ಸಾರ್ವಜನಿಕ ಶಿಕ್ಷಣ ಇಲಾಖೆ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್ ಮಧ್ಯಂತರ ತಡೆ

Update: 2018-05-23 14:50 GMT

ಬೆಂಗಳೂರು, ಮೇ 23: ಶಿಕ್ಷಣ ಹಕ್ಕು ಕಾಯ್ದೆ ಅಡಿಯಲ್ಲಿ 2018-19ನೆ ಸಾಲಿಗೆ ಶೇ.25ರಷ್ಟು ಮಕ್ಕಳ ದಾಖಲಾತಿ ಮಾಡಿಕೊಳ್ಳುವಂತೆ ನಗರದ ನ್ಯೂ ಹೊರೈಜಾನ್ ಶಿಕ್ಷಣ ಮತ್ತು ಸಾಂಸ್ಕೃತಿಕ ಟ್ರಸ್ಟ್‌ಗೆ ಸೂಚಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ತಮಗೆ ಭಾಷಾ ಅಲ್ಪಸಂಖ್ಯಾತ ಮಾನ್ಯತೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ರಾಷ್ಟ್ರೀಯ ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಆಯೋಗದ ಕ್ರಮ ಪ್ರಶ್ನಿಸಿ ಹಾಗೂ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಆರ್‌ಟಿಇ ಕಾಯ್ದೆಯಡಿಯಲ್ಲಿ ಶೇ. 25ರಷ್ಟು ಮಕ್ಕಳಿಗೆ ಪ್ರವೇಶಾತಿ ಕಲ್ಪಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಜಾರಿಗೊಳಿಸಿರುವ ನೋಟಿಸ್ ರದ್ದುಕೋರಿ ನ್ಯೂ ಹೊರೈಜಾನ್ ಶಿಕ್ಷಣ ಸಂಸ್ಥೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ರಜಾಕಾಲದ ಪೀಠ, ಈ ಮಧ್ಯಂತರ ಆದೇಶ ನೀಡಿತು.

ಇದೇ ವೇಳೆ, ರಾಜ್ಯ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸೇರಿ ಅರ್ಜಿಯಲ್ಲಿನ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದ ನ್ಯಾಯಪೀಠ, ವಿಚಾರಣೆ ಮುಂದೂಡಿತು.

ಅರ್ಜಿದಾರರ ವಾದವೇನು?: ಸಿಂಧಿ ಭಾಷೆ ಮಾತನಾಡುವ ತಮ್ಮದು ಭಾಷಾ ಅಲ್ಪಸಂಖ್ಯಾತ ಶಾಲೆಯಾಗಿದ್ದು, ಶಿಕ್ಷಣ ಹಕ್ಕು ಕಾಯ್ದೆ ಅಡಿಯಲ್ಲಿ ಶೇ.25 ಮಕ್ಕಳ ದಾಖಲಾತಿಯಿಂದ ವಿನಾಯಿತಿ ಇದ್ದು, ತಮಗೆ ಭಾಷಾ ಅಲ್ಪಸಂಖ್ಯಾತ ಸ್ಥಾನಮಾನ ಕಲ್ಪಿಸಲು ಕೇಂದ್ರ ಸರಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಈ ಹಿಂದೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ವಿಭಾಗೀಯ ಪೀಠ, ಈ ಸಂಬಂಧ ರಾಷ್ಟ್ರೀಯ ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಆಯೋಗಕ್ಕೆ ಮನವಿ ಸಲ್ಲಿಸುವಂತೆ ಅರ್ಜಿದಾರರಿಗೆ ನಿರ್ದೇಶಿಸಿತ್ತು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಹೈಕೋರ್ಟ್ ನಿರ್ದೇಶನದಂತೆ ಅಲ್ಪಸಂಖ್ಯಾತ ಮಾನ್ಯತೆಗೆ ಕೋರಿ ಆಯೋಗದ ಮುಂದೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ನಮ್ಮ ಅರ್ಜಿಯನ್ನು ಕಳೆದ ಮೇ 3ರಂದು ವಜಾಗೊಳಿಸಿರುವ ಆಯೋಗವು, ಭಾಷಾ ಅಲ್ಪಸಂಖ್ಯಾತ ಮಾನ್ಯತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ತಮ್ಮ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ತಿಳಿಸಿದೆ. ಇದಾದ ಬಳಿಕ ಮೇ 11ರಂದು ನೋಟಿಸ್ ಜಾರಿಗೊಳಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಪ್ರಸಕ್ತ ಸಾಲಿಗೆ ಶೇ.25 ಮಕ್ಕಳನ್ನು ಆರ್‌ಟಿಇ ಕಾಯ್ದೆ ಅಡಿಯಲ್ಲಿ ದಾಖಲಿಸಿಕೊಳ್ಳುವಂತೆ ಸೂಚಿಸಿದ್ದು, ಆಯೋಗದ ಆದೇಶ ಹಾಗೂ ಶಿಕ್ಷಣ ಇಲಾಖೆಯ ನೋಟಿಸ್ ರದ್ದುಪಡಿಸುವಂತೆ ಅರ್ಜಿದಾರರು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News