ಬಿಎಸ್‌ವೈರಿಂದ ಪ್ರಜಾಪ್ರಭುತ್ವಕ್ಕೆ ಅಪಮಾನ: ಡಿ.ಕೆ.ಶಿವಕುಮಾರ್
ಬೆಂಗಳೂರು, ಮೇ 25: ವಿಶ್ವಾಸ ಮತಯಾಚನೆಗೂ ಮೊದಲೇ ಸಭಾತ್ಯಾಗ ಮಾಡುವ ಮೂಲಕ ವಿಧಾನಸಭೆ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಕೆಟ್ಟ ಸಂಸದೀಯ ವ್ಯವಹಾರಕ್ಕೆ ಕೈ ಹಾಕಿದ್ದು, ಇದು ಪ್ರಜಾಪ್ರಭುತ್ವಕ್ಕೆ ಅಪಮಾನ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.
ಶುಕ್ರವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೈತರ ಸಾಲಮನ್ನಾ ಮಾಡದಿದ್ದರೆ ಕರ್ನಾಟಕ ಬಂದ್ ಕರೆ ನೀಡುತ್ತೇವೆಂದು ಬ್ಲಾಕ್‌ಮೇಲ್ ಮಾಡುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
ರಾಜ್ಯದ ರೈತರು ಯಾವುದೇ ಕಾರಣಕ್ಕೆ ಕರ್ನಾಟಕ ಬಂದ್‌ಗೆ ಬೆಂಬಲಿಸಬಾರದು. ಸರಕಾರ ಬಹುಮತ ಸಾಬೀತುಪಡಿಸಿದೆ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ಇದೀಗ ಅಧಿಕೃತವಾಗಿ ಆರಂಭಗೊಂಡಿದೆ. ರೈತರ ಸಾಲಮನ್ನಾ ಬಗ್ಗೆ ಎರಡೂ ಪಕ್ಷದ ನಾಯಕರು ಸಮಾಲೋಚನೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದರು.
ಬಿಜೆಪಿ ಮುಂದಾಗಿದ್ದ ‘ಆಪರೇಷನ್ ಕಮಲ’ಕ್ಕೆ ನನ್ನಿಂದ ತೊಂದರೆ ಆಯಿತೆಂದು ಬಿಎಸ್‌ವೈ ಭಾವಿಸಿದಂತಿದೆ. ಆದರೆ, ಪಕ್ಷದ ಒಗ್ಗಟ್ಟಿನಿಂದ ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರ ರಚನೆಯಾಗಿದೆ. ನಮ್ಮ ಎಲ್ಲ ಶಾಸಕರು ಒಗ್ಗಟ್ಟಿನಿಂದ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬಂದಿದೆ. ಸಂಪುಟ ವಿಸ್ತರಣೆಯ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ ಎಂದು ಅವರು ಸ್ಪಷ್ಟಣೆ ನೀಡಿದರು.