ಚಿಕ್ಕಮಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕರವೇ ಪ್ರತಿಭಟನೆ
ಚಿಕ್ಕಮಗಳೂರು, ಮೇ 26: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮನ ಬಂದಂತೆ ಆಡಳಿತ ನಡೆಸುತ್ತಿದ್ದು, ಜನಪರ ಯೋಜನೆಗಳ ಜಾರಿಗೆ ಮುಂದಾಗುತ್ತಿಲ್ಲ. ಇದರಿಂದಾಗಿ ದೇಶಾದ್ಯಂತ ಜನತೆ ಪಡಿಪಾಟಲು ಅನುಭವಿಸುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ನಿಯಂತ್ರಣ ಸಂಬಂಧ ಕೇಂದ್ರ ಸರಕಾರ ಯಾವುದೇ ಕಟ್ಟು ನಿಟ್ಟಿನ ಕ್ರಮಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಕಾರ್ಯಕರ್ತರು ಶನಿವಾರ ನಗರದಲ್ಲಿ ಧರಣಿ ನಡೆಸಿದರು.
ಕರವೇ ಜಿಲ್ಲಾಧ್ಯಕ್ಷ ನೂರುಲ್ಲಾ ಖಾನ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಶನಿವಾರ ನಗರದ ತಾಲೂಕು ಕಚೇರಿಯಿಂದ ಹನುಮಂತಪ್ಪ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮೆರವಣಿಗೆಯುದ್ಧಕ್ಕೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರಕಾರ ಜನ ವಿರೋಧಿ ನೀತಿಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.
ಈ ವೇಳೆ ಧರಣಿ ನಿರತರನ್ನುದ್ದೇಶಿಸಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ನೂರುಲ್ಲಾ ಖಾನ್, ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುವ ಮುನ್ನ ದೇಶದ ಜನರಿಗೆ ಸಾಕಷ್ಟು ಭರವಸೆ ನೀಡಿದ್ದರು. ದೇಶದ ಪ್ರತೀ ಪ್ರಜೆಯ ಖಾತೆಗೆ 15 ಲಕ್ಷ ರೂ. ಜಮೆ ಮಾಡುವುದಾಗಿ ಹೇಳಿದ್ದರು, ಕಪ್ಪುಹಣವನ್ನು ತರುವುದಾಗಿ ಭರವಸೆ ನೀಡಿದ್ದರು. ಪ್ರತೀ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ನಿರುದ್ಯೋಗಿಗಳಿಗೆ ಮಾತು ಕೊಟ್ಟಿದ್ದರು. ಬೆಲೆ ಏರಿಕೆಗೆ ಕಡಿವಾಣ ಹಾಕುವುದಾಗಿ ನಂಬಿಸಿದ್ದರು. ಆದರೆ ಕೇಂದ್ರ ಸರಕಾರ 4 ವರ್ಷಗಳ ಅಧಿಕಾರ ಪೂರ್ಣಗೊಳಿಸಿದ್ದರೂ ಈ ಎಲ್ಲ ಭರವಸೆಗಳು ಸುಳ್ಳಾಗಿವೆ. ಈ ಭರವಸೆಗಳು ಪೂರ್ಣಗೊಳ್ಳುತ್ತವೆ ಎಂದು ದೇಶದ ಯಾವೊಬ್ಬನೂ ನಂಬಿಲ್ಲ. ಆದರೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕಲಾಗದಷ್ಟರ ಮಟ್ಟಿಗೆ ಕೇಂದ್ರ ಸರಕಾರ ದಿವ್ಯ ನಿರ್ಲಕ್ಷ್ಯ ವಹಿಸಿರುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದೊಂದು ತಿಂಗಳಲ್ಲಿ 10ಕ್ಕೂ ಹೆಚ್ಚು ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿದೆ. ಇದರಿಂದಾಗಿ ಸಾಮಾನ್ಯ ಜನರು ಸಂಕಷ್ಟಕ್ಕೊಳಗಾಗಿದ್ದು, ಈ ಬೆಲೆ ಏರಿಕೆಗಿಂದಾಗಿ ಎಲ್ಲ ರೀತಿಯ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಡೀಸೆಲ್, ಪೆಟ್ರೋಲ್ ಬ್ಯಾರಲ್‍ಗಳಿಗೆ 50 ರೂ. ಗಿಂತಲೂ ಕಡಿಮೆ ಇದ್ದು, 50 ರೂ.ಗೆ ಸಿಗಬೇಕಾದ ಪೆಟ್ರೋಲ್ 85 ರೂ. ನೀಡಿ ಕೊಳ್ಳಬೇಕಾಗಿದೆ. ಇದನ್ನು ನಿಯಂತ್ರಿಸಲು ಸಾಧ್ಯವಾಗದ ಕೇಂದ್ರ ಸರಕಾರದ ಆಡಳಿತದಿಂದ ಇನ್ನು ಯಾವ ಜನಪರ ಯೋಜನೆಗಳನ್ನೂ ಜಾರಿ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಪ್ರಧಾನಿ ನರೇಂದ್ರ ಕೂಡಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ನೂರುಲ್ಲಾ ಖಾನ್ ಒತ್ತಾಯಿಸಿದರು.
ನಂತರ ಧರಣಿ ನಿರತ ಕರವೇ ಕಾರ್ಯಕತ್ರು ಹಾಗೂ ಮುಖಂಡರು ಪೆಟ್ರೋಲ್, ಡೀಸೆಲ್ ದರ ಏರಿಕೆ ನಿಯಂತ್ರಣಕ್ಕೆ ಕೇಂದ್ರ ಸರಕಾರ ಅಗತ್ಯ ಕ್ರಮ ವಹಿಸಬೇಕೆಂಬ ಮನವಿಯನ್ನು ಜಿಲ್ಲಾಧಿಕಾರಿ ಶ್ರೀರಂಗಯ್ಯ ಅವರಿಗೆ ಸಲ್ಲಿಸಿದರು. ಧರಣಿಯಲ್ಲಿ ನೂರಾರು ಕರವೇ ಕಾರ್ಯಕರ್ತರು ಭಾಗವಹಿಸಿದ್ದರು.