×
Ad

ಬೆಂಗಳೂರು: ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ಕಾಯಕರ್ತರಿಂದ ಪ್ರತಿಭಟನೆ

Update: 2018-05-26 18:24 IST

ಬೆಂಗಳೂರು, ಮೇ 26: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ನಾಲ್ಕು ವರ್ಷದ ಸಾಧನೆ ಶೂನ್ಯವಾಗಿದ್ದು, ದೇಶದ ಇತಿಹಾಸದಲ್ಲೇ ಪ್ರಥಮ ಭಾರಿಗೆ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾಯಕರ್ತರು ಪ್ರತಿಭಟನೆ ನಡೆಸಿದರು.

ಶನಿವಾರ ನಗರದ ಮೌರ್ಯ ವೃತ್ತದ ಬಳಿ ಜಮಾಯಿಸಿದ ರಾಜಾಜಿನಗರ ವಿಧಾನಸಭಾ ಕ್ಷೇತ್ರ ಮಾಹಿತಿ ತಂತ್ರಜ್ಞಾನ ವಿಭಾಗದ ಕಾಂಗ್ರೆಸ್ ಕಾರ್ಯಕರ್ತರು ಮುಖಕ್ಕೆ ಪ್ರಧಾನಿ ಮೋದಿ ಮುಖವಾಡ ಧರಿಸಿ, ಪಕೋಡ ಮಾರುವ ಮೂಲಕ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರಕಾರ ಕೇವಲ ಶ್ರೀಮಂತರ ಪರವಾಗಿ ಆಡಳಿತ ನಡೆಸುತ್ತಿದೆ. ಗರಿಷ್ಠ ಮುಖಬೆಲೆಯ ನೋಟುಗಳ ಅಮಾನೀಕರಣದಿಂದ ಬಡವರಿಗೆ ತೊಂದರೆಯಾಗಿದೆ. ಇದರ ಜೊತೆಗೆ ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ದರದಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ವಿದೇಶದಲ್ಲಿರುವ ಕಪ್ಪುಹಣ ತಂದು ದೇಶದ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಜಮಾ ಮಾಡುತ್ತೇನೆ. ಪ್ರತಿ ವರ್ಷ 2 ಕೋಟಿ ಉದ್ಯೊಗ ಸೃಷ್ಟಿ ಮಾಡುವುದರ ಜೊತೆಗೆ ಭ್ರಷ್ಟಾಚಾರ ನಿಯಂತ್ರಣ ಮಾಡುತ್ತೇನೆ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಎನ್‌ಡಿಎ ಸರಕಾರ ಜನರನ್ನು ವಂಚಿಸುತ್ತಿದೆ ಎಂದು ಆರೋಪಿಸಿದರು.

ವಿದೇಶಕ್ಕೆ ಪಲಾಯನ ಮಾಡಿರೋ ಲಲಿತ್ ಮೋದಿ, ನೀರವ್ ಮೋದಿ ಮತ್ತು ವಿಜಯ್ ಮಲ್ಯರನ್ನ ಕೇಂದ್ರ ಸರಕಾರ ಬಂಧಿಸಲಿಲ್ಲವೇಕೆ ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು, ಭ್ರಷ್ಟಾಚಾರ ಹಾಗೂ ಜನರ ಹಣ ಲೂಟಿ ಮಾಡಿದ ಭ್ರಷ್ಟರಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News