ಖಾಸಗಿ ಶಾಲೆಗಳಿಂದ ಸರಕಾರಿ ಶಾಲೆ ಉಳಿಸಲು ಪಾಲಿಕೆ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ
ಬೆಂಗಳೂರು, ಮೇ 25: ಖಾಸಗಿ ಶಾಲೆಗಳ ಹಾವಳಿಯಿಂದ ಸರಕಾರಿ ಶಾಲೆಗಳನ್ನು ರಕ್ಷಿಸುವ ಸಲುವಾಗಿ ಬಿಬಿಎಂಪಿ ತನ್ನ ವ್ಯಾಪ್ತಿಯ ಪಾಲಿಕೆ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸಲಾಗುತ್ತಿದೆ.
ಬೆಂಗಳೂರು ವ್ಯಾಪ್ತಿಯ ಸರಕಾರಿ ಶಾಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಹೀಗಾಗಿಯೆ ತನ್ನ ಶಾಲೆಗಳಲ್ಲಿ ಈ ವರ್ಷದಿಂದ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸಲು ಬಿಬಿಎಂಪಿ ನಿರ್ಧರಿಸಿದೆ. ಅದಕ್ಕಾಗಿ ಖಾಸಗಿ ಶಾಲೆಗಳಲ್ಲಿ ನೀಡಲಾಗುತ್ತಿರುವ ಆಂಗ್ಲ ಮಾಧ್ಯಮ ಶಿಕ್ಷಣದ ಬಗ್ಗೆ ತಿಳಿದುಕೊಳ್ಳಲು ಪ್ರಯುತ್ನಿಸಲಾಗುತ್ತಿದೆ.
ಮೊದಲ ಹಂತವಾಗಿ ಈಗಾಗಲೆ ನರ್ಸರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಶಿಕ್ಷಣ ನೀಡಲಾಗುತ್ತಿದೆ. ಬಿಬಿಎಂಪಿ ನಿರ್ವಹಣೆಯಲ್ಲಿನ 89 ನರ್ಸರಿಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿಗಳಲ್ಲಿ ಕಳೆದ ವರ್ಷ ವ್ಯಾಸಂಗ ಮಾಡಿದ 3,520 ವಿದ್ಯಾರ್ಥಿಗಳು ಅಧ್ಯಯನ ಮಾಡಿದ್ದಾರೆ. 2018-19ನೆ ಸಾಲಿನಲ್ಲಿ ಈ ಸಂಖ್ಯೆ ಹೆಚ್ಚಳವಾಗುವ ನಿರೀಕ್ಷೆಯಿದೆ.
ಶಿಕ್ಷಕರ ನೇಮಕ: ಮುಂದಿನ ವರ್ಷದಿಂದ ಎಲ್ಲ ಪಾಲಿಕೆ ಶಾಲೆಗಳಲ್ಲೂ ಆಂಗ್ಲ ಮಾಧ್ಯಮ ಜಾರಿಗೊಳಿಸಲು ನಿರ್ಧರಿಸಿರುವುದರಿಂದ ಹೊಸದಾಗಿ ಶಿಕ್ಷಕರ ನೇಮಕ ಮಾಡಿಕೊಳ್ಳಬೇಕಿದೆ. ಆಗಿರುವ ಶಿಕ್ಷಕರಿಗೂ ಆಂಗ್ಲ ಮಾಧ್ಯಮದಲ್ಲಿ ಪಾಠ ಮಾಡುವ ಕುರಿತು ತರಬೇತಿ ನೀಡಲಾಗುತ್ತಿದೆ ಎಂದು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷೆ ಗಂಗಮ್ಮ ರಾಜಣ್ಣ ಮಾಹಿತಿ ನೀಡಿದರು.