ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರ ರಚನೆಗೆ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸ್ವಾಗತ

Update: 2018-05-23 16:50 GMT

ಬೆಂಗಳೂರು, ಮೇ 23: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರ ರಚನೆಯಾಗಿ ಮುಖ್ಯಮಂತ್ರಿಯಾಗಿ ಎಚ್.ಡಿ.ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿರುವುದನ್ನು ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಸ್ವಾಗತಿಸಿದೆ.

ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ವೇದಿಕೆ ಯಾವುದೆ ರಾಜಕೀಯ ಪಕ್ಷ, ಸಿದ್ಧಾಂತಗಳಿಗೆ ಸೇರಿಲ್ಲ. ಆದರೆ, ದೇಶದ ಸಂವಿಧಾನದಲ್ಲಿ ಅಚಲ ನಂಬಿಕೆ ಇಟ್ಟಿದ್ದು, ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ತಾರತಮ್ಯ ರಹಿತ ಸಮಾಜವನ್ನು ಕಟ್ಟಿಕೊಳ್ಳಬೇಕೆಂಬ ರಾಜಕೀಯ ಸಿದ್ಧಾಂತಕ್ಕೆ ಬದ್ಧವಾಗಿದೆ. ಹೀಗಾಗಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರ ಸಂವಿಧಾನಕ್ಕೆ ಬದ್ಧವಾಗಿ ಆಡಳಿತ ನಡೆಸಲಿ ಎಂದು ಸಮನ್ವಯ ವೇದಿಕೆಯ ಪೋಷಕ ನಿರಂಜನಾರಾಧ್ಯ ಆಶಿಸಿದರು.

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಆಡಳಿತಾವಧಿಯಲ್ಲಿ ಸರಕಾರಿ ಶಾಲೆಗಳನ್ನು ಉಳಿಸಿ, ಬೆಳೆಸಿ ನೆರೆಹೊರೆಯ ಸಮಾನ ಶಾಲೆಗಳನ್ನಾಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಆ ನಿಟ್ಟಿನಲ್ಲಿ ಸರಕಾರಿ ಶಾಲೆಗಳ ಸಬಲೀಕರಣ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಲು ಕೂಡಲೇ ಕ್ರಿಯಾ ಯೋಜನೆ ತಯಾರಿಸಬೇಕೆಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News