮುಂದಾಗಿದೆ. ಹೆಚ್.ಡಿ.ಕುಮಾರಸ್ವಾಮಿ ಅವರು ಚುನಾವಣಾ ಪೂರ್ವದಲ್ಲಿ ರಾಷ್ಟ್ರೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲವೆಂದು ಪ್ರಮಾಣ ಮಾಡಿದ್ದರು. ಜನರ ವಿರೋಧವಿದ್ದರೂ ಮೈತ್ರಿ ಸರ್ಕಾರ ರಚನೆಗೆ ಮುಂದಾಗಿರುವ ಎರಡು ಪಕ್ಷಗಳ ನಾಯಕರ ಕ್ಷುಲ್ಲಕ ರಾಜಕಾರಣವನ್ನು ಬಿಜೆಪಿ ಖಂಡಿಸುತ್ತದೆ ಎಂದು ಭಾರತೀಶ್ ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಂತೆಯಂಡ ರವಿಕುಶಾಲಪ್ಪ ಮಾತನಾಡಿ, ಜನರ ತೀರ್ಪಿಗೆ ವಿರುದ್ಧವಾಗಿ ಅಪವಿತ್ರ ಮೈತ್ರಿಯ ಸರ್ಕಾರ ರಚನೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ಭ್ರಷ್ಟ ಕಾಂಗ್ರೆಸ್‍ನ್ನು ಮನೆಗೆ ಕಳಿಸುವ ತೀರ್ಪನ್ನು ಮತದಾರರು ನೀಡಿದ್ದರೂ ಇದಕ್ಕೆ ವಿರುದ್ಧವಾಗಿ ರಚನೆಯಾಗುತ್ತಿರುವ ಸರ್ಕಾರ ಬಹುದಿನ ಉಳಿಯುವುದಿಲ್ಲವೆಂದು ಭವಿಷ್ಯ ನುಡಿದರು. ರೈತರ ಸಾಲಮನ್ನಾಕ್ಕೆ ಕುಮಾರಸ್ವಾಮಿ ಅವರು ತಕ್ಷಣ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಎ.ಹರೀಶ್, ಬಿಜೆಪಿ ನಗರಾಧ್ಯಕ್ಷರಾದ ಮಹೇಶ್ ಜೈನಿ, ಮಡಿಕೇರಿ ತಾಲೂಕು ಅಧ್ಯಕ್ಷ ತಳೂರು ಕಿಶೋರ್ ಕುಮಾರ್, ಪ್ರಮುಖರಾದ ರೀನಾ ಪ್ರಕಾಶ್, ಅನಿತಾ ಪೂವಯ್ಯ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News